ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಕಾನೂನು ಮತ್ತು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಈ ಪ್ರಕ್ರಿಯೆಯನ್ನು ಕೂಡಲೇ ರದ್ದುಗೊಳಿಸಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಎಸ್‌ಐಆರ್ ವಿರೋಧಿಸಿ ಮತ್ತು ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕರ್ನಾಟಕ ಕಾಂಗ್ರೆಸ್ (ಕೆಪಿಸಿಸಿ) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. “ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಮತ್ತು ಅರ್ಹ ಮತದಾರರ ಮತದಾನದ ಹಕ್ಕಿಗೆ ಧಕ್ಕೆ ತರುವ ಯಾವುದೇ ಪ್ರಯತ್ನಗಳನ್ನು ಸಹಿಸಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.
“ಎಸ್‌ಐಆರ್ ರದ್ದತಿ ಮತ್ತು ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆ ಎಂಬ ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದೇಶಾದ್ಯಂತ ಹೋರಾಟ ನಡೆಯುತ್ತಿದೆ. ನವೆಂಬರ್ 1ರಂದು ದೆಹಲಿಯಲ್ಲಿ ಈ ಸಂಬಂಧ ಬೃಹತ್ ಪ್ರತಿಭಟನಾ ಸಮಾವೇಶ ನಡೆದಿದ್ದು, ಕರ್ನಾಟಕದಲ್ಲಿಯೂ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳು ಹೋರಾಟವನ್ನು ಮುಂದುವರಿಸಿವೆ. ಇದು ಕೇವಲ ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದ ವಿಚಾರವಲ್ಲ. ದೇಶದ ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾರರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಮಹತ್ವದ ಹೋರಾಟವಾಗಿದೆ” ಎಂದು ತಿಳಿಸಿದರು.
“ಚುನಾವಣಾ ಆಯುಕ್ತರ ನೇಮಕಾತಿಗೆ ಸಂಬಂಧಿಸಿದ ಆಯ್ಕೆ ಸಮಿತಿಯ ರಚನೆಯನ್ನು ಕೇಂದ್ರ ಸರ್ಕಾರ ಬದಲಾಯಿಸಿರುವುದೇ ಗಂಭೀರ ವಿಚಾರವಾಗಿದೆ. ಹಿಂದೆ ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನು ಒಳಗೊಂಡಿದ್ದ ಆಯ್ಕೆ ಸಮಿತಿಯ ವ್ಯವಸ್ಥೆಯನ್ನು ಬದಲಾಯಿಸಿ, ಮುಖ್ಯ ನ್ಯಾಯಮೂರ್ತಿಯ ಬದಲಿಗೆ ಕೇಂದ್ರ ಸಚಿವರೊಬ್ಬರನ್ನು ಸಮಿತಿಯ ಸದಸ್ಯರನ್ನಾಗಿ ಮಾಡುವ ಕಾನೂನನ್ನು ಜಾರಿಗೆ ತರಲಾಯಿತು. ಆ ಮೂಲಕ ಆಯ್ಕೆ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರದ ಪ್ರಾಬಲ್ಯ ಹೆಚ್ಚುವಂತೆ ಮಾಡಲಾಗಿದೆ” ಎಂದು ಆರೋಪಿಸಿದರು.
“ಗ್ಯಾನೇಶ್ ಕುಮಾರ್ ಅವರ ನೇಮಕಾತಿಯ ಸಂದರ್ಭದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದರೂ ನೇಮಕಾತಿಯನ್ನು ಮುಂದುವರಿಸಲಾಯಿತು. ಚುನಾವಣಾ ಆಯೋಗದಂತಹ ಮಹತ್ವದ ಸಾಂವಿಧಾನಿಕ ಸಂಸ್ಥೆಯ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ಅದರ ಸ್ವಾಯತ್ತತೆ ಮತ್ತು ನಿಷ್ಪಕ್ಷಪಾತ ಕಾರ್ಯನಿರ್ವಹಣೆಯ ಬಗ್ಗೆ ಸಾರ್ವಜನಿಕರಲ್ಲಿ ವಿಶ್ವಾಸ ಮೂಡುವಂತಿರಬೇಕು. ಆದರೆ ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ತನ್ನ ರಾಜಕೀಯ ಹಿತಾಸಕ್ತಿಗೆ ಬಳಸಿಕೊಳ್ಳಲು ಪ್ರಯತ್ನಿಸುತ್ತಿದೆ” ಎಂದು ದೂರಿದರು.
