ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿರುವ ಬಜೆಟ್‌ನಲ್ಲಿ ಹೊಸ ಕಾರ್ಯಕ್ರಮಗಳಿಗೆ ಹಾಗೂ ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಜನರಿಗೆ ಹೊರೆಯಾಗದ ರೀತಿಯಲ್ಲಿ ಸಂಪನ್ಮೂಲ ಕ್ರೋಡೀಕರಣದ ಮೂಲಗಳನ್ನು ಸ್ಪಷ್ಟವಾಗಿ ಎಲ್ಲಿಯೂ ವಿವರಿಸಿಲ್ಲ, ಆ ಮೂಲಕ ಇದೊಂದು ತೋರಿಕೆಯ ಹಾಗೂ ಜನರ ಕಿವಿಗೆ ಹೂ ಮುಡಿಸುವ ಬಜೆಟ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟೀಕಿಸಿದ್ದಾರೆ.
“ಕೃಷಿಕರು, ಕಾರ್ಮಿಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಎನ್‌ಎಚ್‌ಎಂ ನೌಕರರು ಸೇರಿದಂತೆ ಶ್ರಮಿಕ ವರ್ಗಗಳನ್ನು ಕಡೆಗಣಿಸಿ ಅಧಿಕಾರಕ್ಕೆ ಬರುವ ಮುನ್ನ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಯಾವುದೇ ಅಂಶಗಳನ್ನು ಬಜೆಟ್ ನಲ್ಲಿ ಕಾರ್ಯಗತಗೊಳಿಸಲು ಯಾವುದೇ ಹೊಸ ಭರವಸೆಯ ಹೆಜ್ಜೆ ಇಡದೇ ಕೊಟ್ಟ ಮಾತು ತಪ್ಪಿದ ಜನ ವಿರೋಧಿ ಬಜೆಟ್ ಸಿದ್ದರಾಮಯ್ಯನವರು ಮಂಡಿಸಿದ್ದಾರೆ” ಎಂದು ಎಕ್ಸ್ ತಾಣದಲ್ಲಿ ಬರೆದುಕೊಂಡಿದ್ದಾರೆ.
“ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳು ಕೇವಲ ಕಾಗದದಲ್ಲೇ ಉಳಿಯುವ ಸಾಧ್ಯತೆ ಗೋಚರವಾಗುತ್ತಿದೆ. ‘ಹೇಳುವುದು ಒಂದು ಮಾಡುವುದು ಇನ್ನೊಂದು’ ಎಂಬಂತೆ ಈ ಬಜೆಟ್ ಆಗಬಾರದು, ಕಳೆದ ಬಜೆಟ್ ನಲ್ಲಿ ಘೋಷಣೆಯಾಗಿದ್ದವೆಲ್ಲವೂ ಘೋಷಣೆಯಾಗಿಯೇ ಉಳಿದಿದೆ, ಈ ಬಜೆಟ್ ಗೂ ಅದೇ ಗತಿ ಆಗುವ ಸಾಧ್ಯತೆಯೇ ಹೆಚ್ಚು ಎನ್ನುವುದು ರಾಜ್ಯದ ದಯನೀಯ ಆರ್ಥಿಕ ಪರಿಸ್ಥಿತಿ ಹೇಳುತ್ತಿದೆ” ಎಂದಿದ್ದಾರೆ.
“ತನ್ನ ತೆರಿಗೆ ಪಾಲನ್ನು ಪಡೆಯುವಲ್ಲಿ ಎಡವಿ ಬಿದ್ದಿರುವ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುವ ಅಂಶಗಳನ್ನು ಸೇರಿಸಿಕೊಂಡು ರಾಜ್ಯದ ಆರ್ಥಿಕ ಸ್ಥಿತಿಯ ನಿರ್ವಹಣೆಯ ವೈಫಲ್ಯವನ್ನು ಮುಚ್ಚಿಕೊಳ್ಳಲು ಹೊರಟಿದ್ದಾರೆ” ಎಂದು ಕಿಡಿಕಾರಿದ್ದಾರೆ.
“ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸೋ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ. ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಿರುವ ಬಜೆಟ್. ಶಿಕ್ಷಣದ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಯಾವುದೇ ಕೊಡುಗೆ ನೀಡಿಲ್ಲ. ಉದ್ಯೋಗ ಸೃಷ್ಟಿಗೆ ಅವಕಾಶವಿರುವ ಕೈಗಾರಿಕೆಗಳಿಗೆ ಉತ್ತೇಜನವೇ ಇಲ್ಲ” ಎಂದಿದ್ದಾರೆ.