ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ವೈಪರೀತ್ಯ ಹಾಗೂ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದಾಗಿ ರಾಜ್ಯದಲ್ಲಿ ಮಳೆಯಾಗುತ್ತಿದೆ. ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಒಟ್ಟು 15 ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ.
ಇನ್ನು, ಉತ್ತರ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಂಭವವಿದೆ.
ಉಳಿದಂತೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನ ಮುಂದುವರಿಯಲಿದೆ.
ಬೆಂಗಳೂರು ನಗರದಲ್ಲಿ ಮಂಗಳವಾರ 4.1 ಮಿ.ಮೀ ಮಳೆಯಾಗಿದೆ. ಎಚ್‌ಎಎಲ್ (HAL) ವಿಮಾನ ನಿಲ್ದಾಣ ವ್ಯಾಪ್ತಿಯಲ್ಲಿ 15.8 ಮಿ.ಮೀ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) 1.6 ಮಿ.ಮೀ ಮಳೆ ದಾಖಲಾಗಿದೆ. ಮುಂದಿನ ಮೂರು ದಿನಗಳ ಕಾಲ ನಗರದಲ್ಲಿ ಕನಿಷ್ಠ ತಾಪಮಾನ 19°C ರಿಂದ 20°C ಹಾಗೂ ಗರಿಷ್ಠ ತಾಪಮಾನ 27°C ರಿಂದ 28°C ಆಸುಪಾಸಿನಲ್ಲಿರಲಿದೆ.


