ಬೆಂಗಳೂರಿನ ಪೂರ್ವ ವಲಯ ವ್ಯಾಪ್ತಿಯಲ್ಲಿರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸದ ಉದ್ದಿಮೆಗಳ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕ್ರಮ ಕೈಗೊಳ್ಳಲಾಗುತ್ತಿದ್ದು, ಉದ್ದಿಮೆ ಮಾಲೀಕರಿಗೆ ಕೂಡಲೇ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಚನೆ ನೀಡಿದೆ.
ಅದರಂತೆ ಪೂರ್ವ ವಲಯ ವ್ಯಾಪ್ತಿಯಲ್ಲಿ ಫೆ.16ರಂದು ಶಾಂತಿನಗರ ಹಾಗೂ ಸಿ.ವಿ ರಾಮನ್‌ನಗರ ವ್ಯಾಪ್ತಿಯಲ್ಲಿ ವಲಯ ಆಯುಕ್ತೆ ಸ್ನೇಹಲ್, ವಲಯ ಜಂಟಿ ಆಯುಕ್ತೆ ಪಲ್ಲವಿ ರವರ ನಿರ್ದೇಶನದಂತೆ ವಲಯ ಆರೋಗ್ಯಾಧಿಕಾರಿಯಾದ ಡಾ. ಸವಿತಾ ಅವರ ನೇತೃತ್ವದಲ್ಲಿ ಆರೋಗ್ಯ ವೈದ್ಯಾಧಿಕಾರಿಗಳ ತಂಡವು ಉದ್ದಿಮೆಗಳನ್ನು ಪರಿಶೀಲಿಸಿ ನಿಯಮಾನುಸಾರ ಶೇ.60% ರಷ್ಟು ಕನ್ನಡ ಭಾಷೆ ನಾಮಫಲಕಗಳನ್ನು ಅಳವಡಿಸದಿರುವ ಉದ್ದಿಮೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
“ನಗರದ ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಮತ್ತು ರೆಸಿಡೆನ್ಸಿ ರಸ್ತೆಯಲ್ಲಿ ಇದುವರೆಗೆ 200ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳನ್ನು ಪರಿಶೀಲಿಸಲಾಗಿದೆ. ಈ ಪೈಕಿ 170ಕ್ಕೂ ಹೆಚ್ಚು ಮಳಿಗೆಗಳಲ್ಲಿ ಈಗಾಗಲೇ ಕನ್ನಡ ನಾಮಫಲಕಗಳನ್ನು ಅಳವಡಿಸಿಕೊಂಡಿದ್ದಾರೆ. ಇನ್ನು ಕನ್ನಡ ನಾಮಫಲಕ ಅಳವಡಿಸದೇ ಇರುವ ಮಳಿಗೆಗಳ ಮಾಲೀಕರಿಗೆ ಅಂತಿಮ ತಿಳುವಳಿಕೆ ಪತ್ರ ನೀಡಿ ಕೂಡಲೇ ನಾಮಫಲಕ ಬದಲಾಯಿಸಿಕೊಳ್ಳಲು ಸೂಚನೆ ನೀಡಲಾಗಿದೆ” ಎಂದು ಹೇಳಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದೇಹದೊಳಗೆ ₹9.2 ಕೋಟಿ ಮೌಲ್ಯದ ಕೊಕೇನ್ ಮರೆಮಾಚಿ ಅಕ್ರಮ ಸಾಗಾಟ
“ಆಂಗ್ಲ ಭಾಷೆ ಬಳಸಿರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳನ್ನು ಆಂಗ್ಲ ಭಾಷೆ ಕಾಣದಂತೆ ಮುಚ್ಚಲ್ಪಟ್ಟಿದ್ದು, ಕೂಡಲೇ ಶೇ.60 ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಿಕೊಳ್ಳುವಂತೆ ಪಾಲಿಕೆಯ ಆರೋಗ್ಯಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇದಲ್ಲದೆ ನಗರದ ಬ್ರಿಗೇಡ್ ರಸ್ತೆ, ಎಂ.ಜಿ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್‌ಗಳಲ್ಲಿ ಕನ್ನಡ ನಾಮಫಲಕ ಬಳಸದ ಸುಮಾರು 18 ಉದ್ದಿಮೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ತಪಾಸಣೆಯ ವೇಳೆ ವಲಯ ಆರೋಗ್ಯ ವೈದ್ಯಾಧಿಕಾರಿಗಳು, ಸ್ಥಳೀಯ ಪೋಲಿಸ್ ಸಿಬ್ಬಂದಿ, ಮಾರ್ಷಲ್‌ಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.