ಮುಂಗಾರು ಮಳೆ ಚುರುಕಾಗಿದ್ದು, ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಈ ಮಳೆ ಜೂನ್ 13ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ಜತೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಬೀಸಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಹೆಚ್ಚು ಮಳೆಯಾಗಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಿದೆ.
ಜೋರು ಮಳೆ ಹಿನ್ನೆಲೆ, ಉಡುಪಿ ಸೇರಿದಂತೆ 5 ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಣೆ ಮಾಡಿದೆ. ಹಾಗೆಯೇ, ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ ಸೇರಿ 12 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಸೇರಿದಂತೆ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಗಾಳಿಯೊಂದಿಗೆ(40-50kmph) ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಈ ಸುದ್ದಿ ಓದಿದ್ದೀರಾ? ಗೋಹತ್ಯೆ ನಿಷೇಧ ಕಾಯ್ದೆ ಎಂಬ ‘ಅನರ್ಥ’ಕಾರಿ ಪ್ರಹಸನ
ಚಂಡಮಾರುತದ ಹವಾಮಾನವು ಗಂಟೆಗೆ 45 ಕಿ.ಮೀ ನಿಂದ 55 ಕಿ.ಮೀ ವೇಗದಲ್ಲಿ 65 ಕಿ.ಮೀ ವರೆಗೆ ಬೀಸುವ ಗಾಳಿಯೊಂದಿಗೆ ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.