ವಿಧಾನ ಪರಿಷತ್‌ನ ಮೂರು ಸ್ಥಾನಗಳಿಗೆ ಜೂ.30ರಂದು ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ತನ್ನ ಮೂವರು ಅಭ್ಯರ್ಥಿಗಳನ್ನು ಸೋಮವಾರ ಘೋಷಿಸಿದೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ, ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರು ಹಾಗೂ ಸಚಿವ ಎನ್ ಎಸ್ ಬೋಸರಾಜು ಹೆಸರನ್ನು ಕಾಂಗ್ರೆಸ್ ಪ್ರಕಟಿಸಿದೆ.
ವಿಧಾನ ಪರಿಷತ್‌ನ ಮೂರು ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಗೆ ನಾಳೆ (ಜೂ.20) ಅಂತಿಮ ದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಮಾಡಿದೆ. ನಾಳೆ ಈ ಮೂವರೂ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಬಾಬುರಾವ್ ಚಿಂಚನಸೂರ್‌ಗೆ ಟಿಕೆಟ್ ಇಲ್ಲ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆ ಮಾಡಿ ಸೋಲನುಭವಿಸಿದ್ದ ಬಾಬುರಾವ್ ಚಿಂಚನಸೂರ್ ಸ್ಥಾನಕ್ಕೆ ಈಗ ತಿಪ್ಪಣ್ಣ ಕಮಕನೂರ ಆಯ್ಕೆ ಮಾಡಲಾಗಿದೆ. ಪ್ರಸ್ತುತ ಬಾಬುರಾವ್ ಚಿಂಚನಸೂರ್ ಅವರಿಗೆ ಅನಾರೋಗ್ಯದ ಕಾರಣ ಕಾಂಗ್ರೆಸ್ ಟಿಕೆಟ್ ಕೈತಪ್ಪಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆಯಂತೆ ತಿಪ್ಪಣ್ಣ ಕಮಕನೂರಗೆ ಟಿಕೆಟ್ ನೀಡಲಾಗಿದೆ. ಆದರೆ, ತಮಗೇ ಅವಕಾಶ ನೀಡಬೇಕೆಂದು ಪಟ್ಟು ಹಿಡಿದಿದ್ದ ಬಾಬುರಾವ್ ಚಿಂಚನಸೂರಗೆ ನಿರಾಶೆಯಾಗಿದೆ. ಕೋಲಿ ಸಮಾಜದ ಮತ್ತೊಬ್ಬ ನಾಯಕ ತಿಪ್ಪಣ್ಣ ಕಮಕನೂರಗೆ ರಾಜ್ಯ ರಾಜಕಾರಣಕ್ಕೆ ಪ್ರವೇಶ ಮಾಡಲು ಅವಕಾಶ ಒದಗಿ ಬಂದಿದೆ.
