ವಿಧಾನಸೌಧದಲ್ಲಿ ಕಾಂಗ್ರೆಸ್‌ನ ಡಾ. ಸಯ್ಯದ್ ನಾಸೀರ್ ಹುಸೇನ್ ಅವರು ಗೆದ್ದ ನಂತರ ಅವರ ಬೆಂಬಲಿಗರು ಎನ್ನಲಾದ ಕೆಲವರು ಪಾಕ್ ಪರ ಘೋಷಣೆ ಕೂಗಿದ್ದಾರೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಚರ್ಚೆಗಳು ನಡೆಯುತ್ತಿವೆ.
ಈ ವಿಷಯಕ್ಕೆ ಸಂಬಂಧಿಸಿದಂತೆ, ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ನಾಸೀರ್ ಹುಸೇನ್ ಪ್ರಮಾಣ ವಚನ ಸ್ವೀಕಾರ ಮಾಡಬಾರದು ಹಾಗೂ ಪ್ರಮಾಣವಚನ ಬೋಧಿಸದಂತೆ ಉಪ ರಾಷ್ಟ್ರಪತಿಯವರಿಗೆ ಪತ್ರ ಬರೆಯಲು ಬಿಜೆಪಿ ಮುಂದಾಗಿದೆ. ಇದೀಗ, ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಅವರನ್ನು ಬಂಧಿಸುವಂತೆ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಾಜ್ಯ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಹಾಗೂ ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್ ಮುನಿರಾಜು ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
“ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಪ್ರಕರಣ ಪೂರ್ಣಗೊಳ್ಳುವವರೆಗೂ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ನಾಸೀರ್ ಹುಸೇನ್ ಪ್ರಮಾಣ ವಚನ ಸ್ವೀಕರಿಸಬಾರದು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬೆಳಗಾವಿಯಲ್ಲಿ ಹೇಳಿದರು.
ಈ ಸುದ್ದಿ ಓದಿದ್ದೀರಾ? ಮಗನ ಕೊಂದ ಸಿಇಒ | ಮಾನಸಿಕ ಆರೋಗ್ಯ ತಪಾಸಣೆಗೆ ಗೋವಾ ಕೋರ್ಟ್ ಅನುಮತಿ
“ರಾಜ್ಯಸಭೆಗೆ ಆಯ್ಕೆಯಾಗುವ ಜನಪ್ರತಿನಿಧಿಯು ಸಂವಿಧಾನ ಮತ್ತು ದೇಶದ ಸಾರ್ವಭೌಮತೆಯ ಪ್ರಮಾಣ ವಚನ ಸ್ವೀಕರಿಸುತ್ತಾನೆ. ಆದರೆ, ಹುಸೇನ್ ಅವರ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಾರೆ” ಎಂದು ತಿಳಿಸಿದರು.
“ಘೋಷಣೆ ಕೂಗಿರುವುದು ಸಾಬೀತಾಗಿರುವ ಕಾರಣ ಹುಸೇನ್ ಅವರು ಪ್ರಮಾಣವಚನ ಸ್ವೀಕರಿಸದಂತೆ ತಡೆಯಬೇಕು. ಕಾಂಗ್ರೆಸ್ ಪಕ್ಷಕ್ಕೆ ದೇಶಾಭಿಮಾನವಿದ್ದರೆ, ಅವರಲ್ಲಿ ರಾಷ್ಟ್ರದ ಸಮಗ್ರತೆ ಬಗ್ಗೆ ನಿಜವಾದ ಕಾಳಜಿಯಿದ್ದರೆ ಈ ಕೆಲಸ ಮಾಡಬೇಕು. ಹುಸೇನ್ ಅವರಿಗೆ ಪ್ರಮಾಣ ವಚನ ಬೋಧಿಸಬಾರದು ಎಂದು ಕೋರಿ ಉಪ ರಾಷ್ಟ್ರಪತಿಯವರಿಗೆ ಪತ್ರ ಬರೆಯಲಾಗುವುದು” ಎಂದು ಹೇಳಿದರು.