ಕಳೆದ 18 ವರ್ಷಗಳಿಂದ ಅಭಿಮಾನಿಗಳು ಕಾಯುತ್ತಿರುವ ಕನಸು ನನಸಾಗಲು ಇನ್ನೊಂದೇ ಹೆಜ್ಜೆ ಬಾಕಿ.
ಹೌದು, ಐಪಿಎಲ್‌ನಲ್ಲಿ ಅಭಿಮಾನಿಗಳ ಫೇವರೀಟ್ ತಂಡವಾಗಿ ಗುರುತಿಸಿಕೊಂಡಿರುವ ಆರ್‌ಸಿಬಿ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ 4ನೇ ಬಾರಿಗೆ ಫೈನಲ್ ಪ್ರವೇಶಿಸಿದೆ.
ಚಂಡೀಗಡದ ಮೈದಾನದಲ್ಲಿ ಗುರುವಾರ ನಡೆದ ಕ್ವಾಲಿಫೈಯ್ಯರ್- 1 ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿದಿದ್ದ ಪಂಜಾಬ್ ಕಿಂಗ್ಸ್ ತಂಡವು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾರಕ ಬೌಲಿಂಗ್ ದಾಳಿಗೆ ಕೇವಲ 101 ರನ್ ಗಳಿಸಲಷ್ಟೇ ಶಕ್ತವಾಗಿತ್ತು. ಈ ಗುರಿಯನ್ನು ಬೆನ್ನತ್ತಿದ ಆರ್‌ಸಿಬಿ, ಎಂಟು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಆ ಮೂಲಕ ನಾಲ್ಕನೇ ಬಾರಿಗೆ ಫೈನಲ್ ಪ್ರವೇಶಿಸಿದೆ.
ಈ ಮೊದಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2009, 2011 ಹಾಗೂ 2016ರಲ್ಲಿ ಫೈನಲ್ ಪ್ರವೇಶಿತ್ತಾದರೂ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿತ್ತು. ಈ ಬಾರಿ ಅಭಿಮಾನಿಗಳ ಕನಸು ನನಸಾಗಿದ್ದು, ನಾಲ್ಕನೆಯ ಬಾರಿಗೆ ಫೈನಲ್ ಪ್ರವೇಶಿಸಿದೆ. ಚಾಂಪಿಯನ್ ಪಟ್ಟಕ್ಕೇರುವಂತೆ ಅಭಿಮಾನಿಗಳು ಪ್ರಾರ್ಥನೆ ಮಾಡುತ್ತಿದ್ದಾರೆ. ಜೂನ್ 3ರಂದು ಗುಜರಾತಿನ ಅಹ್ಮದಾಬಾದಿನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದೆ.