ಬೆಂಗಳೂರು ನಗರ ಜಿಲ್ಲೆಯ ಒಂಬತ್ತು ತಾಲ್ಲೂಕು ಕಚೇರಿಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ಮತ್ತು ನ್ಯಾಯಾಂಗ ವಿಭಾಗದ ಅಧಿಕಾರಿಗಳು ದಾಳಿ ನಡೆಸಿ, ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಭ್ರಷ್ಟಾಚಾರ, ದುರಾಡಳಿತ ಹಾಗೂ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಹಲವಾರು ದೂರುಗಳ ಬಂದ ಹಿನ್ನೆಲೆ ಬೆಂಗಳೂರು ನಗರ ಜಿಲ್ಲೆಯ ಐದು ಮತ್ತು ಬೆಂಗಳೂರು ನಗರ ಜಿಲ್ಲೆಯ ನಾಲ್ಕು ತಾಲ್ಲೂಕು ಕಚೇರಿಗಳ ಮೇಲೆ ಶನಿವಾರ ಮಧ್ಯಾಹ್ನ 12 ಗಂಟೆಗೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಪೊಲೀಸ್ ವರದಿ ಆಧರಿಸಿ ಕಚೇರಿಗಳ ಮೇಲೆ ದಿಢೀರ್ ದಾಳಿ ಮಾಡಿ ಶೋಧ ಕಾರ್ಯ ನಡೆಸುವಂತೆ ಆದೇಶಿಸಿದ್ದರು. ಲೋಕಾಯುಕ್ತದ ಪೊಲೀಸ್ ಮತ್ತು ನ್ಯಾಯಾಂಗ ವಿಭಾಗಗಳ ಒಂಬತ್ತು ತಂಡಗಳು ದಾಳಿ ಮಾಡಿದ್ದು, ಸದ್ಯ ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಎರಡು ಜಿಲ್ಲೆಗಳ ತಾಲ್ಲೂಕು ಕಚೇರಿಗಳ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದಾಖಲಾಗಿರುವ 599 ಪ್ರಕರಣಗಳು ಸದ್ಯ ವಿಚಾರಣೆ ಹಂತದಲ್ಲಿವೆ. ದಾಳಿ ಮಾಡಿರುವ ಒಂಬತ್ತು ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಅವ್ಯವಹಾರದ ಬಗ್ಗೆ ಅಧಿಕಾರಿಗಳು ಗೌಪ್ಯ ಮಾಹಿತಿ ಸಂಗ್ರಹಿಸಿದ್ದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ‘ವರ್ಷದ ಅತ್ಯುತ್ತಮ ವಿಮಾನ ನಿಲ್ದಾಣ’ ಪ್ರಶಸ್ತಿ
ಕಂದಾಯ ಭವನದಲ್ಲಿರುವ ಬೆಂಗಳೂರು ಉತ್ತರ ಮತ್ತು ದಕ್ಷಿಣ ತಾಲ್ಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಬಿ.ಎಸ್. ಪಾಟೀಲ್ ಅವರು ಕಾರ್ಯಾಚರಣೆ ಪರಿಶೀಲಿಸುತ್ತಿದ್ದಾರೆ.