- ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದ ಬಳಿ ಪ್ರತಿಭಟನೆ
- ಬರುವ ಚುನಾವಣೆಯಲ್ಲಿ ಜನ ಕೇಂದ್ರಕ್ಕೆ ಪಾಠ ಕಲಿಸಲಿದ್ದಾರೆ
ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡದೆ ರಾಜ್ಯದ ವಿರುದ್ಧ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು.
ಬೆಂಗಳೂರು ಕೇಂದ್ರ, ದಕ್ಷಿಣ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದ ಬಳಿ ಮಂಗಳವಾರ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಧರಣಿ ಉದ್ದೇಶಿಸಿ ಮಾತನಾಡಿ, “ಬಡವರ ತುತ್ತು ಅನ್ನಕ್ಕೂ ಕೇಂದ್ರ ಸರ್ಕಾರ ಕುತ್ತು ತಂದು ಪಿತೂರಿ ರಾಜಕಾರಣ ಆರಂಭಿಸಿದೆ. ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿರುವ ಸರ್ಕಾರಕ್ಕೆ ಧಿಕ್ಕಾರ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಅನ್ನದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ. ಹಸಿವು ಮುಕ್ತ ರಾಜ್ಯ ಮಾಡಲು ನಾವು ತೀರ್ಮಾನಿಸಿದ್ದೇವೆ. ಅದಕ್ಕಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡಲು ಮುಂದಾಗಿದ್ದೇವೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಅಡ್ಡಿಪಡಿಸಿದೆ. ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದರೂ ನಾವು ಬೇರೆ ರಾಜ್ಯಗಳಿಂದ ಖರೀದಿ ಮಾಡಿ ನೀಡುತ್ತೇವೆ” ಎಂದು ವಾಗ್ದಾಳಿ ನಡೆಸಿದರು.
“ಉಚಿತವಾಗಿ ಅಕ್ಕಿ ನೀಡಿ ಎಂದು ಕೇಳುತ್ತಿಲ್ಲ. ಆದರೂ ಅವರು ತಮ್ಮ ನೀತಿ ಬದಲಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ. ನಮ್ಮ ಮೇಲೆ ಜನರನ್ನು ಎತ್ತಿಕಟ್ಟಲು ಕೇಂದ್ರ ಈ ರೀತಿ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜನ ಕೇಂದ್ರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಲಿದ್ದಾರೆ” ಎಂದರು.
“ಯಡಿಯೂರಪ್ಪ ಅವರು, ಸರ್ಕಾರ ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರು ಸುಮ್ಮನಿರುವುದಿಲ್ಲ ಎಂದಿದ್ದಾರೆ. ಹೋರಾಟ ಮಾಡುವುದಾಗಿ ಹೇಳಿದ್ದಾರೆ. ಯಡಿಯೂರಪ್ಪ, ಬೊಮ್ಮಾಯಿ ಅವರೇ, ನಿಮ್ಮ ಪಕ್ಷ ಹೇಳಿದಂತೆ, ನೀವು ಇನ್ನೂ ಯಾಕೆ ಎಲ್ಲರ ಖಾತೆಗೆ 15 ಲಕ್ಷ ಹಾಕಿಸಿಲ್ಲ, ರೈತರ ಆದಾಯ ಡಬಲ್ ಯಾಕೆ ಮಾಡಿಲ್ಲ, ಯುವಕರಿಗೆ ಯಾಕೆ ಉದ್ಯೋಗ ನೀಡಿಲ್ಲ, ಈ ಬಗ್ಗೆ ನೀವು ಮೊದಲು ಉತ್ತರ ನೀಡಿ, ಹೋರಾಟ ಮಾಡಿ” ಎಂದರು.
