“ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ರಸ್ತೆಗಳಲ್ಲಿ ಬಿದ್ದಿರುವ ರಸ್ತೆಗುಂಡಿಗಳನ್ನು ಕಾಲಮಿತಿಯೊಳಗಾಗಿ ಮುಚ್ಚಬೇಕು” ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದಲ್ಲಿ ರಸ್ತೆ ಗುಂಡಿ ಮುಚ್ಚುವುದು, ರಾಜಕಾಲುವೆ ಸ್ವಚ್ಛತೆ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಮೇ 27ರಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, “ನಗರದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ಹಾಗೂ ವಾರ್ಡ್ ರಸ್ತೆಗಳಲ್ಲಿ ಈಗಾಗಲೇ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದ್ದು, ಅದಕ್ಕೆ ಮತ್ತಷ್ಟು ಚುರುಕು ನೀಡಿ ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
“ಆಯಾ ವಲಯ ವ್ಯಾಪ್ತಿಯಲ್ಲಿ ವಾರ್ಡ್ ಇಂಜಿನಿಯರ್‌ಗಳು ರಸ್ತೆ ಗುಂಡಿಗಳನ್ನು ಪತ್ತೆಮಾಡಿ ಕೂಡಲೇ ರಸ್ತೆಗುಂಡಿಗಳನ್ನು ಮುಚ್ಚಬೇಕು. ಎಲ್ಲಿಯೂ ರಸ್ತೆ ಗುಂಡಿಗಳಿರುವ ದೂರುಗಳು ಬಾರದಂತೆ ನೋಡಿಕೊಳ್ಳಬೇಕು. ಹಾಟ್ ಮಿಕ್ಸ್ ಹಾಗೂ ಕೋಲ್ಡ್ ಮಿಕ್ಸ್ ಮೂಲಕ ಹಗಲು-ರಾತ್ರಿ ರಸ್ತೆಗುಂಡಿಗಳನ್ನು ಮುಚ್ಚಬೇಕು” ಎಂದು ಸೂಚಿಸಿದರು.
ರಾಜಕಾಲುವೆ ಸ್ವಚ್ಛತೆ ಕಾಪಾಡಿ

“ನಗರದಲ್ಲಿ ಬರುವ ಪ್ರಥಮ, ದ್ವಿತೀಯ ರಾಜಕಾಲುವೆಗಳಲ್ಲಿ ಸಕ್ರಿಯವಾಗಿ ಹೂಳೆತ್ತುವ ಕೆಲಸ ನಡೆಯಬೇಕು. ರಾಜಕಾಲುವೆಗೆ ತ್ಯಾಜ್ಯ ಬಿಸಾಡದಂತೆ ಸೂಕ್ತ ಕ್ರಮ ವಹಿಸಬೇಕು. ಎಲ್ಲ ಕಡೆ ಸ್ವಚ್ಛತೆ ಕಾಪಾಡಿ ಎಲ್ಲಿಯೂ ನೀರು ನಿಲ್ಲದೆ ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕು” ಎಂದು ಹೇಳಿದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬರೆದ ಪತ್ರದಂತೆ ನಗರದಲ್ಲಿರುವ ಪ್ರತಿಷ್ಠಿತ ಮಾಲ್‌ಗಳು, ಮನರಂಜನಾ ಕೇಂದ್ರಗಳು ಹಾಗೂ ಇವಿ ಚಾರ್ಚಿಂಗ್ ಸ್ಟೇಷನ್‌ಗಳಲ್ಲಿ ಅಗ್ನಿ ದುರಂತ ಸೇರಿದಂತೆ ಇನ್ನಿತರೆ ಅನಾಹುತ ತಪ್ಪಿಸಲು ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಜ್ಯದಲ್ಲಿ ಮೇ 31ರಿಂದ ಮುಂಗಾರು ಮಳೆ ಆರಂಭ
ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಶಿವಾನಂದ್ ಕಲ್ಕೆರೆ, ಎಲ್ಲ ವಲಯ ಆಯುಕ್ತರು, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.