ಮುಂಬರುವ ಏಷ್ಯನ್ ಗೇಮ್ಸ್ ಹಾಗೂ ಇಂಗ್ಲೆಂಡ್-ಐರ್ಲೆಂಡ್ (ಯುಕೆ) ಪ್ರವಾಸಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತ ಟಿ20 ತಂಡವನ್ನು ಪ್ರಕಟಿಸಿದ್ದು, ಮಹತ್ವದ ಬದಲಾವಣೆಗಳನ್ನು ಮಾಡಿದೆ. ಟಿ20 ವಿಶ್ವಕಪ್ ವಿಜೇತ ನಾಯಕ ಸೂರ್ಯಕುಮಾರ್ ಯಾದವ್ ಅವರನ್ನು ನಾಯಕತ್ವದಿಂದ ಹಾಗೂ ತಂಡದಿಂದಲೇ ಕೈಬಿಡಲಾಗಿದ್ದು, ಅವರ ಸ್ಥಾನಕ್ಕೆ ಶ್ರೇಯಸ್ ಅಯ್ಯರ್ ಅವರನ್ನು ನೂತನ ಟಿ20 ನಾಯಕರನ್ನಾಗಿ ನೇಮಿಸಲಾಗಿದೆ.
ಇತ್ತೀಚೆಗೆ ಮುಕ್ತಾಯಗೊಂಡ 2026ರ ಐಪಿಎಲ್ ಮತ್ತು ಹಿಂದಿನ ಪಂದ್ಯಗಳಲ್ಲಿನ ಕಳಪೆ ಬ್ಯಾಟಿಂಗ್ ಫಾರ್ಮ್‌ನಿಂದಾಗಿ ಸೂರ್ಯಕುಮಾರ್ ಯಾದವ್ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ. 2028ರ ಟಿ20 ವಿಶ್ವಕಪ್ ಹಾಗೂ ಒಲಿಂಪಿಕ್ಸ್ ಅನ್ನು ದೃಷ್ಟಿಯಲ್ಲಿಟ್ಟುಕೊಂಡು ಬಿಸಿಸಿಐ ಈ ಕಠಿಣ ನಿರ್ಧಾರ ಕೈಗೊಂಡಿದೆ. ಶ್ರೇಯಸ್ ಅಯ್ಯರ್ ನಾಯಕತ್ವದ ಜವಾಬ್ದಾರಿ ವಹಿಸಿಕೊಂಡರೆ, ಬ್ಯಾಟರ್ ತಿಲಕ್ ವರ್ಮಾ ಅವರನ್ನು ನೂತನ ಉಪನಾಯಕರನ್ನಾಗಿ ನೇಮಿಸಲಾಗಿದೆ.
ಈ ಆಯ್ಕೆ ಪ್ರಕ್ರಿಯೆಯಲ್ಲಿ ಅತ್ಯಂತ ಗಮನಾರ್ಹ ಅಂಶವೆಂದರೆ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರ ಸೇರ್ಪಡೆ. ಬಿಹಾರ ಮೂಲದ ಈ ಆಟಗಾರ, ಏಷ್ಯನ್ ಗೇಮ್ಸ್ ಹಾಗೂ ಯುಕೆ ಪ್ರವಾಸದ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ, ಹಿರಿಯರ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾದ ಅತ್ಯಂತ ಕಿರಿಯ ಭಾರತೀಯ ಆಟಗಾರ ಎಂಬ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ಅವರು ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ 37 ವರ್ಷಗಳ ಹಿಂದಿನ ದಾಖಲೆಯನ್ನು ಅಳಿಸಿಹಾಕಿದ್ದಾರೆ. 2026ರ ಐಪಿಎಲ್‌ನಲ್ಲಿ 237.30ರ ಅತ್ಯುತ್ತಮ ಸ್ಟ್ರೈಕ್ ರೇಟ್‌ನಲ್ಲಿ 776 ರನ್ ಗಳಿಸಿ ಆರೆಂಜ್ ಕ್ಯಾಪ್ ಒಲಿಸಿಕೊಂಡಿದ್ದ ವೈಭವ್, ಆಯ್ಕೆಗಾರರ ಸಂಪೂರ್ಣ ವಿಶ್ವಾಸ ಗಳಿಸಿದ್ದಾರೆ.
