ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ ‘ಜಂತರ್ ಮಂತರ್ ಅಟ್ ಕೊಚ್ಚಿ’ ಅಭಿಯಾನದ ಭಾಗವಾಗಿ ಶನಿವಾರ ನಗರದ ಮರೈನ್ ಡ್ರೈವ್‌ನಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಿತು. ನಟ ಹಾಗೂ ಹೋರಾಟಗಾರ ಪ್ರಕಾಶ್ ರೈ ನೇತೃತ್ವದಲ್ಲಿ ನಡೆದ ಈ ಮೆರವಣಿಗೆಯಲ್ಲಿ ಸುಮಾರು 500ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು.
ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’ಯನ್ನು ( SIR) ಕೂಡಲೇ ಹಿಂಪಡೆಯಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಈ ವೇಳೆ ತೀವ್ರವಾಗಿ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಶನಿವಾರ ಬೆಳಿಗ್ಗೆ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಜೆಪಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಸುದ್ದಿಗಾರರೊಂದಿಗೆ ಮಾತನಾಡಿದರು. “ಭಾರತದಲ್ಲಿ ಸ್ವತಂತ್ರ ಮತ್ತು ನಿಷ್ಪಕ್ಷಪಾತ ಚುನಾವಣಾ ವ್ಯವಸ್ಥೆ ಮರುಸ್ಥಾಪನೆಯಾಗುವವರೆಗೆ ಗ್ಯಾನೇಶ್ ಕುಮಾರ್ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ. ಹಾಲಿ ಮುಖ್ಯ ಚುನಾವಣಾ ಆಯುಕ್ತರ ನೇತೃತ್ವದಲ್ಲಿ ನಡೆಯುವ ಚುನಾವಣೆಗಳನ್ನು ನಂಬಲು ಸಾಧ್ಯವಿಲ್ಲ. ಕೇವಲ ಒಂದು ರಾಜಕೀಯ ಪಕ್ಷಕ್ಕೆ ಲಾಭ ಮಾಡಿಕೊಡುವ ಉದ್ದೇಶದಿಂದಲೇ ಚುನಾವಣಾ ಅಕ್ರಮಗಳು ನಡೆಯುತ್ತಿವೆ. ಇದಕ್ಕೆ ನಮ್ಮ ಬಳಿ ಸಾಕಷ್ಟು ಉದಾಹರಣೆಗಳಿವೆ” ಎಂದು ಅವರು ಆರೋಪಿಸಿದರು.
ಕೇರಳದ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದ ದೀಪ್ಕೆ, “ನಮ್ಮ ದತ್ತಾಂಶಗಳ ಪ್ರಕಾರ, ದೇಶದಲ್ಲೇ ಅತಿ ಹೆಚ್ಚು ನೋಂದಾಯಿತ ಸಿಜೆಪಿ ಸದಸ್ಯರಿರುವುದು ಕೇರಳದಲ್ಲಿ. ಹೀಗಾಗಿ ಇಲ್ಲಿನ ಯುವಜನತೆ ಈ ಹೋರಾಟಕ್ಕೆ ದೊಡ್ಡ ಮಟ್ಟದಲ್ಲಿ ಬೆಂಬಲ ನೀಡಲಿದ್ದಾರೆ” ಎಂದು ಹೇಳಿದರು.
ಡಿವೈಎಫ್‌ಐ (DYFI) ರಾಜ್ಯಾಧ್ಯಕ್ಷೆ ಚಿಂತಾ ಜೆರೋಮ್ ಕೂಡ ಈ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರಧ್ವಜ ಹಿಡಿದು ಸಾಗಿದ ಕಾರ್ಯಕರ್ತರು, ಸಿಇಸಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಮರೈನ್ ಡ್ರೈವ್‌ನಿಂದ ಆರಂಭವಾದ ಈ ರ‍್ಯಾಲಿಯು ರಾಜೇಂದ್ರ ಮೈದಾನದಲ್ಲಿ ಮುಕ್ತಾಯಗೊಳ್ಳಲಿದ್ದು, ಅಲ್ಲಿ ಅಭಿಜೀತ್ ದೀಪ್ಕೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೆರವಣಿಗೆಯ ಮಾರ್ಗದುದ್ದಕ್ಕೂ ಸಂಚಾರ ನಿಯಂತ್ರಿಸಲು ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ವಿಚಾರವಾಗಿ ಸಿಜೆಪಿ ಮತ್ತು ದೆಹಲಿ ಪೊಲೀಸರ ನಡುವೆ ಇತ್ತೀಚೆಗಷ್ಟೇ ಸರಣಿ ಸಂಘರ್ಷಗಳು ನಡೆದಿದ್ದವು. ಪ್ರತಿಭಟನಾ ಸ್ಥಳಕ್ಕೆ ಅಕ್ರಮವಾಗಿ ಪ್ರವೇಶಿಸಿದ ಆರೋಪದ ಮೇಲೆ ಸಿಜೆಪಿ ಮುಖಂಡರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಅಲ್ಲದೆ, ದೆಹಲಿಯಲ್ಲಿ ‘ತಿರಂಗಾ ಮಾರ್ಚ್’ಗೂ ಮುನ್ನ ದೀಪ್ಕೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು ಹಾಗೂ ಕ್ರೈಂ ಬ್ರ್ಯಾಂಚ್ ಪೊಲೀಸರು ವಿಚಾರಣೆಗೂ ಒಳಪಡಿಸಿದ್ದರು. ಈ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಕೊಚ್ಚಿಯಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.




