ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಂದಿನ 10 ದಿನಗಳ ಕಾಲ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಬಿರುಸಾಗುವ ಸೂಚನೆಯಿದೆ. ಜುಲೈ 27ರಿಂದ ಗುಡುಗು ಸಹಿತ ಬಿರುಗಾಳಿ ಮಳೆಯಾಗಲಿದ್ದು, ಸಾರ್ವಜನಿಕರು ಎಚ್ಚರ ವಹಿಸಲು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಹಾವೇರಿ, ಗದಗ, ಬಾಗಲಕೋಟೆ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಮಳೆ ಚುರುಕಾಗುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 27 ಹಾಗೂ 28ರಂದು ಹಲವೆಡೆ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದ್ದು, ಸಮುದ್ರಕ್ಕೆ ತೆರಳುವ ಮೀನುಗಾರರು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದಿರಲು ಹವಾಮಾನ ಇಲಾಖೆ ಸೂಚಿಸಿದೆ.





