ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಹೊಸ ರ‍್ಯಾಂಕಿಂಗ್ ಪಟ್ಟಿಯಲ್ಲಿ ಬೌಲಿಂಗ್ ವಿಭಾಗದಲ್ಲಿ ಭಾರತದ ಜಸ್ಪ್ರೀತ್ ಬೂಮ್ರಾ ಅವರನ್ನು ಹಿಂದಿಕ್ಕಿರುವ ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ ಅಗ್ರಸ್ಥಾನ ಅಲಂಕರಿಸಿದ್ದಾರೆ.
ಇದರೊಂದಿಗೆ ಬೂಮ್ರಾ ಅವರಿಗೆ ಅಗ್ರಸ್ಥಾನ ನಷ್ಟವಾಗಿದೆ. ಎರಡು ಸ್ಥಾನಗಳ ಕುಸಿತ ಕಂಡಿರುವ ಬೂಮ್ರಾ 3ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಮತ್ತೊಂದೆಡೆ ಕಗಿಸೊ ರಬಾಡ ಮೂರು ಸ್ಥಾನಗಳ ಬಡ್ತಿ ಪಡೆದು ಮೊದಲ ಸ್ಥಾನಕ್ಕೇರಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ರಬಾಡ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ 300 ವಿಕೆಟ್‌ಗಳ ಸಾಧನೆ ಮಾಡಿದ್ದರು.
ಭಾರತ ತಂಡದ ಸ್ಪಿನ್ ತಾರೆಗಳಾದ ರವಿಚಂದ್ರನ್ ಅಶ್ವಿನ್ ಹಾಗೂ ರವೀಂದ್ರ ಜಡೇಜ ತಲಾ ಎರಡು ಸ್ಥಾನಗಳ ಕುಸಿತ ಕಂಡಿದ್ದು, ಅನುಕ್ರಮವಾಗಿ ನಾಲ್ಕು ಹಾಗೂ ಎಂಟನೇ ಸ್ಥಾನದಲ್ಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ಟೆಸ್ಟ್ ಸರಣಿ | ಭಾರತಕ್ಕೆ ಹೀನಾಯ ಸೋಲು; ನ್ಯೂಜಿಲೆಂಡ್‌ಗೆ ಐತಿಹಾಸಿಕ ಜಯ
ಬ್ಯಾಟರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಎಡಗೈ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ಒಂದು ಸ್ಥಾನ ಏರಿಕೆ ಕಂಡಿದ್ದು,ಮೂರನೇ ಸ್ಥಾನಕ್ಕೆ ತಲುಪಿದ್ದಾರೆ. ಆದರೆ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಮೊದಲ 10ರ ಪಟ್ಟಿಯಿಂದ ಹೊರಬಿದ್ದಿದ್ದಾರೆ.
ಪಂತ್ ಐದು ಸ್ಥಾನಗಳ ಕುಸಿತ ಕಂಡು 11 ಮತ್ತು ಕೊಹ್ಲಿ ಆರು ಸ್ಥಾನಗಳ ಕುಸಿತ ಕಂಡು 14ನೇ ಸ್ಥಾನಕ್ಕೆ ಕುಸಿದಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಇಂಗ್ಲೆಂಡ್‌ನ ಜೋರೂಟ್ ಅಗ್ರಸ್ಥಾನದಲ್ಲಿದ್ದು, ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಎರಡನೇ ಸ್ಥಾನದಲ್ಲಿದ್ದಾರೆ.
