ಟೀಮ್ ಇಂಡಿಯಾ ವಿರುದ್ಧ ಸಿಡ್ನಿಯಲ್ಲಿ ಇಂದು ಮುಕ್ತಾಯ ಕಂಡ ಬಾರ್ಡರ್-ಗವಾಸ್ಕರ್ ಟ್ರೋಫಿಯ ಅಂತಿಮ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ಗೆಲ್ಲುವುದರೊಂದಿಗೆ 5 ಟೆಸ್ಟ್ ಪಂದ್ಯಗಳ ಟೆಸ್ಟ್ ಸರಣಿಯನ್ನು 3-1 ರಿಂದ ವಶಪಡಿಸಿಕೊಂಡಿದೆ. ಜೊತೆಗೆ, ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದ್ದು, ರೋಹಿತ್ ಶರ್ಮಾ ಬಳಗದ ಕನಸು ಭಗ್ನಗೊಂಡಿದೆ.
ಭಾರತ ವಿರುದ್ಧದ ಐದನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ 6 ವಿಕೆಟ್‌ಗಳಿಂದ ಗೆದ್ದುಕೊಂಡಿದೆ. ಇದರೊಂದಿಗೆ ಕಾಂಗರೂ ಪಡೆ ಸುದೀರ್ಘ ಹತ್ತು ವರ್ಷಗಳ ಬಳಿಕ ಭಾರತ ವಿರುದ್ಧ ಟೆಸ್ಟ್ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಆಸೀಸ್ 2014-15ರ ನಂತರ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಗೆದ್ದು ದಾಖಲೆ ಬರೆದಿದೆ. ಇದರೊಂದಿಗೆ ಆಸ್ಟ್ರೇಲಿಯಾ ಎದುರು ಟೀಮ್ ಇಂಡಿಯಾ ದಶಕಗಳ ನಂತರ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಕಳೆದುಕೊಂಡಿದ್ದು, ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ.
ಈ ಐತಿಹಾಸಿಕ ಗೆಲುವಿನೊಂದಿಗೆ ಪ್ಯಾಟ್ ಕಮ್ಮಿನ್ಸ್ ಬಳಗವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಫೈನಲ್‌ಗೆ ಲಗ್ಗೆ ಇಟ್ಟಿದ್ದು, ಜೂನ್‌ನಲ್ಲಿ ಇಂಗ್ಲೆಂಡ್‌ನ ಲಾರ್ಡ್ಸ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಆಸ್ಟ್ರೇಲಿಯಾ ಎದುರಿಸಲಿದೆ.
ಸಿಡ್ನಿ ಟೆಸ್ಟ್ ಪಂದ್ಯದ ಮೂರನೇ ದಿನವಾದ ಭಾನುವಾರ ಭಾರೀ ಕುತೂಹಲ ಮೂಡಿಸಿತ್ತು. 4 ರನ್‌ಗಳ ಮುನ್ನಡೆಯೊಂದಿಗೆ ಎರಡನೇ ದಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಟೀಮ್ ಇಂಡಿಯಾ, ರಿಷಭ್ ಪಂತ್ ಅವರ ಅರ್ಧಶತಕ(61 ರನ್)ದ ನೆರವಿನಿಂದ ಮೂರನೇ ದಿನ 157 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿತ್ತು. ಆ ಮೂಲಕ ಆಸ್ಟ್ರೇಲಿಯಾ ಗೆಲುವಿಗೆ 162 ರನ್‌ಗಳ ಗುರಿ ನೀಡಿತ್ತು. ಈ ಗುರಿಯನ್ನು ಆತಿಥೇಯರು, 27 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಮುಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನು ಓದಿದ್ದೀರಾ? 150 ಕಿ.ಮೀ ಈಜಿ ದಾಖಲೆ ಬರೆದ 52 ವರ್ಷದ ಮಹಿಳೆ; ಸಿಎಂ ಶ್ಲಾಘನೆ!
ಈ ಪಂದ್ಯಕ್ಕೆ ಭಾರತ ತಂಡದ ಹಂಗಾಮಿ ನಾಯಕ ಜಸ್ಪ್ರೀತ್ ಬುಮ್ರಾ ಅವರು ಬ್ಯಾಟಿಂಗ್ ಮಾಡಿದ್ದಾರಾದರೂ, ಬೆನ್ನುನೋವಿನಿಂದಾಗಿ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ. ಸರಣಿಯಲ್ಲಿ 32 ವಿಕೆಟ್ ಪಡೆದಿದ್ದ ಬುಮ್ರಾ ವಿಶ್ರಾಂತಿ ಪಡೆದುಕೊಳ್ಳಬೇಕಾಯಿತು. ಬುಮ್ರಾ ಅವರ ಅನುಪಸ್ಥಿತಿಯಲ್ಲಿ ಭಾರತ ತಂಡ ಸೋಲನುಭವಿಸಬೇಕಾಯಿತು.
ಸರಣಿಯ 9 ಇನ್ನಿಂಗ್ಸ್‌ನಲ್ಲಿ 32 ವಿಕೆಟ್ ಪಡೆದಿದ್ದ ಜಸ್ಪ್ರೀತ್ ಬುಮ್ರಾ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರೆ, ಸಿಡ್ನಿಯ ಪಂದ್ಯದಲ್ಲಿ 10 ವಿಕೆಟ್ ಪಡೆದಿದ್ದ ಆಸ್ಟ್ರೇಲಿಯಾ ಬೌಲರ್ ಸ್ಕಾಟ್ ಬೋಲ್ಯಾಂಡ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