ಇದನ್ನು ಓದಿದ್ದೀರಾ? 28 ವರ್ಷಗಳ ಟಿಎಂಸಿ ಸಾಮ್ರಾಜ್ಯ ಕೇವಲ 13 ದಿನಗಳಲ್ಲಿ ಕುಸಿದದ್ದು ಹೇಗೆ?
ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 4 ರವರೆಗೆ ಜಪಾನ್‌ನಲ್ಲಿ ನಡೆಯಲಿರುವ 2026ರ ಏಷ್ಯನ್ ಗೇಮ್ಸ್‌ಗಾಗಿ 15 ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ. ಹಾಗೆಯೇ, ಜೂನ್ ಅಂತ್ಯದಲ್ಲಿ ಹಾಗೂ ಜುಲೈನಲ್ಲಿ ನಡೆಯಲಿರುವ ಐರ್ಲೆಂಡ್-ಇಂಗ್ಲೆಂಡ್ ಪ್ರವಾಸಕ್ಕೆ 16 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ. ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಅವರನ್ನು ಯುಕೆ ಪ್ರವಾಸದಿಂದ (ಇಂಗ್ಲೆಂಡ್-ಐರ್ಲೆಂಡ್ ಸರಣಿ) ವಿಶ್ರಾಂತಿ ನೀಡಿ, ಏಷ್ಯನ್ ಗೇಮ್ಸ್ ತಂಡಕ್ಕೆ ಮಾತ್ರ ಸೇರಿಸಿಕೊಳ್ಳಲಾಗಿದೆ.
2026ರ ಐಪಿಎಲ್‌ನಲ್ಲಿ ಲಖನೌ ಸೂಪರ್ ಜೈಂಟ್ಸ್ ಪರ 14 ಪಂದ್ಯಗಳಲ್ಲಿ 16 ವಿಕೆಟ್ ಕಬಳಿಸಿ ಮಿಂಚಿದ್ದ ದೆಹಲಿಯ ವೇಗಿ ಪ್ರಿನ್ಸ್ ಯಾದವ್ ಅವರಿಗೂ ಇದೇ ಮೊದಲ ಬಾರಿಗೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಒಲಿದಿದೆ. ಸ್ಪಿನ್ ವಿಭಾಗದಲ್ಲಿ ರವಿ ಬಿಷ್ಣೋಯ್ ತಂಡಕ್ಕೆ ಮರಳಿದ್ದರೆ, ಕುಲದೀಪ್ ಯಾದವ್ ಸ್ಥಾನ ಕಳೆದುಕೊಂಡಿದ್ದಾರೆ. ಅಕ್ಷರ್ ಪಟೇಲ್ ತಮ್ಮ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡಿರುವ ವೇಗಿ ಹರ್ಷಿತ್ ರಾಣಾ ಮೂರೂ ಸರಣಿಗಳಿಗೆ ಆಯ್ಕೆಯಾಗಿದ್ದಾರೆ.
ಏಷ್ಯನ್ ಗೇಮ್ಸ್‌ಗಾಗಿ ಭಾರತ ತಂಡ :
ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಶಿವಂ ದುಬೆ, ನಿತೀಶ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ವೈಭವ್ ಸೂರ್ಯವಂಶಿ.
ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸಕ್ಕಾಗಿ ಭಾರತ ತಂಡ:
ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಶಿವಂ ದುಬೆ, ನಿತೀಶ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ವೈಭವ್ ಸೂರ್ಯವಂಶಿ, ಪ್ರಿನ್ಸ್ ಯಾದವ್.





