ಲೋಕಸಭಾ ಚುನಾವಣೆ ವೇಳೆಗೆ ರಾಜ್ಯದಲ್ಲಿ ಮೂರು ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿಸುವ ಬಗ್ಗೆ ಪದೇ ಪದೇ ಚರ್ಚೆಯಾಗುತ್ತಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಮೂವರು ಉಪಮುಖ್ಯಮಂತ್ರಿ ನೇಮಕದ ಬಗ್ಗೆ ಹೈಕಮಾಂಡ್ ಮುಂದೆ ಯಾವುದೇ ಪ್ರಸ್ತಾಪವಿಲ್ಲ” ಎಂದು ಹೇಳಿದ್ದಾರೆ.
ಮುಂದಿನ ಚುನಾವಣೆಯಲ್ಲಿ ದಲಿತ ಹಾಗೂ ಹಿಂದುಳಿದ ಸಮುದಾಯಗಳ ಮತಗಳನ್ನು ಭದ್ರಪಡಿಸಿಕೊಳ್ಳಲು ಮೂರು ಉಪಮುಖ್ಯಮಂತ್ರಿ ಸ್ಥಾನ ಸೃಷ್ಟಿಸಿ, ಮೂವರಿಗೆ ಉಪಮುಖ್ಯಮಂತ್ರಿ ಹುದ್ದೆ ಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರು ಒತ್ಥಾಯಿಸುತ್ತಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ, ಅಂತಹ ಯಾವುದೇ ವಿಚಾರ ಹೈಕಮಾಂಡ್ ಮುಂದೆ ಇಲ್ಲ. ಅದೆಲ್ಲವೂ ಊಹಾಪೋಹ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
“ಚುನಾವಣೆ ಸಂದರ್ಭದಲ್ಲಿ ಇಂತಹ ವಿಚಾರ ಚರ್ಚೆಗೆ ಬರಬಾರದು. ಸರ್ಕಾರ ನಡೆಸುವ, ಸಮಸ್ಯೆಗಳನ್ನು ಪರಿಹರಿಸುವ ಹಾಗೂ ಗ್ಯಾರಂಟಿಗಳನ್ನು ಜಾರಿಗೊಳಿಸುವ ಬಗ್ಗೆ ಗಮನ ಹರಿಸಬೇಕು” ಎಂದು ಅವರು ಹೇಳಿದ್ದಾರೆ.