ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ, ಮೈಸೂರಿನ ಮಾನಸಗಂಗೋತ್ರಿಯಲ್ಲಿ ಬೃಹತ್ ಪ್ರತಿಭಟನಾ ಜಾಥಾ ನಡೆಸಲಾಯಿತು.
ವಿದ್ಯಾರ್ಥಿಗಳು SIR ಪ್ರಕ್ರಿಯೆ, ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವ ಕ್ರಮ ಹಾಗೂ ಹೊಸ ಮತದಾರರ ನೋಂದಣಿಗೆ ವಿಧಿಸಲಾಗಿರುವ ಕಠಿಣ ನಿಯಮಗಳನ್ನು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ವೇಳೆ ಮಾತನಾಡಿದ ಸಂಘಟಕರು, SIR ಪ್ರಕ್ರಿಯೆಯು ಬಡವರು, ಕಾರ್ಮಿಕರು, ಗ್ರಾಮೀಣ ಪ್ರದೇಶದ ನಿವಾಸಿಗಳು ಹಾಗೂ ಶೋಷಿತ ಸಮುದಾಯಗಳ ಮತದಾನದ ಹಕ್ಕಿಗೆ ಧಕ್ಕೆ ತರುವ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಚುನಾವಣಾ ಆಯೋಗದ ನಿರ್ಧಾರಗಳು ಮತ್ತು ಅದರ ಕಾರ್ಯವೈಖರಿ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ನೇತೃತ್ವದಲ್ಲಿ ಕೈಗೊಳ್ಳಲಾದ SIR ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವ ಕ್ರಮಗಳಿಗೆ ಚುನಾವಣಾ ಆಯೋಗದ ಇತರ ಆಯುಕ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಚುನಾವಣಾ ಆಯೋಗದ ನಿರ್ಧಾರಗಳು ಬಹುಮತದ ಆಧಾರದಲ್ಲಿ ಕೈಗೊಳ್ಳಬೇಕೆಂಬ ನಿಯಮವಿದ್ದರೂ, ಆಕ್ಷೇಪಗಳನ್ನು ನಿರ್ಲಕ್ಷಿಸಿ SIR ಪ್ರಕ್ರಿಯೆಯನ್ನು ಮುಂದುವರಿಸಲಾಗಿದೆ ಎಂಬುದು ಪ್ರಜಾಸತ್ತಾತ್ಮಕ ವ್ಯವಸ್ಥೆಯ ಕುರಿತು ಅನುಮಾನಗಳನ್ನು ಹುಟ್ಟುಹಾಕಿದೆ ಎಂದು ಅವರು ಅಭಿಪ್ರಾಯಪಟ್ಟರು.

ಬಡವರು ಮತ್ತು ಶೋಷಿತ ಸಮುದಾಯಗಳ ಮತದಾನದ ಹಕ್ಕಿಗೆ ಧಕ್ಕೆ
ದೇಶದ ಬಹುಪಾಲು ಜನರು ಬಡ ಕಾರ್ಮಿಕರು, ಗ್ರಾಮೀಣ ನಿವಾಸಿಗಳು ಹಾಗೂ ಸಾಮಾಜಿಕವಾಗಿ ಶೋಷಿತ ಸಮುದಾಯಗಳಿಗೆ ಸೇರಿದವರಾಗಿದ್ದಾರೆ. ಇಂತಹವರು ತಮ್ಮ ಗುರುತನ್ನು ಸಾಬೀತುಪಡಿಸಲು ಎಸ್ಎಸ್ಎಲ್ಸಿ ಅಂಕಪಟ್ಟಿ, ಬ್ಯಾಂಕ್ ಖಾತೆ ಅಥವಾ ಜನನ ಪ್ರಮಾಣಪತ್ರದಂತಹ ದಾಖಲೆಗಳನ್ನು ಒದಗಿಸುವುದು ಎಲ್ಲ ಸಂದರ್ಭಗಳಲ್ಲಿಯೂ ಸಾಧ್ಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕಠಿಣ ದಾಖಲೆಗಳ ನಿಯಮಗಳಿಂದ ನೈಜ ಮತದಾರರು ಮತದಾನದ ಹಕ್ಕನ್ನು ಕಳೆದುಕೊಳ್ಳುವ ಅಪಾಯವಿದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಮತದಾರರ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಹೊಂದಿದ್ದರೂ, SIR ಪ್ರಕ್ರಿಯೆಯಲ್ಲಿ ನಿಗದಿಪಡಿಸಿರುವ ದಾಖಲೆಗಳ ನಿಯಮಗಳಿಂದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳಲು ತೊಂದರೆ ಎದುರಾಗಬಹುದು ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದರು. ಮತದಾನವು ಸಂವಿಧಾನಾತ್ಮಕ ಪ್ರಜಾಪ್ರಭುತ್ವದ ಪ್ರಮುಖ ಅಂಶವಾಗಿದ್ದು, ದಾಖಲೆಗಳ ಕೊರತೆಯ ನೆಪದಲ್ಲಿ ಅರ್ಹ ಮತದಾರರನ್ನು ಚುನಾವಣಾ ಪ್ರಕ್ರಿಯೆಯಿಂದ ಹೊರಗಿಡುವ ಪ್ರಯತ್ನಗಳು ನಡೆಯಬಾರದು. ಮತದಾರರ ಪಟ್ಟಿಯ ಪರಿಷ್ಕರಣೆ ಪಾರದರ್ಶಕವಾಗಿ ಮತ್ತು ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವ ರೀತಿಯಲ್ಲಿ ನಡೆಯಬೇಕು ಎಂದು ಒತ್ತಾಯಿಸಿದರು.
ಹೊಸ ಮತದಾರರ ನೋಂದಣಿಗೂ ಕಠಿಣ ನಿಯಮಗಳ ಆರೋಪ
ಮೊದಲ ಬಾರಿಗೆ ಮತದಾರರಾಗಿ ನೋಂದಾಯಿಸಿಕೊಳ್ಳುವ ಯುವಜನರು ಅರ್ಜಿ ಸಲ್ಲಿಸುವಾಗ ಪೋಷಕರೊಂದಿಗಿನ ಸಂಬಂಧವನ್ನು ದೃಢೀಕರಿಸುವ ದಾಖಲೆಗಳನ್ನು ಒದಗಿಸುವುದು ಕಡ್ಡಾಯಗೊಳಿಸಿರುವುದರಿಂದ ಅನೇಕ ಯುವ ಮತದಾರರಿಗೆ ತೊಂದರೆಯಾಗಲಿದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು.

ಪೋಷಕರ ದಾಖಲೆಗಳು ಲಭ್ಯವಿಲ್ಲದವರು ಅಥವಾ ಅವುಗಳನ್ನು ಒದಗಿಸಲು ಸಾಧ್ಯವಾಗದವರು ನೋಂದಣಿಯಿಂದ ವಂಚಿತರಾಗುವ ಸಾಧ್ಯತೆಯಿದೆ. ಇಂತಹ ನಿಯಮಗಳು ಯುವಜನರ ಪ್ರಜಾಸತ್ತಾತ್ಮಕ ಹಕ್ಕುಗಳ ಮೇಲೆ ಪರಿಣಾಮ ಬೀರಲಿವೆ. ಆದ್ದರಿಂದ ಮತದಾರರ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಿ, ಅರ್ಹ ಯುವಜನರಿಗೆ ಮತದಾನದ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಚುನಾವಣೆಯಲ್ಲಿ ಹಣಬಲ ಮತ್ತು ಮಾಧ್ಯಮಗಳ ಪ್ರಭಾವ ಹೆಚ್ಚುತ್ತಿರುವ ಸಂದರ್ಭದಲ್ಲಿ, ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವ ಕ್ರಮಗಳು ಪ್ರಜಾಪ್ರಭುತ್ವದ ಉಳಿದಿರುವ ಆಶಯಗಳಿಗೂ ಧಕ್ಕೆ ತರಲಿವೆ. ಚುನಾವಣಾ ಆಯೋಗವು ಸ್ವತಂತ್ರ ಮತ್ತು ನಿಷ್ಪಕ್ಷಪಾತ ಸಾಂವಿಧಾನಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸಬೇಕೇ ಹೊರತು ಆಡಳಿತ ಪಕ್ಷದ ಪರವಾಗಿ ನಡೆದುಕೊಳ್ಳಬಾರದು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ನ್ಯಾಯಾಂಗದ ಮಧ್ಯಪ್ರವೇಶಕ್ಕೆ ಆಗ್ರಹ
SIR ಪ್ರಕ್ರಿಯೆಗೆ ಸಂಬಂಧಿಸಿದ ವಿವಾದಗಳ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಸೇರಿದಂತೆ ನ್ಯಾಯಾಂಗವು ಪರಿಣಾಮಕಾರಿಯಾಗಿ ಮಧ್ಯಪ್ರವೇಶಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಯಲ್ಲಿ ನ್ಯಾಯಾಂಗದ ಪಾತ್ರ ಮಹತ್ವದ್ದಾಗಿದ್ದು, ಇಂತಹ ನಿರ್ಣಾಯಕ ಸಂದರ್ಭಗಳಲ್ಲಿ ನ್ಯಾಯ ದೊರೆಯದಿದ್ದರೆ ಜನರಲ್ಲಿ ನ್ಯಾಯಾಂಗದ ಮೇಲಿನ ವಿಶ್ವಾಸ ಕುಗ್ಗುವ ಅಪಾಯವಿದೆ ಎಂದು ಅಭಿಪ್ರಾಯಪಟ್ಟರು.