“2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೇವಲ 240 ಸ್ಥಾನಗಳನ್ನು ಗೆದ್ದಿದ್ದು, ಸ್ವಂತ ಬಲದಿಂದ ಬಹುಮತ ಪಡೆಯಲು ಸಾಧ್ಯವಾಗಲಿಲ್ಲ. ಮಿತ್ರಪಕ್ಷಗಳ ಬೆಂಬಲದೊಂದಿಗೆ ಸರ್ಕಾರ ರಚಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ವ್ಯವಸ್ಥೆಯ ಮೇಲೆ ಪ್ರಭಾವ ಬೀರುವ ಪ್ರಯತ್ನಗಳನ್ನು ಆರಂಭಿಸಿದ್ದಾರೆ. ಚುನಾವಣಾ ಆಯೋಗದ ಸ್ವಾಯತ್ತತೆಗೆ ಧಕ್ಕೆ ತರುವ ಮೂಲಕ ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಸಾಧಿಸಿಕೊಳ್ಳಲು ಮುಂದಾಗಿದ್ದಾರೆ” ಎಂದು ಆರೋಪಿಸಿದರು.
“ಯಾವುದೇ ಅರ್ಹ ಮತದಾರರ ಹೆಸರನ್ನು ಸೂಕ್ತ ಕಾರಣವಿಲ್ಲದೆ ಅಥವಾ ಕಾನೂನುಬದ್ಧ ಪ್ರಕ್ರಿಯೆ ಪಾಲಿಸದೆ ಮತದಾರರ ಪಟ್ಟಿಯಿಂದ ತೆಗೆದುಹಾಕುವುದು ಅವರ ಮತದಾನದ ಹಕ್ಕಿಗೆ ಧಕ್ಕೆ ತರುವಂತಾಗಿದೆ. ದೇಶದ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಮತದಾನ ಮಾಡುವ ಅವಕಾಶ ದೊರೆಯಬೇಕು. ಆದರೆ ಎಸ್‌ಐಆರ್ ಹೆಸರಿನಲ್ಲಿ ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮತದಾರರ ಪಟ್ಟಿಯನ್ನು ಪರಿಷ್ಕರಿಸುವುದು ಚುನಾವಣಾ ಆಯೋಗದ ಜವಾಬ್ದಾರಿಯಾದರೂ, ಆ ಪ್ರಕ್ರಿಯೆಯಲ್ಲಿ ಅರ್ಹ ಮತದಾರರು ತಮ್ಮ ಹಕ್ಕಿನಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ” ಎಂದು ಹೇಳಿದರು.
“ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆಗೂ ಮುನ್ನ ಸುಮಾರು 5.54 ಕೋಟಿ ಮತದಾರರಿದ್ದು, ಪರಿಷ್ಕರಣೆಯ ನಂತರ ಈ ಸಂಖ್ಯೆ ಸುಮಾರು 4.55 ಕೋಟಿಗೆ ಇಳಿಕೆಯಾಗಿದೆ. ಅಂದರೆ ಸುಮಾರು 99 ಲಕ್ಷಕ್ಕೂ ಅಧಿಕ ಮತದಾರರ ಹೆಸರುಗಳು ಕಡಿಮೆಯಾಗಿವೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಮತದಾರರ ಸಂಖ್ಯೆ ಇಳಿಕೆಯಾಗಿರುವುದು ಗಂಭೀರವಾಗಿ ಪರಿಶೀಲಿಸಬೇಕಾದ ವಿಚಾರವಾಗಿದೆ. ಮತದಾರರ ಹೆಸರುಗಳನ್ನು ತೆಗೆದುಹಾಕಿರುವುದಕ್ಕೆ ಸಮರ್ಪಕ ಕಾರಣಗಳನ್ನು ಬಹಿರಂಗಪಡಿಸಬೇಕು. ಯಾವುದೇ ಅರ್ಹ ಮತದಾರ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.
“ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು ಒಂದು ಲಕ್ಷ ಮತಗಳನ್ನು ಅಕ್ರಮವಾಗಿ ಸೇರ್ಪಡೆಗೊಳಿಸಲಾಗಿದೆ ಎಂಬ ಆರೋಪವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಸ್ತಾಪಿಸಿದ್ದರು. ರಾಜಾಜಿನಗರದಲ್ಲಿಯೂ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಮತದಾರರ ಪಟ್ಟಿಯಲ್ಲಿನ ಇಂತಹ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆರಂಭವಾದ ಹೋರಾಟ ಇಂದು ದೇಶವ್ಯಾಪಿ ವಿಸ್ತರಿಸಿದೆ” ಎಂದು ತಿಳಿಸಿದರು.
