ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಕ್ರಮಗಳನ್ನು ಕೈಗೊಳ್ಳುವುದನ್ನು ಬಿಟ್ಟು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಬಲಿಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಸಚಿವರ ಮೂಲಕ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ವಿಚಾರವನ್ನು ಮುಂದೆ ತಂದಿರುವುದೇ ಸಿದ್ದರಾಮಯ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, “ಸಿದ್ದರಾಮಯ್ಯ ಎಷ್ಟು ದಿನ ಮುಖ್ಯಮಂತ್ರಿ ಆಗಿರುತ್ತಾರೋ ಗೊತ್ತಿಲ್ಲ. ಉಪಮುಖ್ಯಮಂತ್ರಿ ವಿಚಾರದ ಜೊತೆಗೆ ಈಗ ಮುಖ್ಯಮಂತ್ರಿ ಹುದ್ದೆಯ ಚರ್ಚೆಯೂ ಶುರುವಾಗಿದೆ. “ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಒಬ್ಬರಿಗೊಬ್ಬರು ಬುಡ ಕೊಯ್ದುಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ರಸ್ತೆಯಲ್ಲಿ ನಿಂತುಕೊಂಡು ಹೊಡೆದಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಮುಂದೇನಾಗುತ್ತದೆ ನೋಡೋಣ” ಎಂದು ಹೇಳಿದ್ದಾರೆ.
“ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನಗೊಂಡಿದ್ದಾರೆ. ವಿಶ್ವಾಸ ಕಳೆದುಕೊಂಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಗಂಭೀರ ಆರೋಪವಿದೆ. ಆದರೂ, ಸಚಿವ ನಾಗೇಂದ್ರ ಅವರನ್ನು ಕರೆದು ವಿಚಾರಣೆ ನಡೆಸುವ ಧೈರ್ಯವನ್ನು ಎಸ್ಐಟಿ ಮಾಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.