ಸಂವಿಧಾನ ದಿನಾಚರಣೆಯ ಅಂಗವಾಗಿ ಭಾನುವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.
ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಸಂವಿಧಾನ ದಿನಾಚರಣೆಯ ಪ್ರಯುಕ್ತ ಬಿಬಿಎಂಪಿಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಭಾರತದ ಸಂವಿಧಾನ ಪ್ರಸ್ತಾವನೆ ಭಾಗವನ್ನು ಬೋಧಿಸಿದರು.
ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ.ಹರೀಶ್ ಕುಮಾರ್, ವಲಯ ಆಯುಕ್ತರಾದ ಸ್ನೇಹಲ್, ವಿನೋತ್ ಪ್ರಿಯಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಬಿಎಂಟಿಸಿ ಕೇಂದ್ರ ಕಛೇರಿಯಲ್ಲಿ ಸಂವಿಧಾನ ದಿನಾಚರಣೆ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಸಮರ್ಪಕ ಸುರಕ್ಷಿತ ಸಾರಿಗೆ ಸೇವೆಯನ್ನು ಮಿತವ್ಯಯ ದರದಲ್ಲಿ ಒದಗಿಸುತ್ತಿದೆ. ನ.26 ಸಂವಿಧಾನ ದಿನಾಚರಣೆ ಅಂಗವಾಗಿ ಸಂಸ್ಥೆಯ ಕೇಂದ್ರ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ|| ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ ಸಂವಿಧಾನ ಪಿಠೀಕೆ ಓದಿದರು.
ಈ ವೇಳೆ, ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ”ಸಂವಿಧಾನ ತಜ್ಞರಿಂದ ಸಂವಿಧಾನದ ಕುರಿತು ಉಪನ್ಯಾಸ, ಸಂಸ್ಥೆಯ ಸಿಬ್ಬಂದಿಗೆ ಹಾಗೂ ಸಿಬ್ಬಂದಿ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಮುಂತಾದ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮುಂದಿನ ಪೀಳಿಗೆಗೆ ನಮ್ಮ ಹೆಮ್ಮೆಯ ಸಂವಿಧಾನದ ಬಗ್ಗೆ ಅರಿವು ಮೂಡಿಸಬಹುದಾಗಿದೆ” ಎಂದು ತಿಳಿಸಿದರು.
ನಿರ್ದೇಶಕಿ (ಭ&ಜಾ) ಕಲಾ ಕೃಷ್ಣಸ್ವಾಮಿ ಮಾತನಾಡಿ “ಸಂವಿಧಾನ ದಿನನಿತ್ಯ ಜೀವನದ ಒಂದು ಭಾಗ, ಅದನ್ನು ಸರಿಯಾಗಿ ಅಳವಡಿಸಿಕೊಂಡಲ್ಲಿ ಶ್ರೇಯೊಭಿವೃದ್ಧಿ ಸಾಧ್ಯ” ಎಂದು ತಿಳಿಸಿದರು.
ಈ ವೇಳೆ, ಎಲ್ಲ ಇಲಾಖಾ ಮುಖ್ಯಸ್ಥರು, ವಿಭಾಗೀಯ ನಿಯಂತ್ರಣಾಧಿಕಾರಿಗಳು, ಅಧಿಕಾರಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪದಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಜೊತೆಯಾಗಿ ಭಾರತ ಸಂವಿಧಾನದ ಪೀಠಿಕೆಯನ್ನು ಓದಿದರು.