ಲೋಕಸಭಾ ಚುನಾವಣೆಯ ಫಲಿತಾಂಶ ಬಹುತೇಕ ಹೊರಬಿದ್ದಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಗೆಲುವು ಸಾಧಿಸಿದ್ದ ಸಂಸದರು ಈ ಬಾರಿ ಚುನಾವಣೆಯಲ್ಲಿ ಸೋಲುಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ತನ್ನ ಭದ್ರಕೋಟೆಯನ್ನಾಗಿ ಮಾಡಿಕೊಂಡಿದ್ದ ಡಿ.ಕೆ.ಸುರೇಶ್ ಈ ಬಾರಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ವಿರುದ್ಧ ಸೋಲು ಅನುಭವಿಸಿದ್ದಾರೆ.
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕ, ಕೇಂದ್ರ ಸಚಿವ ಭಗವಂತ ಖೂಬಾ ಸೋಲುಂಡಿದ್ದಾರೆ. ಮೊದಲ ಬಾರಿಗೆ ಸ್ಪರ್ಧಿಸಿದ್ದ ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಗೆಲುವು ಸಾಧಿಸಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೇಲ್ ವಿರುದ್ದ ಸೋಲು ಕಂಡಿದ್ದಾರೆ.
ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಡಾ. ಉಮೇಶ ಜಾಧವ ಸ್ಪರ್ಧಿಸಿದ್ದರು. ಕಾಂಗ್ರೆಸ್ನ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲುವು ಸಾಧಿಸಿದ್ದು, ಹಾಲಿ ಸಂಸದ ಉಮೇಶ್ ಜಾಧವ ಸೋಲುಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಜ್ಯ ರಾಜಕಾರಣದಿಂದ ಕೇಂದ್ರಕ್ಕೆ ಹಾರಿದ ಕರ್ನಾಟಕದ ಮೂವರು ಮಾಜಿ ಸಿಎಂಗಳು
ಚಿಕ್ಕೋಡಿಯಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹಾಗೂ ಕಾಂಗ್ರೆಸ್‌ನಿಂದ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಮೊದಲ ಬಾರಿಗೆ ಕಣದಲ್ಲಿದ್ದು, ಭರ್ಜರಿ ಗೆಲುವು ಸಾಧಿಸಿದ್ದಾರೆ. ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಸೋತಿದ್ದಾರೆ.