ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಶಕ್ತಿ ತುಂಬಲು ಅನೇಕ ಕಾರ್ಯಕ್ರಮ ರೂಪಿಸಿದೆ. ಪಕ್ಷದ ಆಚಾರ ವಿಚಾರ ಹಾಗೂ ಯೋಜನೆಗಳನ್ನು ರಾಜ್ಯದ ಮೂಲೆ ಮೂಲೆಯಲ್ಲಿ ಪ್ರಚಾರ ಮಾಡಿ, ಆಗ 2028ರಲ್ಲೂ ನಮ್ಮ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನದಲ್ಲಿ ಗುರುವಾರ ನಡೆದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, “ಕಾಂಗ್ರೆಸ್ ಪಕ್ಷ ಯಾವುದೇ ಕಾರ್ಯಕ್ರಮ ರೂಪಿಸಿದರು ಅದು ಮಹಿಳಾ ಕೇಂದ್ರಿತ ಕಾರ್ಯಕ್ರಮಗಳಾಗಿರುತ್ತವೆ. ಮಹಿಳೆಯರಿಗೆ ಶಕ್ತಿ ತುಂಬಲು ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ” ಎಂದರು.
“ಗ್ಯಾರಂಟಿಗಳನ್ನು ಬಳಸಿಕೊಂಡು ಈ ಯೋಜನೆಗಳ ಫಲಾನುಭವಿಗಳಿಗೆ ಕಾಂಗ್ರೆಸ್ ಸರ್ಕಾರದ ಕೊಡುಗೆಗಳನ್ನು ಮನದಟ್ಟು ಮಾಡಿ. ಆಮೂಲಕ ತಳಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟನೆ ಮಾಡಿ. ಆಗ ಬಿಜೆಪಿಯವರು ಏನೇ ತಿಪ್ಪರಲಾಗ ಹಾಕಿದರೂ 2028ಕ್ಕೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ” ಎಂದರು.
ನನಗೆ ರಾಜಕೀಯ ಚದುರಂಗ ಗೊತ್ತಿದೆ
“ಯಾವ ರೀತಿ ರಾಜಕಾರಣ ಮಾಡಬೇಕು, ಅವರು ಏನೇ ಚದುರಂಗ ಆಟವಾಡಿದರೂ ಹೇಗೆ ಚೆಕ್ ಮೇಟ್ ನೀಡಬೇಕು ಎಂದು ನನಗೆ ಗೊತ್ತಿದೆ. ರಾಜಕಾರಣ ಫುಟ್ಬಾಲ್ ಅಲ್ಲ. ಚದುರಂಗದಾಟ. ನೀವು ಮಹಿಳೆಯರು ಪಂಚಾಯ್ತಿ, ಬೂತ್ ಮಟ್ಟದಲ್ಲಿ ಮಹಿಳೆಯರನ್ನು ಸಂಘಟನೆ ಮಾಡಿ. ಮತ್ತೆ ನಾವು ರಾಜ್ಯದಲ್ಲಿ ಅಧಿಕಾರಕ್ಕೆ ಯಾಕೆ ಬರುವುದಿಲ್ಲ ನೋಡುತ್ತೇನೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮಹಾ’ ಚುನಾವಣೆಗಾಗಿ ಒಂದಾದ ಮನುವಾದಿಗಳು, ಒಂದಾಗದ ಜಾತ್ಯತೀತರು
ರಾಮಲಿಂಗಾ ರೆಡ್ಡಿ ಜತೆ ಚರ್ಚೆ ಮಾಡದೇ ಸೌಮ್ಯ ಅವರ ಹೆಸರು ಸೂಚಿಸಿದೆ
“ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸ್ಥಾನಕ್ಕೆ ನಾವು ನಾಲ್ಕೈದು ಹೆಸರು ಚರ್ಚೆ ಮಾಡಿದ್ದೆವು. ನಾನು ಸೌಮ್ಯರೆಡ್ಡಿ ಅವರ ಹೆಸರು ಸೂಚಿಸುವಾಗ ಆಕೆಯ ಜತೆಗಾಗಲಿ, ಅವರ ತಂದೆ ರಾಮಲಿಂಗಾ ರೆಡ್ಡಿ ಅವರ ಜತೆಗಾಗಲಿ ಚರ್ಚೆ ಮಾಡಲಿಲ್ಲ. ಸೌಮ್ಯ ರೆಡ್ಡಿ ಅವರು ಲೋಕಸಭೆ ಟಿಕೆಟ್ ನೀಡಿ ಎಂದಿರಲಿಲ್ಲ. ನಾನು ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಬಲವಂತ ಮಾಡಿ ಚುನಾವಣೆಗೆ ಸ್ಪರ್ಧಿಸುವಂತೆ ಮಾಡಿದ್ದೆವು. ಸೌಮ್ಯರೆಡ್ಡಿ ಅವರನ್ನು ಈ ಸ್ಥಾನಕ್ಕೆ ಆಯ್ಕೆ ಮಾಡಿದಾಗ ಅನೇಕರು ಟೀಕೆ ಮಾಡಿದರು. ಆದರೂ ನೀಡಿದ್ದೇವೆ. ಕಾರಣ ಬೆಂಗಳೂರಿನಲ್ಲಿ ರಾಜಕಾರಣ ಮಾಡುವುದು ಅಷ್ಟು ಸುಲಭವಲ್ಲ. ಪಕ್ಷಕ್ಕಾಗಿ ಅವರಿಗೆ ಜವಾಬ್ದಾರಿ ನೀಡುತ್ತಿದ್ದೇವೆ” ಎಂದರು.

