ಮಂಗಳವಾರ ಬೆಳ್ಳಂಬೆಳಗ್ಗೆ ರಾಜ್ಯದ 63 ಕಡೆ 200ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಮೂರು ಕಡೆ ದಾಳಿ ನಡೆಸಿರುವ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದ್ದಾರೆ.
ಬೆಂಗಳೂರಿನ ಬೆಸ್ಕಾಂ ಜಯನಗರ ಉಪವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಚನ್ನಕೇಶವ, ಬೆಸ್ಕಾಂ ವಿಚಕ್ಷಣಾ ದಳದ ಕಾರ್ಯನಿರ್ವಾಹಕ ಎಂಜಿನಿಯರ್ ಸುಧಾಕರ್ ರೆಡ್ಡಿ, ಕಣಿಮಿಣಿಕೆ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಎಸ್. ಕೃಷ್ಣಮೂರ್ತಿ ಅವರ ಮನೆ ಹಾಗೂ ಇತರೆ ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಚನ್ನಕೇಶವ್ ಮನೆಯಲ್ಲಿ ₹6 ಲಕ್ಷ ನಗದು, 3 ಕೆ.ಜಿ. ಚಿನ್ನ ಸೇರಿದಂತೆ ₹1.5 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಲೋಕಾಯುಕ್ತ ಪೊಲೀಸರು ಪರಿಶೀಲನೆ ಮುಂದುವರೆಸಿದ್ದಾರೆ.
ಬೆಸ್ಕಾಂ ಜಾಗೃತ ದಳದ ಅಧಿಕಾರಿ ಸುಧಾಕರ್ ರೆಡ್ಡಿ ಬೆಂಗಳೂರಿನ ಮನೆ, ಚಿಂತಾಮಣಿಯ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಸುಧಾಕರ್‌ಗೆ ಸೇರಿದ ಐದು ಕಡೆ ದಾಳಿ ನಡೆದಿದ್ದು, ಬೆಳಗ್ಗೆ ಆರು ಗಂಟೆಯಿಂದಲೇ ಮನೆಯಲ್ಲಿ ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ. ಮೂವರು ಲೋಕಾಯುಕ್ತ ಅಧಿಕಾರಿಗಳಿಂದ ಸತತ ಪರಿಶೀಲನೆ ನಡೆಸುತ್ತಿದ್ದಾರೆ. ಕೆ.ಆರ್.ಸರ್ಕಲ್ ನಲ್ಲಿರುವ ಬೆಸ್ಕಾಂ ಕಚೇರಿಯಲ್ಲಿ ಕಳೆದ ಎರಡೂವರೆ ವರ್ಷಗಳಿಂದ ವಿಜಿಲೆನ್ಸ್ ಡಿಜಿಎಂ ಆಗಿ ಕೆಲಸ ನಿರ್ವಹಣೆ ಮಾಡುತ್ತಿದ್ದ ರೆಡ್ಡಿ ಅಕ್ರಮ ಆಸ್ತಿ ಹಿನ್ನೆಲೆ ದಾಳಿ ನಡೆದಿದೆ.
ಕುಂಬಳಗೋಡು ಹಾಲು ಸಹಕಾರ ಸೊಸೈಟಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್ ಎಸ್ ಕೃಷ್ಣಮೂರ್ತಿ ಮನೆ ಮೇಲೆ ದಾಳಿ ನಡೆದಿದೆ. ಕುಂಬಳಗೂಡು ಸೇರಿದಂತೆ 5 ಕಡೆ ಲೋಕಾ ದಾಳಿ ನಡೆದಿದೆ.
ಮೈಸೂರಿನಲ್ಲಿ ಲೋಕಾಯುಕ್ತ ದಾಳಿ
ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಹಾಗೂ ಐಜಿಪಿ, ಸುಬ್ರಮಣ್ಣೀಶ್ವರ ರಾವ್ ಎಸ್.ಪಿ ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿಎಸ್‌ಪಿ, ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳಿಂದ ನಾನಾ ಕಡೆ ಪರಿಶೀಲನೆ ನಡೆದಿದೆ.
ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ಪರಿಶೀಲನೆ ನಡೆಸಿದ್ದಾರೆ. ಕುಟುಂಬದ ಹೆಸರಿನಲ್ಲಿ ಎಂ.ಎಸ್ ಗ್ರೂಪ್ ಕಂಪನಿ ಮೇಲೆ ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ, ದಾಳಿ ನಡೆದಿದೆ.
ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮೇಲೆ ದಾಳಿ ಮಾಡಿದ್ದಾರೆ.
ಬಳ್ಳಾರಿಯಲ್ಲಿ ದಾಳಿ
ಬಳ್ಳಾರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಚಂದ್ರಶೇಖರ, ಅರಣ್ಯ ಇಲಾಖೆಯ ಡಿಆರ್‌ಎಫ್‌ಓ ಮಾರುತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಂದ್ರಶೇಖರ ಬಳ್ಳಾರಿಯಲ್ಲಿ ಕೆಲಸ ಮಾಡುತ್ತಿದ್ದರು ಅವರ ಮನೆ ಹೊಸಪೇಟೆಯಲ್ಲಿದೆ. ಅರಣ್ಯ ಇಲಾಖೆಯ ಡಿಆರ್‌ಎಫ್‌ಓ ಮಾರುತಿ ಮನೆ ಕಂಪ್ಲಿಯಲ್ಲಿದೆ. ಹೀಗಾಗಿ ಚಂದ್ರಶೇಖರ ಅವರ ಹೊಸಪೇಟೆ ಮನೆ ಮತ್ತು ಮಾರುತಿ ಅವರ ಕಂಪ್ಲಿ ಮತ್ತು ಗಂಗಾವತಿ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬಳ್ಳಾರಿ ಜಿಲ್ಲೆಯ ಕಂಪ್ಲಿ ಪುರಸಭೆ ಪರಿಸರ ಅಭಿಯಂತರ ಶರಣಪ್ಪ ಮನೆ ಮೇಲೆ ದಾಳಿ ನಡೆದಿದ್ದು, ಗಂಗಾವತಿ ನಗರದ ಶಿಕ್ಷಕರ ಕಾಲೋನಿಯಲ್ಲಿರುವ ನಿವಾಸದ ಮೇಲೆ ದಾಳಿ ನಡೆದಿದೆ. ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನಲೆಯಲ್ಲಿ ದಾಳಿ ನಡೆದಿದೆ.
