ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಮತ್ತು ಅವರ ಭವಿಷ್ಯವನ್ನು ಉಜ್ವಲಗೊಳಿಸುವ ಉದ್ದೇಶದಿಂದ ರಾಜ್ಯದಲ್ಲಿ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಸ್ಕೂಲ್) ಶಾಲೆಗಳ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ನಾಂದಿ ಹಾಡಲಾಗುತ್ತಿದೆ. ರಾಜ್ಯಾದ್ಯಂತ ಸುಮಾರು 1,350 ಕೆಪಿಎಸ್ ಶಾಲೆಗಳನ್ನು 4,500 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಮಾಗಡಿ ವಿಧಾನಸಭಾ ಕ್ಷೇತ್ರದ ಕೂಟಗಲ್ ಹೋಬಳಿಯ ಯರೇಹಳ್ಳಿ ಗ್ರಾಮದಲ್ಲಿ ಇಂದು ನೂತನ ಕೆಪಿಎಸ್ ಶಾಲೆ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿ ಮತ್ತು ಪೌರಾಡಳಿತ ಸಚಿವ ಎಚ್.ಸಿ. ಬಾಲಕೃಷ್ಣ ಅವರ ನೇತೃತ್ವದಲ್ಲಿ ಕೂಟಗಲ್ ವ್ಯಾಪ್ತಿಯಲ್ಲಿ ಸುಮಾರು 50 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.
ಖಾಸಗಿ ಶಾಲೆಗಳಿಗೆ ಕಡಿಮೆಯಿಲ್ಲದ ಗುಣಮಟ್ಟದ ಶಿಕ್ಷಣ
ಶಿಕ್ಷಣ ಸಚಿವನಾಗಿ ಮಕ್ಕಳ ಭವಿಷ್ಯ ರೂಪಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ. ಯರೇಹಳ್ಳಿ ಗ್ರಾಮದಲ್ಲಿ ಕೆಪಿಎಸ್ ಶಾಲೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿರುವುದು ಸಂತೋಷ ತಂದಿದೆ. ಗ್ರಾಮಸ್ಥರು ತಮ್ಮ ಮಕ್ಕಳನ್ನು ಈ ಶಾಲೆಗೆ ದಾಖಲಿಸಬೇಕು. ಒಂದೇ ಸೂರಿನಡಿ ಎಲ್‌ಕೆಜಿಯಿಂದ ಪಿಯುಸಿವರೆಗೆ ಸುಮಾರು 14 ವರ್ಷಗಳ ಗುಣಮಟ್ಟದ ಶಿಕ್ಷಣ ದೊರೆಯಲಿದೆ ಎಂದು ಹೇಳಿದರು.
ಕೆಪಿಎಸ್ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೂ ಕಡಿಮೆಯಿರುವುದಿಲ್ಲ. ಪ್ರತಿಯೊಂದು ವಿಷಯಕ್ಕೂ ಪ್ರತ್ಯೇಕ ಶಿಕ್ಷಕರಿರುತ್ತಾರೆ. ಒಂದನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣ, ಮೂರನೇ ತರಗತಿಯಿಂದ ಕೃತಕ ಬುದ್ಧಿಮತ್ತೆ (ಎಐ) ಕಲಿಕೆ, ಆರನೇ ತರಗತಿಯಿಂದ ವೃತ್ತಿ ಶಿಕ್ಷಣ ಸೇರಿದಂತೆ ಆಧುನಿಕ ಶಿಕ್ಷಣ ಸೌಲಭ್ಯಗಳನ್ನು ಒದಗಿಸಲಾಗುವುದು. ದ್ವಿ ಭಾಷಾ ನೀತಿ ಇರುತ್ತದೆ. ಅಷ್ಟೇ ಅಲ್ಲದೆ, ಕೆಪಿಎಸ್ ಶಾಲೆಗಳ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಉಚಿತ ಬಸ್ ವ್ಯವಸ್ಥೆಯನ್ನೂ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
18 ಸಾವಿರ ಶಿಕ್ಷಕರ ನೇಮಕಾತಿಗೆ ಚಾಲನೆ:
ಶಾಲೆಗಳ ಅಭಿವೃದ್ಧಿಗೆ ಮೂಲಸೌಕರ್ಯ ಎಷ್ಟು ಮುಖ್ಯವೋ, ಶಿಕ್ಷಕರೂ ಅಷ್ಟೇ ಮುಖ್ಯ. ಈ ಹಿನ್ನೆಲೆಯಲ್ಲಿ ನಮ್ಮ ಇಲಾಖೆಯಿಂದ ಸುಮಾರು 18 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಇದು ರಾಜ್ಯದಲ್ಲಿ ಒಂದೇ ಹಂತದಲ್ಲಿ ನಡೆಯುತ್ತಿರುವ ಅತಿ ದೊಡ್ಡ ಶಿಕ್ಷಕರ ನೇಮಕಾತಿ ಪ್ರಯತ್ನಗಳಲ್ಲಿ ಒಂದಾಗಿರುವುದು ಹೆಮ್ಮೆಯ ಸಂಗತಿ ಎಂದರು.