ಪ್ರಜಾಪ್ರಭುತ್ವದ ರಕ್ಷಣೆ ಕೇವಲ ರಾಜಕೀಯ ಪಕ್ಷಗಳ ಜವಾಬ್ದಾರಿಯಲ್ಲ. ವಿದ್ಯಾರ್ಥಿಗಳು ಮತ್ತು ಯುವಜನರು ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು. ಆದರೆ ವಿದ್ಯಾರ್ಥಿಗಳ ಪ್ರತಿಭಟನೆಯ ಹಕ್ಕನ್ನು ನಿರ್ಬಂಧಿಸುವ ಹಾಗೂ ಪ್ರತಿಭಟನಾಕಾರರನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಅವರು ಹೇಳಿದರು.

ದೆಹಲಿಯ ಜಂತರ್ಮಂತರ್ನಲ್ಲಿ SIR ಪ್ರಕ್ರಿಯೆಯನ್ನು ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳು ಮತ್ತು ಯುವಜನರ ವಿರುದ್ಧ ಪೊಲೀಸರು ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಹಾಗೂ ಪ್ರತಿಭಟನೆಯ ಹಕ್ಕನ್ನು ನಿರ್ಬಂಧಿಸಲಾಗಿದೆ ಎಂಬ ಆರೋಪಗಳನ್ನು ಉಲ್ಲೇಖಿಸಿದ ಪ್ರತಿಭಟನಾಕಾರರು, ಶಾಂತಿಯುತ ಪ್ರತಿಭಟನೆಗೆ ಅವಕಾಶ ಕಲ್ಪಿಸುವುದು ಪ್ರಜಾಪ್ರಭುತ್ವದ ಮೂಲಭೂತ ಆಶಯವಾಗಿದೆ ಎಂದು ತಿಳಿಸಿದರು.
SIR ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕೈಬಿಡುವುದನ್ನು ತಡೆಯಬೇಕು ಹಾಗೂ ವಿದ್ಯಾರ್ಥಿಗಳು ಮತ್ತು ಯುವಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನಾ ಜಾಥಾ ನಡೆಸಲಾಯಿತು.
ಈ ವಿಷೇಶ ವರದಿ ಓದಿದ್ದೀರಾ? ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?
ಪ್ರತಿಭಟನೆಯಲ್ಲಿ ಪ್ರೊ. ಕಾಳಚನ್ನೇಗೌಡ, ಸವಿತ ಪಾ. ಮಲ್ಲೇಶ್, ಮಾಜಿ ಮೇಯರ್ ಪುರುಷೋತ್ತಮ್, ಉಗ್ರನರಸಿಂಹೇಗೌಡ, ಬಾರುಕೋಲು ರಂಗಸ್ವಾಮಿ, ಡಾ. ಚನ್ನಕೇಶವ, ಚೋರನಹಳ್ಳಿ ಶಿವಣ್ಣ, ಪ್ರದೀಪ್ ಮುಮ್ಮಡಿ, ಅಸಾದುಲ್ಲಾ, ಅಬ್ದುಲ್ ವಾಹಿದ್, ಚಿರಾಗ್ ಎಸ್. ಕೆ. ಮೂರ್ತಿ ಸೇರಿದಂತೆ ಹಲವರು ಇದ್ದರು.




