ಬೆಂಗಳೂರಿನ ನಮ್ಮ ಮೆಟ್ರೋಗೆ ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕರಾಗಿ ಮಹೇಶ್ವರ ರಾವ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಜುಂ ಪರ್ವೇಜ್ ಅವರನ್ನು ವರ್ಗಾವಣೆ ಮಾಡಿ, ಆ ಸ್ಥಾನಕ್ಕೆ 1995ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮಹೇಶ್ವರ ರಾವ್ ಅವರನ್ನು ನೇಮಕ ಮಾಡಿ ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಜನವರಿ 11ರಂದು ಪತ್ರ ಬರೆದಿದೆ.
ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರನ್ನು ಕೇಂದ್ರ ಸರ್ಕಾರದ ಅನುಮತಿ ಇಲ್ಲದೇ, ಕರ್ನಾಟಕ ಸರ್ಕಾರ ವರ್ಗಾವಣೆ ಮಾಡುವಂತಿಲ್ಲ ಹಾಗೂ ಅವರನ್ನು ತೆಗೆದು ಹಾಕುವಂತಿಲ್ಲ. ಹೊಸ ವ್ಯವಸ್ಥಾಪಕ ನಿರ್ದೇಶಕರಿಗೆ ಯಾವುದೇ ಹೆಚ್ಚುವರಿ ಜವಾಬ್ದಾರಿಯನ್ನು ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಒಪ್ಪಿಗೆ ಇಲ್ಲದೇ ನೀಡುವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಿದೆ.
ಈ ಸುದ್ದಿ ಓದಿದ್ದೀರಾ? ಕೋವಿಡ್‌ನಿಂದ ಮೃತಪಟ್ಟವರ ಅಂತ್ಯಕ್ರಿಯೆ ನಿರಾಕರಿಸದಂತೆ ಆರೋಗ್ಯ ಇಲಾಖೆ ಸುತ್ತೋಲೆ
ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ತೇಜಸ್ವಿ ಸೂರ್ಯ, “ಅಂತಿಮವಾಗಿ, ನಮ್ಮ ಮೆಟ್ರೋಗೆ ಪೂರ್ಣ ಪ್ರಮಾಣದ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡಲಾಗಿದೆ. ನಗರದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ತ್ವರಿತವಾಗಿ ನೇಮಕ ಮಾಡಿದ್ದಕ್ಕಾಗಿ ಕೇಂದ್ರ ಸಚಿವ ಹರ್ದಿಪ್ ಸಿಂಗ್ ಪುರಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೇ, ಪೂರ್ಣ ಸಮಯದ ನಿರ್ದೇಶಕರ ನೇಮಕದೊಂದಿಗೆ, ನಮ್ಮ ನಗರದ ಉನ್ನತ ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳು ಅವರ ಗಮನಕ್ಕೆ ಬರುತ್ತವೆಂದು ನಾವು ಭಾವಿಸುತ್ತೇವೆ” ಎಂದು ಬರೆದುಕೊಂಡಿದ್ದಾರೆ.