ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನವಾದ ಇಂದು ಭಾರತ ತನ್ನ ಎರಡನೇ ಇನಿಂಗ್ಸ್‌ನಲ್ಲಿ 134.3 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 487 ರನ್‌ಗಳ ಬೃಹತ್ ಮೊತ್ತ ಪೇರಿಸಿ ಡಿಕ್ಲೇರ್ ಮಾಡಿಕೊಂಡಿದ್ದು, ಆಸೀಸ್ ಗೆಲುವಿಗೆ 534 ರನ್‌ಗಳ ಬೃಹತ್ ಗುರಿ ನೀಡಿದೆ.
ಟೀಂ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ 161, ವಿರಾಟ್ ಕೊಹ್ಲಿ ಅಜೇಯ 100, ಕೆ ಎಲ್ ರಾಹುಲ್ 77 ರನ್ ಬಾರಿಸಿ ತಂಡ 480ರ ಗಡಿ ದಾಟಲು ನೆರವಾದರು.
ಪರ್ತ್ನ ಒಪ್ಟಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ವಿರಾಟ್ ಕೊಹ್ಲಿ 143 ಎಸೆತಗಳಲ್ಲಿ ಸ್ಪೋಟಕ ಶತಕ ಸಿಡಿಸಿದ್ದಾರೆ. ವಿರಾಟ್ ಕೊಹ್ಲಿಯ ಬ್ಯಾಟ್ನಿಂದ ವರ್ಷಗಳ ಬಳಿಕ ಮೂಡಿಬರುತ್ತಿರುವ ಟೆಸ್ಟ್ ಶತಕ ಎಂಬುದು ವಿಶೇಷ. ಅಂದರೆ 2023ರ ಜುಲೈ 21ರಂದು ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಟೆಸ್ಟ್ ಶತಕ ಬಾರಿಸಿದ್ದರು. ಇದಾದ ಬಳಿಕ ಅವರು ಮೂರಂಕಿ ಮೊತ್ತ ದಾಖಲಿಸಿರಲಿಲ್ಲ.
ಇದೀಗ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಆಸೀಸ್ ಪಿಚ್ನಲ್ಲೇ ಅಬ್ಬರಿಸುವ ಮೂಲಕ ಮೂರನೇ ಟೆಸ್ಟ್ ಕೆರಿಯರ್ನ 30ನೇ ಶತಕ ಪೂರೈಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ ಮೂವತ್ತು ಶತಕ ಸಿಡಿಸಿದ ವಿಶ್ವದ 16ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.ಈ ಶತಕದೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ನಲ್ಲಿ ಅತ್ಯಧಿಕ ಶತಕ ಬಾರಿಸಿದ ಭಾರತೀಯ ಬ್ಯಾಟರ್ಗಳ ಪಟ್ಟಿಯಲ್ಲೂ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಹಾಗೆಯೇ ಟೆಸ್ಟ್ ಕ್ರಿಕೆಟ್‌ನಲ್ಲಿ ಹೆಚ್ಚು ಶತಕಗಳನ್ನು ಗಳಿಸಿದ ಆಟಗಾರರ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಸರ್ ಡೊನಾಲ್ಡ್ ಬ್ರಾಡ್ಮನ್ ಅವರನ್ನು ಹಿಂದಿಕ್ಕಿದ್ದಾರೆ.
ಈ ಸುದ್ದಿ ಓದಿದ್ದೀರಾ? ಆಸ್ಟ್ರೇಲಿಯಾದಲ್ಲಿ ಹೊಸ ಇತಿಹಾಸ ಬರೆದ ರಾಹುಲ್ – ಜೈಸ್ವಾಲ್
ಈ ಪಟ್ಟಿಯಲ್ಲಿ 9 ಶತಕಗಳೊಂದಿಗೆ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದರು. ಇದೀಗ ಆಸ್ಟ್ರೇಲಿಯಾ ವಿರುದ್ಧ 9ನೇ ಟೆಸ್ಟ್ ಶತಕ ಸಿಡಿಸಿ ವಿರಾಟ್ ಕೊಹ್ಲಿ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ವಿರಾಟ್ ಕೊಹ್ಲಿಯ ಈ ಭರ್ಜರಿ ಶತಕದೊಂದಿಗೆ ಟೀಮ್ ಇಂಡಿಯಾ 6 ವಿಕೆಟ್ ಕಳೆದುಕೊಂಡು 487 ರನ್ಗಳಿಸಿ ದ್ವಿತೀಯ ಇನಿಂಗ್ಸ್ ಡಿಕ್ಲೇರ್ ಘೋಷಿಸಿದೆ. ಅತ್ತ ಮೊದಲ ಇನಿಂಗ್ಸ್‌ನಲ್ಲಿ 46 ರನ್‌ಗಳ ಹಿನ್ನಡೆ ಹೊಂದಿದ್ದ ಆಸ್ಟ್ರೇಲಿಯಾ ತಂಡವು ದ್ವಿತೀಯ ಇನಿಂಗ್ಸ್‌ನಲ್ಲಿ ಗೆಲ್ಲಲು 534 ರನ್ ಕಲೆಹಾಕಬೇಕಿದೆ. ಭಾರತದ ಗುರಿಯನ್ನು ಬೆನ್ನಟ್ಟಿರುವ ಆಸೀಸ್ ತಂಡ ಆರಂಭಿಕ ಆಘಾತವಾಗಿದ್ದು, ದಿನಾದಾಂತ್ಯಕ್ಕೆ 4.2 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 12 ರನ್ ಗಳಿಸಿದೆ. ನಾಯಕ ಬುಮ್ರಾ 2 ಹಾಗೂ ಸಿರಜ್ 1 ವಿಕೆಟ್ ಕಬಳಿಸಿದ್ದಾರೆ.
ಆರಂಭಿಕರಾಗಿ ಆಟವಾಡಿದ್ದ ಕೆ ಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಮೊದಲ ವಿಕೆಟ್ಗೆ 201 ರನ್‌ಗಳ ಜೊತೆಯಾಟವಾಡಿ ಹೊಸ ಇತಿಹಾಸ ನಿರ್ಮಿಸಿದ್ದರು.ಇದಕ್ಕೂ ಮುನ್ನ ಆಸ್ಟ್ರೇಲಿಯಾದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಆರಂಭಿಕ ಜೋಡಿಯ ದಾಖಲೆ ಸುನಿಲ್ ಗವಾಸ್ಕರ್ ಹಾಗೂ ಕೆ ಶ್ರೀಕಾಂತ್ ಹೆಸರಿನಲ್ಲಿತ್ತು. 1986 ರಲ್ಲಿ ಸಿಡ್ನಿಯಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಈ ಜೋಡಿಯು ಮೊದಲ ವಿಕೆಟ್ಗೆ 191 ರನ್ ಕಲೆಹಾಕಿ ಇತಿಹಾಸ ನಿರ್ಮಿಸಿದ್ದರು.
38 ವರ್ಷಗಳ ಬಳಿಕ ಈ ದಾಖಲೆಯನ್ನು ಮುರಿಯುವಲ್ಲಿ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ಟೆಸ್ಟ್ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಟೀಮ್ ಇಂಡಿಯಾದ ಆರಂಭಿಕ ಜೋಡಿ ಎನಿಸಿಕೊಂಡಿದ್ದಾರೆ.
