ಮುಂಗಾರು ಚುರುಕಾಗಿದ್ದು, ಕರಾವಳಿ, ಮಡಿಕೇರಿ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿ ನದಿಗಳೆಲ್ಲ ತುಂಬಿವೆ. ಮುಂದಿನ ಏಳು ದಿನ ರಾಜ್ಯದ ಹಲವೆಡೆ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ಜುಲೈ 1ರವರೆಗೆ ಬೆಂಗಳೂರಿನ ವಾತಾವರಣದಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ಕರಾವಳಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆ, ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ. ಜತೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಹಾಗೂ ಬೆಳಗಾವಿ, ಹಾವೇರಿ, ಧಾರವಾಡ, ಹಾಸನ ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೈಲು ಬೋಗಿಯ ಕಸದ ಬುಟ್ಟಿಯಲ್ಲಿ ನವಜಾತ ಗಂಡು ಮಗು ಪತ್ತೆ
ಬೆಂಗಳೂರಿನಲ್ಲಿ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ತುಂತುರು ಮಳೆಯಾಗಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆ ಹಿನ್ನಲೆ, ನಗರದ ವಾತಾವರಣದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಸದ್ಯ ತಂಪಾದ ವಾತಾವರಣವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.