ರಾಜಕೀಯ ಶಕ್ತಿ ಕೊಡಿ, ನಿಮಗೆ ಆರ್ಥಿಕ ಶಕ್ತಿ ನಾವು ಕೊಡುತ್ತೇವೆ: ಸಿಎಂ
“2028ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಮುಂದುವರೆಸುತ್ತೇವೆ. ಮಹಿಳೆಯರು ಜಾತ್ಯತೀತತೆ ಮತ್ತು ಸಾಮಾಜಿಕ ನ್ಯಾಯದ ರಕ್ಷಣೆಗೆ ಮುಂದಾಗಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
“ಮಹಿಳಾ ಮೀಸಲಾತಿ ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಮಹಿಳೆಯರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾಳಜಿ ಇರುವುದು ಕಾಂಗ್ರೆಸ್ಸಿಗೆ ಮಾತ್ರ. ಹೀಗಾಗಿ ಎಲ್ಲ ಜಾತಿ, ಧರ್ಮದ ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಗ್ಯಾರಂಟಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತಂದಿದ್ದು ನಾವು. ಇದನ್ನು ವಿರೋಧಿಸಿದ್ದು ಬಿಜೆಪಿ. ರಾಜ್ಯದ ಒಂದು ಕೋಟಿ 21 ಲಕ್ಷ ಕುಟುಂಬಗಳಿಗೆ ಪ್ರತಿ ತಿಂಗಳು ಆರ್ಥಿಕ ಶಕ್ತಿ ನೀಡುತ್ತಿರುವುದು ನಾವು. ಬಿಜೆಪಿಯವರು ಅತ್ತೆ ಸೊಸೆ ಜಗಳ ಆಡ್ತಾರೆ ಎನ್ನುವ ಸುಳ್ಳು ನೆಪ ಮುಂದಿಟ್ಟು ಮಹಿಳೆಯರ ಖಾತೆಗೆ ಹೋಗುವ ಹಣವನ್ನು ನಿಲ್ಲಿಸಲು ಷಡ್ಯಂತ್ರ ನಡೆಸಿತು” ಎಂದು ಟೀಕಿಸಿದರು.
“ಆದರೆ ಗೃಹಲಕ್ಷ್ಮಿ ಹಣದಲ್ಲಿ ಅತ್ತೆ ಸೊಸೆಗೆ ಬಳೆ ಅಂಗಡಿ ಹಾಕಿಕೊಟ್ಟ, ಹೊಲಿಗೆ ಯಂತ್ರ ಕೊಡಿಸಿದ ಉದಾಹರಣೆಗಳು ಸಾಕಷ್ಟಿವೆ. 2028ರಲ್ಲೂ ನಾವೇ ಅಧಿಕಾರಕ್ಕೆ ಬಂದು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಗ್ಯಾರಂಟಿ ಕಾರ್ಯಕ್ರಮಗಳನ್ನು ಮುಂದುವರೆಸುತ್ತೇವೆ. ನೀವು ನಮಗೆ ರಾಜಕೀಯ ಶಕ್ತಿ ಕೊಡಿ. ನಾವು ನಿಮಗೆ ಆರ್ಥಿಕ ಶಕ್ತಿ ನೀಡುವುದನ್ನು ಮುಂದುವರೆಸುತ್ತೇವೆ” ಎಂದು ಭರವಸೆ ಸಿಎಂ ನೀಡಿದರು.
“ನಮ್ಮ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಬಂದಿದ್ದಾರೆ. ಅವರು ಮಹಿಳಾ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಆರಂಭಿಸಿದ್ದಾರೆ. ನೀವು ಕೂಡ ಸದಸ್ಯತ್ವ ಮಾಡಿ. ಯಾರು ಹೆಚ್ಚಿಗೆ ಸದಸ್ಯತ್ವ ಮಾಡುತ್ತೀರೋ ಅವರಿಗೆ ಸ್ಥಾನಮಾನ ನೀಡಲಾಗುವುದು. ರಾಜ್ಯ ಮಟ್ಟ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಅಧಿಕಾರ ನೀಡುತ್ತಿದ್ದೇವೆ. ಪ್ರತಿ ಮೂವರಲ್ಲಿ ಓಬ್ಬ ಮಹಿಳೆಗೆ ಅಧಿಕಾರ ನೀಡಲು ಸಿಎಂ ಹಾಗೂ ನಾನು ತೀರ್ಮಾನಿಸಿದ್ದೇವೆ. ಎಲ್ಲರಿಗೂ ಒಂದೇ ಬಾರಿ ನೀಡಲು ಸಾಧ್ಯವಾಗದಿದ್ದರೂ ಹಂತ ಹಂತವಾಗಿ ನೀಡುತ್ತೇವೆ” ಎಂದು ಹೇಳಿದರು.