ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಿಗಿನ ಜಾವ 3 ಗಂಟೆ ಸುಮಾರಿಗೆ ನಡೆದಿದೆ.
ಹಟ್ಟಿ ಚಿನ್ನದ ಗಣಿಯ ಮಲ್ಲಪ್ಪ ಶಾಫ್ಟ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೌನೇಶ್ (48) ಮೃತಪಟ್ಟಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರನ್ನು ಕಂಪನಿಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರ ರಾತ್ರಿ ಪಾಳಿಯಲ್ಲಿ ಕಾರ್ಮಿಕರು ಕೆಲಸಕ್ಕೆ ತೆರಳಿದ್ದರು. ಭೂಮಿಯ ಕೆಳಮೈ ವಿಭಾಗದಲ್ಲಿ ಕಾರ್ಯ ನಿರ್ವಹಿಸುವಾಗ ಭೂಕುಸಿತವಾಗಿ ಈ ದುರ್ಘಟನೆ ಸಂಭವಿಸಿದೆ.
ಚಿನ್ನ ತೆಗೆಯುವ ಮುನ್ನ ಕೆಳಮೈ ನಲ್ಲಿ ನಿರಂತರ ಹೇರ್ ಬ್ಲಾಸ್ಟ್ ಮಾಡುವ ವೇಳೆ ಇಂತಹ ದುರ್ಘಟನೆಗಳು ಸಂಭವಿಸುತ್ತವೆ. ಆದರೂ ಕಂಪನಿ ಕಾರ್ಮಿಕರಿಗೆ ರಕ್ಷಣೆ ನೀಡದೇ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಮೃತ ಕಾರ್ಮಿಕನ ಕುಟುಂಬಕ್ಕೆ ಕಂಪನಿ 50 ಲಕ್ಷ ರೂ. ಪರಿಹಾರ ಘೋಷಿಸುವಂತೆ ಮೃತನ ಸಂಬಂಧಿಕರು, ಕಾರ್ಮಿಕ ಸಂಘಟನೆಗಳ ಮುಖಂಡರು ಒತ್ತಾಯಿಸಿದರು .
ಗಣಿ ಕಂಪನಿ ಆಸ್ಪತ್ರೆಗೆ ಕಾರ್ಯನಿರ್ವಾಹಕ ನಿರ್ದೇಶಕ, ಪ್ರಧಾನ ವ್ಯವಸ್ಥಾಪಕ ಹಾಗೂ ಉಪ ಪ್ರಧಾನ ವ್ಯವಸ್ಥಾಪಕರು, ಅಧಿಕಾರಿಗಳು ಕಾರ್ಮಿಕ ಸಂಘದ ಮುಖಂಡರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.