ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೋವಿಡ್ ಹಗರಣಕ್ಕೆ ಸಂಬಂಧಪಟ್ಟಂತೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗ ಹೇಳಿದೆ. ಅಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಬಿ ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಶಿಫಾರಸು ಮಾಡಿದೆ.
2020ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊರೋನಾ ಸೋಂಕು ನಿಭಾಯಿಸುವಲ್ಲಿ 7,000 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ನಡೆದಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು 2024 ಆಗಸ್ಟ್ 31 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿತ್ತು. ಈಗ ಅಕ್ರಮದ ಸರಣಿ ಸಂಗತಿಗಳು ವರದಿಯಲ್ಲಿ ಒಂದೊಂದಾಗಿ ಬಯಲಾಗುತ್ತಿವೆ.
ಚೀನಾದ ಸಂಸ್ಥೆಗಳಿಂದ 3 ಲಕ್ಷ ಪಿಪಿಇ ಕಿಟ್‌ಗಳನ್ನು ನೇರವಾಗಿ ಖರೀದಿಸುವ ಕುರಿತು ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶಿಸಿದ್ದರು. ಎರಡು ಚೀನಾ ಸಂಸ್ಥೆಗಳಿಂದ ಪಿಪಿಇ ಕಿಟ್‌ಗಳನ್ನು ದುಬಾರಿ ದರದಲ್ಲಿ ಕೊಂಡುಕೊಳ್ಳಲಾಗಿದೆ ಎಂಬುದು ಬಯಲಾಗಿದೆ. ಯಡಿಯೂರಪ್ಪ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದ ಬಿ ಶ್ರೀರಾಮುಲು ವಿರುದ್ಧ ಕಾನೂನು ಕ್ರಮ ಜರುಗಿಸಲು ಶಿಫಾರಸು ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗದ ವರದಿಯಲ್ಲಿ ದಾಖಲೆ ಸಮೇತ ಶಿಫಾರಸು ಮಾಡಿದೆ.