ವಕ್ಫ್ ಆಸ್ತಿ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್ಗಳನ್ನು ತಕ್ಷಣವೇ ವಾಪಸ್ ಪಡೆಯಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ.
ಕಂದಾಯ ಇಲಾಖೆ, ಅಲ್ಪಸಂಖ್ಯಾತರ ಕಲ್ತಾಣ ಇಲಾಖೆ ಹಾಗೂ ಮತ್ತು ವಕ್ಫ್ ಮಂಡಳಿಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದೀರ್ಘ ಸಭೆ ನಡೆಸಿದ್ದಾರೆ. “ನೋಟಿಸ್ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮ ಸರಿಯಲ್ಲ. ವಕ್ಫ್ ವಿಚಾರವನ್ನು ಜೆಡಿಎಸ್ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನ ನಡೆಯುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ಇಂತಹ ವಿಚಾರಗಳಲ್ಲಿ ಅಧಿಕಾರಿಗಳು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್ಗಳನ್ನು ತಕ್ಷಣ ವಾಪಸ್ ಪಡೆಯಬೇಕು. ಜೊತೆಗೆ, ಯಾವುದೇ ಮಾಹಿತಿ ಕೊಡದೆ ಪಹಣಿಯಲ್ಲಿ ಎಂಥದ್ದೇ ತಿದ್ದುಪಡಿ ಮಾಡಿದ್ದರೂ, ಅದರನ್ನು ತಕ್ಷಣ ರದ್ದು ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ವರದಿ ಓದಿದ್ದೀರಾ?: ‘ವಕ್ಫ್ ಆಸ್ತಿ ಅಲ್ಲಾಹನದ್ದು, ಮರಳಿ ಪಡೆಯಲು ಕಾಂಪ್ರಮೈಸ್ ಬೇಡ’ ಎಂದಿದ್ದ ಬೊಮ್ಮಾಯಿ; ಇಲ್ಲಿದೆ ದಾಖಲೆ
ಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ವಕ್ಫ್ ಮಂಡಳಿಯ ಸಿಇಒ ಜಿಲಾನಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶ಼ಿ ನಸೀರ್ ಅಹಮದ್, ಅಲ್ಫ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್ ಮುಂತಾದವರು ಸಭೆಯಲ್ಲಿ ಹಾಜರಿದ್ದರು.