ವಿಧಾನಮಂಡಲ ಅಧಿವೇಶನ ಸೋಮವಾರ ಆರಂಭವಾಗಿದ್ದು, ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷ ನಾಯಕ ಇಲ್ಲದೇ ಇರುವ ಸ್ಥಿತಿಯು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಕರ್ನಾಟಕ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಕೇಂದ್ರದ ವೀಕ್ಷಕರಾಗಿ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವೆ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇಮಕ ಮಾಡಿದ್ದಾರೆ.
ಬೆಂಗಳೂರಿಗೆ ತೆರಳಲಿರುವ ವೀಕ್ಷಕರು, ವಿರೋಧ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆಗೆ ಸಾಕ್ಷಿಯಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಮಾಧ್ಯಮ ಉಸ್ತುವಾರಿ ಮತ್ತು ರಾಷ್ಟ್ರೀಯ ವಕ್ತಾರ ಅನಿಲ್ ಬಲುನಿ ತಿಳಿಸಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, “ಸೋಮವಾರವೇ ಸರ್ವ ಸಮ್ಮತವಾಗಿ ವಿರೋಧ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ” ಎಂದು ಹೇಳಿದ್ದಾರೆ.
ವಿಧಾನ ಪರಿಷತ್‌ನಲ್ಲೂ ವಿರೋಧ ಪಕ್ಷದ ನಾಯಕನ ಆಯ್ಕೆ ಆಗಬೇಕು. ಈ ಬಾರಿ ಕೋಟ ಶ್ರೀನಿವಾಸ ಪೂಜಾರಿ ಬಿಟ್ಟು ಬೇರೆಯವರಿಗೆ ಅದರಲ್ಲೂ ಉತ್ತರ ಕರ್ನಾಟಕ ಭಾಗದವರಿಗೆ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ.
ಈ ಸುದ್ದಿ ಓದಿದ್ದೀರಾ? ವಿಪಕ್ಷಗಳ ವಿರುದ್ಧ ಸುಳ್ಳು ಪ್ರಚಾರಕ್ಕೆ ಪ್ರಧಾನಿಯಿಂದ ಅಧಿಕಾರ ದುರ್ಬಳಕೆ: ರಾಷ್ಟ್ರಪತಿಗೆ ಸಚಿವ ದಿನೇಶ್ ಗುಂಡೂರಾವ್ ಪತ್ರ