ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಕೈಗೊಂಡ ಕಠಿಣ ಕ್ರಮಗಳು ಮತ್ತು ಭದ್ರತಾ ನಿರ್ಬಂಧಗಳ ವಿರುದ್ಧ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಶಾಂತಿಯುತವಾಗಿ ಸಭೆ ಸೇರುವ, ಪ್ರತಿಭಟಿಸುವ ನಾಗರಿಕರನ್ನು ಯಾವುದೇ ಕಾರಣಕ್ಕೂ ಕಾನೂನುಬಾಹಿರವಾಗಿ ಬಂಧಿಸಬಾರದು. ಕೂಡಲೇ ಇಂಟರ್‌ನೆಟ್, ರೈಲು ಹಾಗೂ ಮೆಟ್ರೋ ಸೇವೆಗಳನ್ನು ಮರುಸ್ಥಾಪಿಸಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಅಕ್ಟೋಬರ್ 10ರಂದು ‘ಜಂತರ್ ಮಂತರ್ 2.0’ ಪ್ರತಿಭಟನೆಗೆ ಕರೆ ನೀಡಿತ್ತು. ಈ ಪ್ರತಿಭಟನೆಯನ್ನು ತಡೆಯುವ ಸಲುವಾಗಿ, ಪ್ರತಿಭಟನೆಯ ಆರಂಭಕ್ಕೂಮುನ್ನವೇ ಹಲವಾರು ರಾಜಕೀಯ ನಾಯಕರು ಸೇರಿದಂತೆ 4,000ಕ್ಕೂ ಅಧಿಕ ಜನರನ್ನು ಪೊಲೀಸರು ಅಕ್ರಮವಾಗಿ ಬಂಧಿಸಿದ್ದರು. ಇದು ಕಾನೂನುಬಾಹಿರ ಬಂಧನ ಮತ್ತು ನ್ಯಾಯಾಲಯದ ಆದೇಶಗಳ ಉಲ್ಲಂಘನೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ನಲ್ಲಿ ತುರ್ತು ಅರ್ಜಿಗಳನ್ನು ಸಲ್ಲಿಸಲಾಗಿತ್ತು.
ಭಾನುವಾರ, ಈ ಅರ್ಜಿಗಳ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, “ದೆಹಲಿ ಮೆಟ್ರೋ ಮತ್ತು ರೈಲ್ವೆ ಸೇವೆಗಳನ್ನು ತಕ್ಷಣವೇ ಯಥಾಸ್ಥಿತಿಗೆ ತರಬೇಕು. ಸಾರ್ವಜನಿಕರ ಮುಕ್ತ ಸಂಚಾರ ಮತ್ತು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು” ಎಂದು ಆದೇಶಿಸಿದೆ.
ಮಾತ್ರವಲ್ಲದೆ, “ಕಾನೂನಿನ ಚೌಕಟ್ಟಿನಲ್ಲಿ ಯಾವುದೇ ಅಡೆತಡೆಯಿಲ್ಲದೆ ಇಂಟರ್‌ನೆಟ್ ಸೌಲಭ್ಯಗಳನ್ನು ಮರುಸ್ಥಾಪಿಸಬೇಕು. ವಕೀಲರು ತಮ್ಮ ವೃತ್ತಿಪರ ಕರ್ತವ್ಯಗಳನ್ನು ನಿರ್ವಹಿಸುವುದಕ್ಕೆ ಯಾವುದೇ ಅಡ್ಡಿಪಡಿಸಬಾರದು” ಎಂದು ತಾಕೀತು ಮಾಡಿದೆ.
ವಿಚಾರಣೆ ವೇಳೆ ನ್ಯಾಯಾಲಯದ ಹಿಂದಿನ ನಿರ್ದೇಶನಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಶನಿವಾರ ಕೈಗೊಳ್ಳಲಾಗಿರುವ ಕ್ರಮಗಳು ಮತ್ತು ಘಟನೆಯನ್ನು ಹಗುರವಾಗಿ ಪರಿಗಣಿಸುವುದಿಲ್ಲ. ಎಲ್ಲ ಪಕ್ಷದವರ (ವಾದಿ-ಪ್ರತಿವಾದಿ) ವಾದಗಳನ್ನು ಆಲಿಸುತ್ತೇವೆ ಎಂದು ಕೋರ್ಟ್ ತಿಳಿಸಿದೆ.
ವಿಚಾರಣೆ ವೇಳೆ, ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಭದ್ರತೆಯ ದೃಷ್ಟಿಯಿಂದ ದೆಹಲಿಯ ಒಟ್ಟು 303 ಮೆಟ್ರೋ ನಿಲ್ದಾಣಗಳ ಪೈಕಿ ಕೇವಲ 45 ನಿಲ್ದಾಣಗಳಲ್ಲಿ ಮಾತ್ರ ಪ್ರವೇಶ ಮತ್ತು ನಿರ್ಗಮನವನ್ನು ನಿಯಂತ್ರಿಸಲಾಗಿತ್ತು ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.



