ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 94.73 ಕೋಟಿ ರೂ. ಹಣ ವರ್ಗಾವಣೆ ಅಕ್ರಮದಲ್ಲಿ ಭಾಗಿಯಾದ ಆರೋಪಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಸಚಿವ ನಾಗೇಂದ್ರ ಅವರ ತಲೆ ತಂಡಕ್ಕೆ ಒತ್ತಡ ಉಂಟಾಗಿತ್ತು. ಇದರ ಬೆನ್ನಲ್ಲೇ ಇಡೀ ಆಕ್ರಮದ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿತ್ತು. ಮತ್ತೊಂದೆಡೆ ಯೂನಿಯನ್ ಬ್ಯಾಂಕ್ ಈ ಬಗ್ಗೆ ಸಿಬಿಐ ತನಿಖೆ ನಡೆಸಲು ಕೋರಿ ಪತ್ರ ಬರೆದಿತ್ತು.
ಈ ಬೆಳವಣಿಗೆಯ ನಡುವೆ ಅಕ್ರಮದ ತನಿಖೆಗೆ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ರಚಿಸಿದ್ದ ಎಸ್ಐಟಿಯು ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಸಚಿವ ಬಿ. ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್ ಹಾಗೂ ನಾಗೇಶ್ವರರಾವ್ ಅವರನ್ನು ಬಂಧಿಸಿತ್ತು.
ಸಚಿವ ನಾಗೇಂದ್ರ ಅವರ ಆಪ್ತರು ಬಂಧನವಾಗುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಗೃಹ ಮಂತ್ರಿ ಪರಮೇಶ್ವರ್ ಅವರೊಂದಿಗೆ ಮಾತುಕತೆ ನಡೆಸಿ ಬಳಿಕ ಅಧಿಕಾರಿಗಳಿಂದ ಹಗರಣದ ಕುರಿತಂತೆ ಸಮಗ್ರ ಮಾಹಿತಿ ಪಡೆದುಕೊಂಡರು. ಆನಂತರ ಸಚಿವ ನಾಗೇಂದ್ರ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಮಾತುಕತೆ ನಡೆಸಿ ತಕ್ಷಣವೇ ಅವರಿಗೆ ರಾಜೀನಾಮೆ ಕೊಡುವಂತೆ ಸೂಚಿಸಿದರು ಎಂದು ಹೇಳಲಾಗಿದೆ.
ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಸಚಿವ ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದನ್ನು ಅಂಗೀಕರಿಸುವಂತೆ ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ರವಾನಿಸಿದ್ದಾರೆ. ತನಿಖೆ ಪೂರ್ಣಗೊಂಡ ನಂತರ ನಾಗೇಂದ್ರ ದೋಷಮುಕ್ತರಾಗಿ ಹೊರಬಂದರೆ ಮತ್ತೆ ಸಂಪುಟದಲ್ಲಿ ಅವಕಾಶ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಮತ್ತೊಂದೆಡೆಯಲ್ಲಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಹಣ ವರ್ಗಾವಣೆ ಪ್ರಕರಣ ದಲ್ಲಿ ನಾಗೇಂದ್ರ ಅವರ ಪಾತ್ರವಿರುವ ಬಗ್ಗೆಯೂ ಪುರಾವೆಗಳನ್ನು ಕಲೆಹಾಕಿದೆ. ಜೊತೆಗೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಬೆಂಗಳೂರು ಪೂರ್ವ ವಲಯದ ಡೆಪ್ಯುಟಿ ಜನರಲ್ ಮ್ಯಾನೇಜರ್ (ಡಿಜಿಎಂ) ಮಹೇಶ್ ಜೆ. ಅವರ ದೂರು ಆಧರಿಸಿ ಸಿಬಿಐ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದು, ಬಂಧಿತ ಆರೋಪಿಗಳು ಹಾಗೂ ಸಚಿವ ನಾಗೇಂದ್ರ ಅವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ.
