ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು ಆಗಸ್ಟ್ 20ರ ಭಾನುವಾರ ಕರಾವಳಿ ಮತ್ತು ಒಳನಾಡಿನ ಹಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಬೀದರ್, ವಿಜಯಪುರ, ಹಾವೇರಿ ಹಾಗೂ ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದ್ದು, ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆ ಇದ್ದು, ಗರಿಷ್ಠ ಉಷ್ಣಾಂಶ 29 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇರಲಿದೆ ಎಂದು ಹವಾಮಾನ ಇಲಾಖೆ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ.
ನೈರುತ್ಯ ಮುಂಗಾರು ಕರ್ನಾಟಕದಲ್ಲಿ ಸಾಮಾನ್ಯವಾಗಿದ್ದು, ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ರಾಜ್ಯದಲ್ಲಿ ಅತ್ಯಂತ ಗರಿಷ್ಠ ಮಳೆ ಉಡುಪಿ ಜಿಲ್ಲೆಯ ಕೋಟದಲ್ಲಿ 7 ಸೆಂಟಿ ಮೀಟರ್ ಮಳೆಯಾಗಿದೆ.
ಆಗಸ್ಟ್ 19ರ ಬೆಳಿಗ್ಗೆ 8.30ರ ವರೆಗೆ ದಾಖಲಾಗಿರುವ ವರದಿಯ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ 6 ಸೆಂ ಮೀ, ಉಡುಪಿ ಜಿಲ್ಲೆಯ ಕುಂದಾಪುರ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣ, ಉತ್ತರ ಕನ್ನಡ ಜಿಲ್ಲೆಯ ಮಂಕಿ ಹಾಗೂ ಉಡುಪಿಯಲ್ಲಿ ತಲಾ 5 ಸೆಂ ಮೀ, ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಪಣಂಬೂರು, ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್, ಗೆರೆಸೊಪ್ಪ, ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ತಲಾ 4 ಸೆಂ ಮೀ ಮಳೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಗೋಕರ್ಣ, ಕದ್ರಾ, ಶಿರಾಲಿ, ಕುಮಟಾ, ಉಡುಪಿ ಜಿಲ್ಲೆಯ ಕಾರ್ಕಳ, ಸಿದ್ದಾಪುರ, ಕೊಲ್ಲೂರು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಉಪ್ಪಿನಂಗಡಿ, ಮಂಗಳೂರು, ಕೊಡಗು ಜಿಲ್ಲೆಯ ಭಾಗಮಂಡಲ, ಸೋಮವಾರಪೇಟೆ, ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ, ಜಯಪುರ, ಕೊಪ್ಪ, ಶೃಂಗೇರಿ ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ, ಧಾರವಾಡ ಜಿಲ್ಲೆಯ ಅಣ್ಣಿಗೆರೆ, ಬೀದರ್ ಜಿಲ್ಲೆಯ ಸಾಂತಾಪುರ, ಬೆಳಗಾವಿ ಜಿಲ್ಲೆಯ ಹಿಡಕಲ್‌ನಲ್ಲಿ ತಲಾ 2 ಸೆಂಟಿ ಮೀಟರ್ ಮಳೆಯಾಗಿದೆ.
ಈ ಸುದ್ದಿ ಓದಿದ್ದೀರಾ? ಮುಂದಿನ ನಾಲ್ಕು ದಿನ ರಾಜ್ಯದ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಆಗಸ್ಟ್ 19ರ ಶನಿವಾರದಂದು ಜೋರು ಮಳೆಯಾಗಿದೆ. ಹೆಬ್ಬಾಳ, ಶಿವಾಜಿನಗರ, ಕಲ್ಯಾಣನಗರ, ನಾಗವಾರ, ಮೇಕ್ರಿ ಸರ್ಕಲ್, ಸದಾಶಿವನಗರ, ಆನಂದರಾವ್ ಸರ್ಕಲ್, ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ಕಾರ್ಫೋರೇಷನ್, ಎಂಜಿ ರೋಡ್ ಸೇರಿದಂತೆ ಹಲವೆಡೆ ಮಳೆ ಬಿದ್ದಿದೆ.
ಕಳೆದ 20 ದಿನಗಳಿಂದ ರಾಜ್ಯದಲ್ಲಿ ಮಳೆಯಾಗಿರಲಿಲ್ಲ. ಪರಿಣಾಮವಾಗಿ ಉಷ್ಣಾಂಶ ಗಣನೀಯವಾಗಿ ಏರಿಕೆಯಾಗಿತ್ತು. ಈಗ ಸ್ವಲ್ಪ ತಂಪಾಗಿದೆ. ಮಳೆ ಬಾರದ ಹಿನ್ನೆಲೆಯಲ್ಲಿ ಬಿತ್ತನೆ ಕುಂಠಿತವಾಗಿತ್ತು. ಇದೀಗ ಮಳೆಯಿಂದಾಗಿ ರೈತರ ಮುಖದಲ್ಲಿ ಮಂದಹಾಸ ಬೀರಿದ್ದು, ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.