- ಹಂತ ಹಂತವಾಗಿ ಶಾಲಾ ಪಠ್ಯ ಪರಿಷ್ಕರಣೆ ಮಾಡುತ್ತೇವೆ
- ಎಲ್ಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿ ಕ್ರಮ
ಮಕ್ಕಳ ಮನಸ್ಸಿನ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಹಾಗೂ ಕಲ್ಮಶಯುಕ್ತ ಪಠ್ಯಗಳನ್ನು ಬದಲಾಯಿಸುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಾಲಾ ಪಠ್ಯ ಪುಸ್ತಕಗಳಲ್ಲಿ ಸೇರಿಸಿದ ವಿಷಯಗಳನ್ನು ತೆಗೆದುಹಾಕಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ. ಈ ಬಗ್ಗೆ ಶಿಕ್ಷಣ ತಜ್ಞರು, ಇಲಾಖೆ ಪ್ರಮುಖರ ಜೊತೆ ಸಭೆ ನಡೆಸಿ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದರು.
ಯಾವುದೇ ಶೈಕ್ಷಣಿಕ ವಿಚಾರಗಳು ಗುಣಮಟ್ಟದಿಂದ ಕೂಡಿರಬೇಕು. ಹೀಗಾಗಿ ನಕಾರಾತ್ಮಕ ಅಂಶ ಹೊಂದಿರುವ ಪಠ್ಯಗಳನ್ನು ಬದಲಾವಣೆ ಮಾಡುತ್ತೇವೆ. ಹಂತ ಹಂತವಾಗಿ ಈ ಪರಿಷ್ಕರಣೆ ನಡೆಯಲಿದೆ ಎಂದವರು ತಿಳಿಸಿದರು.
ಪಠ್ಯ ಪರಿಷ್ಕರಣೆ ಬಗ್ಗೆ ಈಗಾಗಲೇ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಸಿಎಂ, ಡಿಸಿಎಂ ಮಾರ್ಗದರ್ಶನ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದು, ಅವರು ಕೆಲವೊಂದು ಸಲಹೆಗಳನ್ನು ನೀಡಿದ್ದಾರೆ. ಅದರನ್ವಯ ಕೆಲಸ ಮಾಡಲಾಗುತ್ತದೆ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ?:ಮಕ್ಕಳ ಮನಸ್ಸಿನಲ್ಲಿ ವಿಷ ತುಂಬುವ ಪಾಠಗಳಿಗೆ ಅವಕಾಶವಿಲ್ಲ : ಸಿಎಂ ಸಿದ್ದರಾಮಯ್ಯ
ಇದೇ ವೇಳೆ ಹಿಜಾಬ್ ಧರಿಸುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ, ಹಿಜಾಬ್ ವಿಚಾರವಾಗಿ ಕೆಲವೊಂದು ಕಾನೂನು ತೊಡಕುಗಳಿವೆ. ಅವುಗಳನ್ನು ನೋಡಿಕೊಂಡು ಮುಂದುವರೆಯಬೇಕು. ಎಲ್ಲ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲೇ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ. ಹಾಗೂ ಎಲ್ಲ ವಿದ್ಯಾರ್ಥಿಗಳಿಗೂ ಅನುಕೂಲವಾಗುವಂತೆ ಕಾನೂನು ಹೋರಾಟ ನಡೆಸುತ್ತೇವೆ ಎಂದು ಸಚಿವರು ತಿಳಿಸಿದರು.
ಶೈಕ್ಷಣಿಕ ವರ್ಷದ ಆರಂಭವಾಗುತ್ತಿರುವ ಬೆನ್ನಲ್ಲೇ ಇಲಾಖೆ ಇದಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತಿದೆ. ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆಯಲ್ಲಿ ಯಾವುದೇ ಗೊಂದಲವಿಲ್ಲದೆ ಸಮರ್ಪಕ ಕಾರ್ಯಾರಂಭ ಮಾಡಲಾಗುತ್ತದೆ ಎಂದು ಮಧು ಬಂಗಾರಪ್ಪ ತಿಳಿಸಿದರು.