ಸಂಸತ್ತಿನ ಬಜೆಟ್ ಅಧಿವೇಶನ ಜುಲೈ 22ರಿಂದ ಆಗಸ್ಟ್ 12ರವರೆಗೆ ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23ರಂದು ಬಜೆಟ್ ಮಂಡಿಸಲಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ತಿಳಿಸಿದ್ದಾರೆ.
“ಭಾರತ ಸರ್ಕಾರದ ಶಿಫಾರಸಿನ ಮೇರೆಗೆ ಗೌರವಾನ್ವಿತ ರಾಷ್ಟ್ರಪತಿಗಳು, 2024ರ ಜುಲೈ 22ರಿಂದ ಆಗಸ್ಟ್ 12 ರವರೆಗೆ ಬಜೆಟ್ ಅಧಿವೇಶನ ಕರೆಯುವ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ” ಎಂದು ರಿಜಿಜು ಹೇಳಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ತನ್ನ 3ನೇ ಬಾರಿಯ ಅಧಿಕಾರಾವಧಿಯಲ್ಲಿ ಮಂಡಿಸಲಿರುವ ಮೊದಲನೇ ಬಜೆಟ್ ಇದಾಗಿದೆ.
ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು, “ಪ್ರಮುಖ ಸಾಮಾಜಿಕ ಮತ್ತು ಆರ್ಥಿಕ ನಿರ್ಧಾರಗಳು ಬಜೆಟ್‌ನ ಪ್ರಮುಖ ಅಂಶಗಳಾಗಿರಲಿವೆ” ಎಂದು ಹೇಳಿದ್ದಾರೆ.