ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದೆ. ಆದರೆ, 85 ವರ್ಷ ಮೇಲ್ಪಟ್ಟವರು ಹಾಗೂ ಅಂಗವಿಕಲರಿಗೆ ಶನಿವಾರದಿಂದ ಅಂಚೆ ಮತದಾನ ಆರಂಭಗೊಂಡಿದೆ.
ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ರವರ ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ದಕ್ಷಿಣ ಸೇರಿದಂತೆ 3 ಲೋಕಸಭಾ ಕ್ಷೇತ್ರಗಳಲ್ಲಿ ಬರುವ ಮತದಾರರ ಪಟ್ಟಿಯಲ್ಲಿರುವ 85 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ವಿಶೇಷ ಚೇತನರು (ಶೇ.40ಕ್ಕಿಂತ ಹೆಚ್ಚು ಅಂಗವಿಲತೆ ಉಳ್ಳವರು) ಹಾಗೂ ಮತದಾರರ ಪಟ್ಟಿಯಲ್ಲಿ ಗುರುತಿಸಿರುವವರಿಗೆ ಅಂಚೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ.
ಏಪ್ರಿಲ್ 13ರಿಂದ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಮೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನ 95,128 ಮತದಾರರಿದ್ದಾರೆ. ಇವರಲ್ಲಿ ಕೇವಲ 6,206 ಮಂದಿ ಅಂಚೆ ಮತದಾನಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ.
ಈ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 22,222 ಅಂಗವಿಕಲರಲ್ಲಿ 201 ಮತದಾರರು ಮಾತ್ರ ಅಂಚೆ ಮತದಾನಕ್ಕೆ ನೋಂದಣಿ ಮಾಡಿಕೊಂಡಿದ್ದಾರೆ.
ಮತಪತ್ರ ಹಾಗೂ ಮತಪೆಟ್ಟಿಗೆಗಳೊಂದಿಗೆ ಮತಗಟ್ಟೆ ಸಿಬ್ಬಂದಿ ಪ್ರತಿ ಮತದಾರರ ಮನೆಗೆ ಎರಡು ಬಾರಿ ಭೇಟಿ ನೀಡುತ್ತಾರೆ. ಈ ಬಗ್ಗೆ ಮತದಾರರಿಗೆ ಮುಂಚಿತವಾಗಿ ಮಾಹಿತಿ ನೀಡುತ್ತಾರೆ.
ಮೊದಲನೇ ಬಾರಿ ಮತಗಟ್ಟೆ ಸಿಬ್ಬಂದಿ ಮತದಾರರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರು ಮನೆಯಲ್ಲಿ ಇಲ್ಲದಿದ್ದರೇ, ಮತ್ತೆ ಎರಡನೇ ಬಾರಿ ಭೇಟಿ ನೀಡಿ ಮಾಹಿತಿ ನೀಡಲಾಗುತ್ತದೆ. ಎರಡನೇ ಬಾರಿಯೂ ಮತದಾರರು ಮನೆಯಲ್ಲಿ ಲಭ್ಯವಾಗದಿದ್ದರೇ, ಮತ್ತೆ ಮತದಾನಕ್ಕೆ ಅವಕಾಶವಿರುವುದಿಲ್ಲ.
ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮತದಾರರ ಮನೆಗೆ ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವೀಡಿಯೋಗ್ರಾಫರ್ ಒಳಗೊಂಡಿರುವ ಮತಗಟ್ಟೆ ತಂಡ ತೆರಳಿ ಮತದಾನ ಗುರುತಿನ ಚೀಟಿ ಪರಿಶೀಲಿಸಲಾಗುತ್ತದೆ. ಬಳಿಕ ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುತ್ತದೆ. ಈ ಎಲ್ಲ ಪ್ರಕ್ರಿಯೆಯನ್ನು ವೀಡಿಯೋಗ್ರಫಿ ಮೂಲಕ ಸೆರೆಹಿಡಿಯಲಾಗುತ್ತದೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಯಿಂದ ಮತದಾನಕ್ಕೆ 12 ಡಿ ನಮೂನೆಯಲ್ಲಿ ನೋಂದಣಿ ಮಾಡಿಸಿಕೊಂಡವರಿಗೆ ಮತಗಟ್ಟೆಗೆ ತೆರಳಿ ವಿದ್ಯುನ್ಮಾನ ಮತಯಂತ್ರದಲ್ಲಿ ಮತ ಚಲಾಯಿಸುವ ಅವಕಾಶ ಇರುವುದಿಲ್ಲ.
ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್‌ಸಿ) ಒಟ್ಟು 14 ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾಲೇಜು ಯುವತಿಯೊಂದಿಗೆ ಅನುಚಿತ ವರ್ತನೆ: ಪ್ರಕರಣ ದಾಖಲು
ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಸೇರಿದಂತೆ ಮೂರು ಲೋಕಸಭಾ ಕ್ಷೇತ್ರಗಳು ಬರಲಿವೆ. ಈ ಸಂಬಂಧ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 24 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 1 ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ 3 ಲೋಕಸಭಾ ಕ್ಷೇತ್ರಗಳು ಬರಲಿವೆ.
ಅದರಂತೆ, 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟಾರೆ 43123 ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಲೋಕಸಭಾ ಚುನಾವಣೆಗೆ ನಿಯೋಜನೆ ಮಾಡಿಕೊಂಡಿರುವ ಮತಗಟ್ಟೆ ಅಧಿಕಾರಿಗಳಿಗೆ ಏ.17ರಂದು ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಗಧಿಪಡಿಸಿರುವ ಸ್ಥಳಗಳಲ್ಲಿ ಬೆಳಗ್ಗೆ 9.30ರಿಂದ ಎರಡನೇ ಹಂತದ ತರಬೇತಿಯನ್ನು ನಡೆಸಲು ನೀಡಲು ನಿರ್ಧರಿಸಲಾಗಿದೆ.