“ನಾವು ಕೇಂದ್ರದ ಬಡವರ ವಿರೋಧಿ ನೀತಿ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಆಹಾರ ಬದ್ಧತೆ ವಿಚಾರದಲ್ಲಿ ಯಾರೂ ಹಸಿವಿನಿಂದ ಇರಬಾರದು ಎಂಬುದು ಕಾಂಗ್ರೆಸ್ ಸಂಕಲ್ಪ. ಇಂದು ಕೇಂದ್ರ ಸರ್ಕಾರದ ಬಡವರ ವಿರೋಧಿ ನೀತಿ ವಿರುದ್ಧ ಹೋರಾಟ ಮಾಡುತ್ತಿದ್ದೇವೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಪಡಿತರದಲ್ಲಿ ಅಕ್ಕಿ ಜೊತೆಗೆ ರಾಗಿ, ಜೋಳ ನೀಡಲಿ: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಗ್ರಹ
“ಸೋನಿಯಾ ಗಾಂಧಿ ಅವರು ಯುಪಿಎ ಸರ್ಕಾರದ ಅಧ್ಯಕ್ಷರಾಗಿ, ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಆಹಾರ ಭದ್ರತಾ ಕಾಯ್ದೆ ಜಾರಿ ಮಾಡಿ ನಮಗೆ ಆಹಾರವನ್ನು ಸಂವಿಧಾನಬದ್ಧ ಹಕ್ಕಾಗಿ ನೀಡಿದರು. ಆ ಸಂವಿಧಾನದ ಹಕ್ಕಿನ ಮೂಲಕ ನಾವು ದೇಶದ ಜನರಿಗೆ ಅಕ್ಕಿ ಹಂಚಲಾಗುತ್ತಿದೆ” ಎಂದರು.
ಕೇಂದ್ರ ಸರ್ಕಾರ ಪ್ರತಿ ಕೆ.ಜಿ ಅಕ್ಕಿಗೆ ಸುಮಾರು 28 ರೂ. ಉಳಿದ 3-4 ರೂ. ರಾಜ್ಯ ಸರ್ಕಾರ ಭರ್ತಿ ಮಾಡಿ ಬಡವರಿಗೆ ಅಕ್ಕಿ ಹಂಚಲಾಗುತ್ತಿದೆ. ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಅನ್ನಭಾಗ್ಯ ಯೋಜನೆ ಜಾರಿ ಮಾಡಿ ಬಡ ಕುಟುಂಬದ ಪ್ರತಿ ವ್ಯಕ್ತಿಗೆ 5 ಕೆ ಜಿ ಅಕ್ಕಿ ನೀಡಿತ್ತು. ನಂತರ ಸಿದ್ದರಾಮಯ್ಯ ಅವರು ಅದನ್ನು 7 ಕೆ.ಜಿಗೆ ಏರಿಸಿದ್ದರು. ನಾವು ನಮ್ಮ ಚುನಾವಣೆ ಪ್ರಣಾಳಿಕೆಯಲ್ಲಿ 10 ಕೆ ಜಿ ಅಕ್ಕಿ ನೀಡುವುದಾಗಿ ಹೇಳಿತ್ತು. ಕೊಟ್ಟ ಮಾತು ಉಳಿಸಿಕೊಳ್ಳುವುದು ಕಾಂಗ್ರೆಸ್ ಸಂಕಲ್ಪ. ಕೆಲವರು ನಮಗೆ ಅಕ್ಕಿ ಬದಲು ರಾಗಿ, ಜೋಳ ಕೇಳುತ್ತಿದ್ದಾರೆ. ಪರಿಸ್ಥಿತಿ ನೋಡಿ ತೀರ್ಮಾನ ಮಾಡುತ್ತೇವೆ” ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಸಚಿವ ರಾಮಲಿಂಗಾ ರೆಡ್ಡಿ, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ತ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್, ಮಾಜಿ ಸಚಿವೆ ರಾಣಿ ಸತೀಶ್ ಮತ್ತಿತರರು ಭಾಗವಹಿಸಿದ್ದರು.