ಈ ಲೇಖನ ಓದಿದ್ದೀರಾ?: ರಾಹುಲ್ ಗಾಂಧಿಯವರನ್ನು ಕೆಣಕಿದವರೇ, ಅವರು ಸಿಡಿದೇಳಲು ಕಾರಣರಾದರು! ಅದು ಹೇಗೆ ಗೊತ್ತೇ?
“ಗ್ಯಾನೇಶ್ ಕುಮಾರ್ ಅವರ ನೇತೃತ್ವದ ಚುನಾವಣಾ ಆಯೋಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ ಹತ್ತು ತಿಂಗಳಲ್ಲಿ ಕನಿಷ್ಠ 14 ಬಾರಿ ವಿವಿಧ ನಿರ್ಧಾರಗಳ ಕುರಿತು ಲಿಖಿತ ಆಕ್ಷೇಪಣೆಗಳನ್ನು ದಾಖಲಿಸಿರುವುದು ವರದಿಯಾಗಿದೆ. ಹೊಸ ಮತದಾರರ ನೋಂದಣಿ, ಮತದಾರರ ಹೆಸರುಗಳ ಸೇರ್ಪಡೆ ಮತ್ತು ತೆಗೆದುಹಾಕುವಿಕೆ, ಮತದಾರರ ದತ್ತಾಂಶ ನಿರ್ವಹಣೆ ಹಾಗೂ ಕೆಲವು ನಿರ್ಧಾರಗಳನ್ನು ತಮ್ಮ ಗಮನಕ್ಕೆ ತರದೆ ಕೈಗೊಂಡಿರುವುದರ ಕುರಿತು ಇಬ್ಬರು ಆಯುಕ್ತರು ಆಕ್ಷೇಪ ವ್ಯಕ್ತಪಡಿಸಿರುವುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಚುನಾವಣಾ ಆಯೋಗದಂತಹ ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯೊಳಗೇ ಈ ರೀತಿಯ ಆಕ್ಷೇಪಣೆಗಳು ವ್ಯಕ್ತವಾಗಿರುವುದು ಅತ್ಯಂತ ಗಂಭೀರ ವಿಚಾರವಾಗಿದೆ. ಆಯೋಗದ ನಿರ್ಧಾರಗಳು ಪಾರದರ್ಶಕವಾಗಿ ಮತ್ತು ನಿಯಮಾನುಸಾರ ನಡೆಯುತ್ತಿವೆಯೇ ಎಂಬ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ದೊರೆಯಬೇಕಾಗಿದೆ” ಎಂದು ಅಭಿಪ್ರಾಯಪಟ್ಟರು.
“ಚುನಾವಣಾ ಆಯೋಗವು ಯಾವುದೇ ರಾಜಕೀಯ ಪಕ್ಷದ ಪ್ರಭಾವಕ್ಕೆ ಒಳಗಾಗದೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು. ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯ. ಜನರ ಮತದಾನದ ಹಕ್ಕುಗಳಿಗೆ ಧಕ್ಕೆಯಾದರೆ ಪ್ರಜಾಪ್ರಭುತ್ವದ ಮೂಲ ಆಶಯಗಳೇ ದುರ್ಬಲಗೊಳ್ಳುತ್ತವೆ. ಸಂವಿಧಾನ ನೀಡಿರುವ ಹಕ್ಕುಗಳನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ” ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ದಿನೇಶ್ ಗುಂಡೂರಾವ್, “”ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸುವುದರ ಜೊತೆಗೆ, ಮುಖ್ಯ ಚುನಾವಣಾ ಆಯುಕ್ತರ ರಕ್ಷಣೆಗಾಗಿ ಜಾರಿಗೆ ತರಲಾಗಿರುವ ವಿಶೇಷ ಕಾನೂನು ನಿಯಮಗಳನ್ನು ಹಿಂಪಡೆಯಬೇಕು. ಸುಪ್ರೀಂ ಕೋರ್ಟ್ ನಿರ್ದೇಶನಗಳಿಗೆ ಅನುಗುಣವಾಗಿ ಚುನಾವಣಾ ಆಯುಕ್ತರ ನೇಮಕಾತಿಯಲ್ಲಿ ಸ್ವಾಯತ್ತತೆಯನ್ನು ಖಾತ್ರಿಪಡಿಸಬೇಕು” ಎಂದು ಒತ್ತಾಯಿಸಿದರು.



