ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂ. 26ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಗಾಳಿ-ಮಳೆಗೆ ಬೃಹತ್ ಮರವೊಂದು ರಸ್ತೆಗುರುಳಿದೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಿಂದ ಸಿದ್ದಾಪುರಕ್ಕೆ ಹೋಗುವ ಮಾರ್ಗ ಮಧ್ಯೆ ಬೃಹತ್ ಮರ ಉರುಳಿ ಬಿದ್ದಿದೆ. ರಸ್ತೆಗೆ ಉರುಳಿದ ಮರದಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಮರ ತೆರವುಗೊಳಿಸಿದರು. ಮರ ತೆರವಿಗೆ ಅರಣ್ಯಾಧಿಕಾರಿಗಳ ಜೊತೆ ಗ್ರಾಮಸ್ಥರು ಕೈ ಜೋಡಿಸಿದ್ದಾರೆ.
ಕರ್ನಾಟಕದ ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ಮಲೆನಾಡಿನಲ್ಲಿ ಚದುರಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂ.27, 28ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀನಿಂದ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ದಾವಣಗೆರೆಯಲ್ಲೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಭಾಗವಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ಧಾರವಾಡ, ಹಾವೇರಿ, ಗದಗ, ಬಳ್ಳಾರಿ ಮತ್ತು ವಿಜಯನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಉಳಿದ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಈ ಸುದ್ದಿ ಓದಿದ್ದೀರಾ? ಕೊಡಗು | ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಪ್ರವಾಹ ಸಂತ್ರಸ್ತೆ
ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ರಾಜ್ಯದಲ್ಲಿ ಭಾನುವಾರ (ಜೂ.26) ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಉತ್ತರ ಕನ್ನಡದ ಹೊನ್ನಾವರದಲ್ಲಿ 14 ಸೆಂ.ಮೀ, ಮಂಕಿಯಲ್ಲಿ 13 ಸೆಂ.ಮೀ ಅತಿ ಹೆಚ್ಚು ಮಳೆಯಾಗಿದೆ. ಕಾರ್ಕಳ, ಗೇರುಸೊಪ್ಪ, ಅಂಕೋಲದಲ್ಲಿ ತಲಾ 7 ಸೆಂ.ಮೀ ಮಳೆಯಾಗಿರುವುದಾಗಿ ವರದಿಯಾಗಿದೆ.