ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಮಹದಾಯಿ ಯೋಜನೆ ಸೇರಿದಂತೆ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಬೆಳಗಾವಿಯಲ್ಲಿ ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು. ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಸಿಎಂ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನು ಓದಿದ್ದೀರಾ? ಬೀದರ್ | ಮೋದಿಯವರ ಸಬ್ ಕಾ ಸಾಥ್ – ಸಬ್ ಕಾ ವಿಕಾಸ್ ಎನ್ನುವ ಘೋಷಣೆಯೇ ಬೋಗಸ್ : ಸಿಎಂ ಸಿದ್ದರಾಮಯ್ಯ
“ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ 23 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಈವರೆಗೆ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ನೀಡಿಲ್ಲ. ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿಯನ್ನೇ ನೀಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದರೆ ತಕ್ಷಣ ಈ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ” ಎಂದು ಪುನರುಚ್ಚರಿಸಿದರು.
“ಕೃಷಿಕರಿಗೆ ಶೇ40 ರಷ್ಟು, ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ. 50ರಷ್ಟು ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯಿತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ” ಎಂದರು.

“ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗೆ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ ಮಾಡಿಸಿದ್ದೇವೆ. ಈ ವರ್ಷ ಇದು ಇನ್ನೂ ಹೆಚ್ಚಾಗುತ್ತದೆ. ಕೃಷಿಹೊಂಡ ಬಹಳ ಉಪಯುಕ್ತ ಯೋಜನೆಯಾಗಿದೆ ಎಂದು ತಜ್ಞರು ವರದಿ ನೀಡಿದ್ದಾರೆ” ಎಂದು ಹೇಳಿದರು.
“ಈಗ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ಆಹಾರ ಉತ್ಪಾದಕರಾದ ನಿಮ್ಮ ಕಾರಣದಿಂದ 10 ಕೆಜಿ ಅಕ್ಕಿ ಕೊಡುವ ಅನ್ನಭಾಗ್ಯ ಯೋಜನೆಯನ್ನು ಕೊಡಲು ಶುರು ಮಾಡಿದೆವು” ಎಂದು ತಿಳಿಸಿದರು.
