ಕಾಂಗ್ರೆಸ್‌ಗೆ ಕೈಕೊಟ್ಟು ಜಗದೀಶ್ ಶೆಟ್ಟರ್ ಬಿಜೆಪಿ ಸೇರಿದ ಬಳಿಕ, ಶಾಸಕ ಲಕ್ಷ್ಮಣ್ ಸವದಿ ಕೂಡ ಬಿಜೆಪಿಗೆ ಹೋಗುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ವದಂತಿಗಳ ಬಗ್ಗೆ ಸ್ಪಷ್ಟನೆ ನೀಡಿರುವ ಲಕ್ಷ್ಮಣ್ ಸವದಿ, ‘ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ’ ಎಂದು ಹೇಳಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಯಕ್ಕಂಚ್ಚಿ ಗ್ರಾಮದಲ್ಲಿ ಅವರು ಮಾತನಾಡಿದರು. “ನಾನು ಬಿಜೆಪಿಗೆ ಮರುಳುತ್ತೇನೆ. ಬೀದರ್‌ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂಬ ಮಾತುಗಳು ಹರಿದಾಡುತ್ತಿವೆ. ಆದರೆ, ನಾನು ಕಾಂಗ್ರೆಸ್ ಬಿಡುವುದಿಲ್ಲ. ಬಿಜೆಪಿಗೆ ಹೋಗಲ್ಲ. ಯಾವ ಚುನಾವಣೆಗೂ ಸ್ಪರ್ಧಿಸುವುದಿಲ್ಲ” ಎಂದಿದ್ದಾರೆ.
“ನನಗೆ ಶಾಸಕರಾಗಿ ಇರುವಂತೆ ಆಥಣಿ ಕ್ಷೇತ್ರದ ಜನರು ಆದೇಶಿಸಿದ್ದಾರೆ. ನಾನು ಶಾಸಕನಾಗಿ ಇರುತ್ತೇನೆ. ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ” ಎಂದು ತಿಳಿಸಿದ್ದಾರೆ.
“ಕೇಂದ್ರ ಸರ್ಕಾರ ರಾಜ್ಯದ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯಕ್ಕೆ ಬರಬೇಕಿದ್ದ ಅನುದಾನದ ಪಾಲು ಕೊಡುತ್ತಿಲ್ಲ. ಕೇಂದ್ರದ ಧೋರಣೆ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ದೆಹಲಿಗೆ ಹೋಗಿ ಪ್ರತಿಭಟನೆ ನಡೆಸುತ್ತವೆ” ಎಂದು ಹೇಳಿದ್ದಾರೆ.