ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಕನ್ನಡಿಗರು ಮೃತಪಟ್ಟಿದ್ದು, ಹಲವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.
ಉಗ್ರರ ದಾಳಿ ಬಗ್ಗೆ ತಿಳಿಯುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಮಂಗಳವಾರ ರಾತ್ರಿ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದರು. ಕನ್ನಡಿಗರ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದರು. ಇದರ ಬೆನ್ನಲ್ಲೇ ಐಪಿಎಸ್ ಅಧಿಕಾರಿ ಚೇತನ್ ನೇತೃತ್ವದ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ಕಳಿಸಿಕೊಡಲಾಗಿದೆ. ದೆಹಲಿ ಕರ್ನಾಟಕ ಭವನದ ಆಯುಕ್ತರನ್ನೂ ಅರ್ಲಟ್ ಮಾಡಲಾಗಿದೆ. ಜೊತೆಗೆ ಇಡೀ ಕಾರ್ಯಾಚರಣೆಯ ಜವಾಬ್ದಾರಿಯನ್ನು ಸಿಎಂ ಸಿದ್ದರಾಮಯ್ಯ, ಕಾರ್ಮಿಕ ಸಚಿವ ಸಂತೋಷ್ ಲಾಡ್ಗೆ ವಹಿಸಿದ್ದಾರೆ.
ಸಿಎಂ ಸೂಚನೆ ಬೆನ್ನಲ್ಲೇ ಸಚಿವ ಸಂತೋಷ್ ಲಾಡ್ ಹುಬ್ಬಳ್ಳಿಯಿಂದ ದೆಹಲಿಗೆ ತೆರಳಿ ಅಲ್ಲಿಂದ ಕಾಶ್ಮೀರಕ್ಕೆ ವಿಶೇಷ ವಿಮಾನದಲ್ಲಿ ತೆರಳಿದ್ದಾರೆ. ಕಾಶ್ಮೀರದ ಸ್ಥಳೀಯ ಆಡಳಿತ, ಭದ್ರತಾ ಪಡೆಗಳು ಮತ್ತು ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿ ಇರಲಿದ್ದು, ಕನ್ನಡಿಗರಿಗೆ ಅಗತ್ಯವಿರುವ ವೈದ್ಯಕೀಯ ಸೌಲಭ್ಯ, ಸುರಕ್ಷಿತ ಸ್ಥಳಾಂತರ ಮತ್ತು ಇತರ ಸಹಾಯವನ್ನು ಒದಗಿಸುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ-ಜನಿವಾರಕ್ಕೆ ಜೋತುಬಿದ್ದ ‘ಜಾತ್ಯತೀತ’ ಸರ್ಕಾರ
ವಿಪರ್ಯಾಸ ಅಂದ್ರೆ ಲಾಡ್ಗೆ ವಿಶೇಷ ವಿಮಾನ ಸಿಕ್ಕರೂ ಪೈಲಟ್ ಇಲ್ಲದೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಧ್ಯರಾತ್ರಿವರೆಗೂ ಪರದಾಡುವಂತಾಯಿತು.
ಉಗ್ರರ ದಾಳಿಯನ್ನು ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಸರ್ಕಾರ ಕನ್ನಡಿಗರ ರಕ್ಷಣೆಗೆ ಮುಂಜಾಗ್ರತಾ ಕ್ರಮ ಕೈಗೊಂಡ ಬೆನ್ನಲ್ಲೇ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿದ ಅವರು, ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ. ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ ಎಂದು ಉಲ್ಲೇಖಿಸಿದ್ದಾರೆ.