ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಆದೇಶವನ್ನು ಪ್ರಶ್ನಿಸಿ, ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ಶುಕ್ರವಾರ(ಡಿ.15) ಹೈಕೋರ್ಟ್‌ನಲ್ಲಿ ನಡೆಯಿತು.
ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಅರ್ಜಿಯ ಊರ್ಜಿತತ್ವದ ಬಗ್ಗೆ ಮುಂದಿನ ವಿಚಾರಣೆ ವೇಳೆ ವಾದ ಮಂಡಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.
ಅರ್ಜಿ ವಿಚಾರಣೆಯ ಆರಂಭದಲ್ಲಿ ಪೀಠವು ಅರ್ಜಿದಾರರು ಹೇಗೆ ಇದರಿಂದ ಬಾಧಿತರು ಎಂದು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿತು. ಇದಕ್ಕೆ ಅರ್ಜಿದಾರರ ಪರವಾಗಿ ವಾದಿಸಿದ ವಕೀಲ ವೆಂಕಟೇಶ್ ದಳವಾಯಿ, “ವೈಯಕ್ತಿಕವಾಗಿ ಬಾಧಿತರಾಗದಿದ್ದರೂ ಯಾರು ಬೇಕಾದರೂ ಕ್ರಿಮಿನಲ್ ಕಾನೂನಿಗೆ ಚಾಲನೆ ನೀಡಬಹುದು” ಎಂದರು. ಇದಕ್ಕೆ ಪೀಠವು ಸಹಮತಿಸಿತು.
ಅಂತಿಮವಾಗಿ ಪೀಠವು, “ದಳವಾಯಿ ಅವರು ಕೆಲ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ. ಈ ಎಲ್ಲ ತೀರ್ಪುಗಳನ್ನು ಅಧ್ಯಯನ ಮಾಡಿ ಉತ್ತರಿಸಲು ಅಡ್ವೊಕೇಟ್ ಜನರಲ್ ಅವರು ಸಮಯ ಕೋರಿದ್ದಾರೆ. ಹೀಗಾಗಿ, 2024ರ ಜನವರಿ 5ರಂದು ಎಜಿ ಅವರು ಅರ್ಜಿಯ ಊರ್ಜಿತತ್ವಕ್ಕೆ ಸಂಬಂಧಿಸಿದಂತೆ ವಿಸ್ತೃತವಾಗಿ ಉತ್ತರಿಸಬೇಕು” ಎಂದು ಹೇಳಿ ವಿಚಾರಣೆಯನ್ನು ಮುಂದೂಡಿತು.
ಏನಿದು ಪ್ರಕರಣ?
2019ರಲ್ಲಿ ಬಿಜೆಪಿ ಸರ್ಕಾರವು ಡಿ ಕೆ ಶಿವಕುಮಾರ್ ವಿರುದ್ಧ ಅಕ್ರಮ ಹಣ ಗಳಿಕೆ ಪ್ರಕರಣದ ತನಿಖೆಗೆ ಸಿಬಿಐಗೆ ಅನುಮತಿಸಿತ್ತು. ಇದನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಏಕಸದಸ್ಯ ಪೀಠ ವಜಾ ಮಾಡಿತ್ತು. ಆನಂತರ ಇದನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್ ವಿಭಾಗೀಯ ಪೀಠದ ಮುಂದೆ ಮೇಲ್ಮನವಿ ಸಲ್ಲಿಸಿದ್ದರು.
ಈ ನಡುವೆ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ನವೆಂಬರ್ 28ರಂದು ಹಿಂಪಡೆದಿತ್ತು. ಈ ಹಿನ್ನೆಲೆಯಲ್ಲಿ ಡಿ ಕೆ ಶಿವಕುಮಾರ್ ಮೇಲ್ಮನವಿ ಹಿಂಪಡೆದಿದ್ದರು. ಹೀಗಾಗಿ, ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿತ್ತು. ಇದನ್ನು ಆಕ್ಷೇಪಿಸಿ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.