ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿ ಖಂಡಿಸಿ ‘ಇಂಡಿಯಾ’ ಒಕ್ಕೂಟದ ನಾಯಕರು ನವೆಂಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲು ನಿರ್ಧರಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮೈತ್ರಿ ಪಕ್ಷಗಳ ನಾಯಕರ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಲಾಗಿದೆ.
ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್, ಎಸ್ಐಆರ್ (SIR) ಪ್ರಕ್ರಿಯೆ ಹಾಗೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನೆಯ ಮುಂದುವರಿದ ಭಾಗವಾಗಿ ಬೆಂಗಳೂರಿನಲ್ಲಿ ಈ ಬೃಹತ್ ಸಭೆಯನ್ನು ಆಯೋಜಿಸಲಾಗಿದೆ. ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಲು ಬಿಜೆಪಿ ಹಾಗೂ ಆರ್‌ಎಸ್‌ಎಸ್ ಯತ್ನಿಸುತ್ತಿವೆ ಎಂದು ಅವರು ಆರೋಪಿಸಿದರು. ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲುವುದಿಲ್ಲ. ರಾಷ್ಟ್ರಮಟ್ಟದ ನಿರ್ಧಾರದಂತೆ ರಾಜ್ಯದಲ್ಲೂ ಬೆಂಗಳೂರಿನ ಪ್ರತಿಭಟನೆಯ ಬಳಿಕ, ಹೋರಾಟವನ್ನು ಜಿಲ್ಲಾ ಮತ್ತು ತಾಲ್ಲೂಕು ಮಟ್ಟಕ್ಕೆ ವಿಸ್ತರಿಸಲಾಗುವುದು ಎಂದರು.
ಸಿಪಿಎಂ ಪಕ್ಷದ ಕಾರ್ಯದರ್ಶಿ ಕೆ. ಪ್ರಕಾಶ್ ಅವರು ಮಾತನಾಡಿ, ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಹಾಗೂ ಗ್ಯಾನೇಶ್ ಕುಮಾರ್ ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಮುಖ್ಯ ಚುನಾವಣಾ ಆಯುಕ್ತರ ನೇಮಕ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಪ್ರಜಾಸತ್ತಾತ್ಮಕಗೊಳಿಸಬೇಕು, ಸುಪ್ರೀಂ ಕೋರ್ಟ್ ಸೂಚನೆಯ ಅನ್ವಯವೇ ಆಯ್ಕೆ ಪ್ರಕ್ರಿಯೆ ನಡೆಯಬೇಕು ಮತ್ತು ಆಯುಕ್ತರಿಗೆ ಶಾಶ್ವತ ವಿನಾಯಿತಿ ನೀಡಿರುವ ಕಾಯ್ದೆಯನ್ನು ಹಿಂಪಡೆಯಬೇಕು ಎನ್ನುವುದು ಒಕ್ಕೂಟದ ಪ್ರಮುಖ ಬೇಡಿಕೆಗಳಾಗಿವೆ. ಈ ವಿಚಾರಗಳನ್ನು ಮುಂದಿಟ್ಟುಕೊಂಡೇ ನವೆಂಬರ್ 5ರಂದು ಬೀದಿಗಿಳಿಯಲಾಗುತ್ತಿದೆ ಎಂದು ಅವರು ವಿವರಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಪಾಡುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದ್ದು, ಮುಂಬರುವ ದಿನಗಳಲ್ಲಿ ಈ ಹೋರಾಟವನ್ನು ರಾಜ್ಯಾದ್ಯಂತ ವಿಕೇಂದ್ರೀಕರಣಗೊಳಿಸಲಾಗುವುದು. ‘ಇಂಡಿಯಾ’ ಒಕ್ಕೂಟದ ಎಲ್ಲ ಮೈತ್ರಿ ಪಕ್ಷಗಳು ಈ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿವೆ. ಭಾರತವನ್ನು ಸರ್ವಾಧಿಕಾರಿ ನೆಲೆಗಟ್ಟಿಗೆ ಪರಿವರ್ತಿಸುವ ಹಾಗೂ ಕೋಮುವಾದಿ ಹಿಂದುತ್ವ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಿರುವ ಬಿಜೆಪಿಯ ಪ್ರಯತ್ನಗಳಿಗೆ ಈ ದೇಶದಲ್ಲಿ ಯಾವುದೇ ಅವಕಾಶವಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಲು ಮೈತ್ರಿಕೂಟ ಸಜ್ಜಾಗಿದೆ ಎಂದು ಕೆ. ಪ್ರಕಾಶ್ ಎಚ್ಚರಿಕೆ ನೀಡಿದರು.
ಈ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಸಿಪಿಐ ಪಕ್ಷದ ಸಾಥಿ ಸುಂದರೇಶ್ ಮತ್ತು ಮಹಾಂತೇಶ್, ಫಾರ್ವರ್ಡ್ ಬ್ಲಾಕ್‌ನ ಶಿವಶಂಕರ್ ಮತ್ತು ಅಲಿ, ಸಿಪಿಐ(ಎಂಎಲ್) ಪಕ್ಷದ ಕ್ಲಿಫ್ಟನ್ ಡಿ ರೊಜಾರಿಯೋ ಹಾಗೂ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬು ಉಪಸ್ಥಿತರಿದ್ದರು.




