ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ 15%ರಷ್ಟು ಮೀಸಲಾತಿ ಒದಗಿಸುವ ನಿರ್ಧಾರವು ಈಗ ಕೈಗೊಂಡ ತೀರ್ಮಾನವಲ್ಲ. 2019ರಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದಾಗ ಸಂಪುಟ ಉಪ ಸಮಿತಿ ರಚಿಸಲಾಗಿತ್ತು. ಆ ಉಪ ಸಮಿತಿಯು 15% ಮೀಸಲಾತಿ ಶಿಫಾರಸ್ಸು ಮಾಡಿತ್ತು ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ 15%ರಷ್ಟು ಮೀಸಲಾತಿ ಇದೆ. ಅದೇ ರೀತಿ ರಾಜ್ಯದಲ್ಲೂ ನೀಡಬೇಕು ಎಂಬ ಬೇಡಿಕೆ ಇತ್ತು. ಹೀಗಾಗಿ, ಕೇಂದ್ರದ ಮಾದರಿಯನ್ನೇ ಅನುಸರಿಸಿ ಮೀಸಲಾತಿ ನೀಡಲು ನಿರ್ಧರಿಸಲಾಗಿದೆ” ಎಂದು ತಿಳಿಸಿದ್ದಾರೆ.
“2019ರಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು. ಇದೀಗ ಸಂಪುಟದ ಮುಂದೆ ಬಂದು ಒಪ್ಪಿಗೆ ದೊರೆತಿದೆ. ಈಗಾಗಲೇ ಇದ್ದ ಶೇ.10 ರಷ್ಟು ಮೀಸಲಾತಿ ಪ್ರಮಾಣವನ್ನು ಶೇ.15ಕ್ಕೆ ಹೆಚ್ಚಿಸಲಾಗಿದೆ” ಎಂದು ಅವರು ಹೇಳಿದ್ದಾರೆ.
“ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಚ್ಚಿನ ಬಡ ಕುಟುಂಬಗಳಿವೆ. ವಸತಿ ರಹಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮೀಸಲಾತಿ ಪ್ರಮಾಣ ಹೆಚ್ಚಿಸುವ ಬೇಡಿಕೆ ಇತ್ತು. 2021 ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ಕೂಡ ಶೇ.15 ರಷ್ಟು ಮೀಸಲಾತಿ ಜಾರಿಗೊಳಿಸಬೇಕೆಂದು ತಿಳಿಸಿತ್ತು. ಇದೆಲ್ಲ ವಾಸ್ತವ ಅಂಶ ತಿಳಿಯದೆ ಪ್ರತಿಪಕ್ಷಗಳು ಅನಗತ್ಯ ಟೀಕೆ ಮಾಡುತ್ತಿವೆ. ಇದು ಅವರಿಗೆ ಶೋಭೆ ತರುವುದಿಲ್ಲ” ಎಂದಿದ್ದಾರೆ.