ಆರ್ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಸಾವಿಗೀಡಾದ ಪ್ರಕರಣದಲ್ಲಿ ಕೆಎಸ್ಸಿಎಗೆ ತಾತ್ಕಾಲಿಕ ಪರಿಹಾರ ಸಿಕ್ಕಿದ್ದು, ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ವಿರುದ್ಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಏಕಸದಸ್ಯ ಪೀಠವು ಇಂದು ಮಧ್ಯಂತರ ಆದೇಶ ಹೊರಡಿಸಿದೆ.
ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಕೆಎಸ್ಸಿಎ ಆಡಳಿತ ಮಂಡಳಿ ಮತ್ತು ಅದರ ಉನ್ನತ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಅಧಿಕಾರಿಗಳಿಗೆ ಬಂಧನದಿಂದ ರಕ್ಷಣೆ ನೀಡಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಭಿಮಾನಿಗಳ ಅತಿರೇಕ ಮತ್ತು ಸರ್ಕಾರದ ಅವಿವೇಕ
ನ್ಯಾಯಮೂರ್ತಿ ಎಸ್.ಆರ್. ಕೃಷ್ಣ ಕುಮಾರ್ ಅವರು ಕೆಎಸ್ಸಿಎ ಆಡಳಿತ ಮಂಡಳಿಗೆ ಮಧ್ಯಂತರ ಪರಿಹಾರ ನೀಡಿ ಆದೇಶ ಹೊರಡಿಸಿದ್ದು, ತನಿಖೆಗೆ ಸಹಕರಿಸುವಂತೆ ಸೂಚಿಸಿದ್ದಾರೆ.
“ತನಿಖೆಗೆ ಸಹಕರಿಸಬೇಕು ಎಂಬ ಷರತ್ತಿಗೊಳಪಟ್ಟು, ಮುಂದಿನ ವಿಚಾರಣೆಯ ದಿನಾಂಕದವರೆಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಆಕ್ಷೇಪಣೆ ಎತ್ತುವಂತಿಲ್ಲ” ಎಂದು ನ್ಯಾಯಾಲಯ ತಿಳಿಸಿದೆ.
ಪ್ರಕರಣವನ್ನು ರದ್ದುಗೊಳಿಸುವ ಅರ್ಜಿಯ ಮುಂದಿನ ವಿಚಾರಣೆ ಜೂನ್ 16 ರಂದು ನಡೆಯಲಿದೆ.