ಕೊಪ್ಪಳ ಲೋಕಾಯುಕ್ತ ಡಿವೈಎಸ್ಪಿ ಸಲಿಂ ಪಾಷ ನೇತೃತ್ವದಲ್ಲಿ ದಾಳಿ ನಡೆದಿದ್ದು, ಲೋಕಾಯುಕ್ತ ಅಧಿಕಾರಿಗಳು ಮನೆಯಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ವಿಜಯನಗರ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿಯಾಗಿದೆ.

ಬೀದರ್‌ನಲ್ಲಿ ಲೋಕಾಯುಕ್ತ ದಾಳಿ
ಕಲಬುರಗಿ ಎಸ್ಪಿ ಕರ್ನೂಲ್ ನೇತೃತ್ವದಲ್ಲಿ ಮೂವರು ಡಿವೈಎಸ್ಪಿ, ಆರು ಜನ ಸರ್ಕಲ್ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿಯಿಂದ ಒಟ್ಟು ನಾಲ್ಕು ಕಡೆ ದಾಳಿ ನಡೆದಿದ್ದು, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ದಾಳಿ ನಡೆದಿದೆ. ಆಸ್ತಿ ದಾಖಲೆ ಪರಿಶೀಲನೆ ನಡೆಯುತ್ತಿದೆ.
ಬೀದರ ಪಶು ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯ ನಿವೃತ್ತ ಕುಲಪತಿ ನಾರಾಯಣಸ್ವಾಮಿಯ ಬೆಂಗಳೂರಿನ ರಾಜೀವಗಾಂಧಿ ನಗರದಲ್ಲಿನ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಅದೇ ರೀತಿ ನಿವೃತ್ತ ವಿಸಿ ನಾರಾಯಣಸ್ವಾಮಿ ಸಹಾಯಕರಾಗಿದ್ದ ಸುನೀಲ್ ಕುಮಾರ ಅವರ ಬೀದರ ಮನೆ ಹಾಗೂ ಕಾಂಪ್ಲೆಕ್ಸ್ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ವಂಚನೆ ಪ್ರಕರಣ | ಚೈತ್ರಾ ಮತ್ತು ಶ್ರೀಕಾಂತ್ಗೆ ಷರತ್ತುಬದ್ಧ ಜಾಮೀನು: ಇಂದು ಜೈಲಿನಿಂದ ಬಿಡುಗಡೆ
ಬಿಜೆಪಿ ರಾಜ್ಯಾಧ್ಯಕ್ಷನ ಪತ್ನಿಯ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪತ್ನಿಯ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಈ ಹಿಂದೆ ಕಲಬುರಗಿಯ ಆರ್‌ಸಿಎಚ್ ಆಗಿದ್ದು, ಈಗ ಯಾದಗಿರಿಯ ಡಿಎಚ್‌ಒ ಆಗಿರುವ ಡಾ.ಪ್ರಭುಲಿಂಗ ಮಾನಕರ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಯಾದಗಿರಿಯಲ್ಲಿರುವ ಬಾಡಿಗೆ ಮನೆ ಮತ್ತು ಅವರದೇ ಕಲಬುರಗಿಯ ಕರುಣೇಶ್ವರ ನಗರದಲ್ಲಿನ ಮನೆ, ಗೊಬ್ಬೂರ ಬಳಿಯ ಫಾರ್ಮ ಹೌಸ್, ಯಾದಗಿರಿ ನಗರದ ಬಾಡಿಗೆ ಮನೆ ಮೇಲೂ ದಾಳಿಯಾಗಿದೆ. ದಾಳಿ ವೇಳೆಯಲ್ಲಿ 300 ಗ್ರಾಂ ಚಿನ್ನಾಭರಣ ₹3 ಲಕ್ಷ ನಗದು ಹಣ ಪತ್ತೆಯಾಗಿದೆ. ದಾಳಿ ವೇಳೆ ಕಲಬುರಗಿ ನಗರದ ವರ್ಧಾ ಲೇಔಟ್ ನಲ್ಲಿರುವ ಅಪಾರ್ಟ್ಮೆಂಟ್‌ನಲ್ಲಿ ಪ್ರಭುಲಿಂಗ್ ಮಾನಕರ್ ಇದ್ದರು.
ಲೋಕಾಯುಕ್ತ ಎಸ್ ಪಿ ಕರ್ನೂಲ್ ನೇತೃತ್ವದ ತಂಡ ದಾಳಿ ನಡೆಸಿದ್ದು, ದಾಖಲೆಗಳ ತಪಾಸಣೆ ನಡೆಸಿದ್ದಾರೆ.