ಚಾಮರಾಜನಗರ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
76 ವರ್ಷದ ವಿ.ಶ್ರೀನಿವಾಸ್ ಪ್ರಸಾದ್ ಅವರು ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಾರೆ. ಇದೀಗ, ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಪ್ರಸಾದ್ ಅವರನ್ನು ದಾಖಲು ಮಾಡಲಾಗಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಅಂತ ಹೇಳಲಾಗುತ್ತಿದೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.
“ಶ್ರೀನಿವಾಸ್ ಪ್ರಸಾದ್ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಶುಗರ್, ಬಿಪಿಯಲ್ಲಿ ವ್ಯತ್ಯಯವಾಗಿದೆ. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ತಜ್ಞ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಮುಂದುವರೆಯುತ್ತಿದೆ” ಎಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಹಾಸನ ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ, ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿ
2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅವರು ಕಾಂಗ್ರೆಸ್ ಅಭ್ಯರ್ಥಿ ಧ್ರುವನಾರಾಯಣ ವಿರುದ್ಧ ಸ್ಪರ್ಧೆ ಮಾಡಿ ಗೆದ್ದಿದ್ದರು. ಶ್ರೀನಿವಾಸ್ ಪ್ರಸಾದ್ ಅವರು ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರು. ಇದೇ ಮಾರ್ಚ್ 17ರಂದು ಅನಾರೋಗ್ಯದಿಂದ ರಾಜಕೀಯ ನಿವೃತ್ತಿ ಪಡೆಯುವುದಾಗಿ ವಿ.ಶ್ರೀನಿವಾಸ್ ಪ್ರಸಾದ್ ಘೋಷಿಸಿದ್ದರು. ಹೀಗಾಗಿ, ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿಲ್ಲ.