ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 6 ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೊಷಿಸಲಾಗಿದೆ. ಚಾಮರಾಜನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಹಲವು ಜಿಲ್ಲೆಗಳಲ್ಲಿ ಶನಿವಾರ ಸಾಧಾರಣ ಮಳೆಯಾಗಿದ್ದು, ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಲ್ಲೂರಿನಲ್ಲಿ ಮನೆಗೆ ಭಾಗಶಃ ಹಾನಿಯಾಗಿದೆ. ಬೈಂದೂರು ತಾಲೂಕಿನ ಕಂಬದಕೋಣೆಯಲ್ಲಿ ಕೊಟ್ಟಿಗೆಗೆ ಸಿಡಿಲು ಬಡಿದು ಹಸು ಮೃತಪಟ್ಟಿದೆ.
ಮಂಗಳೂರು ನಗರವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 2, 3ರಂದು ಯಲ್ಲೊ ಅಲರ್ಟ್ ಹಾಗೂ 4 ರಿಂದ 6ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕಾರವಾರ, ಅಂಕೋಲಾ, ಭಟ್ಕಳ, ಹೊನ್ನಾವರ, ಕುಮಟಾ ಮತ್ತು ಜೊಯಿಡಾದಲ್ಲಿ ಮಳೆಯಾಗಿದೆ. ಮಳೆ, ಗಾಳಿಯ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದ ಅಬ್ಬರವೂ ಹೆಚ್ಚಿದೆ. ಬೃಹತ್ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಸಮುದ್ರದ ಅಬ್ಬರದ ನಡುವೆಯೂ ಪ್ರವಾಸಿಗರು ಕಡಲತೀರಕ್ಕೆ ಭೇಟಿ ನೀಡುತ್ತಿದ್ದಾರೆ. ಪೊಲೀಸ್ ಕಾವಲು ನಿಯೋಜಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಕಾರ್ಮಿಕ ವಲಯದಲ್ಲಿ ಮಹಿಳೆಯರ ಭಾಗವಹಿಸುವಿಕೆ ಕುಸಿತ ಕಳವಳಕಾರಿ: ಸಚಿವ ಕೃಷ್ಣಭೈರೇಗೌಡ
ಕೊಡಗು ಜಿಲ್ಲೆಯ ಕರಿಕೆ ಗ್ರಾಮದಲ್ಲಿ ಗಾಳಿ–ಮಳೆಯಿಂದ ನಿವಾಸಿಯೊಬ್ಬರ ಮನೆಯ ಚಾವಣಿ ಕುಸಿದಿದ್ದು, ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದೆ. ಜೋರು ಗಾಳಿ ಬೀಸುತ್ತಿದ್ದು, ಅಲ್ಲಲ್ಲಿ ಮರಗಳು ನೆಲಕ್ಕುರುಳಿರುವುದು ವರದಿಯಾಗಿದೆ.
ವಿಜಯಗರ ಜಿಲ್ಲೆಯ ಹೊಸಪೇಟೆ, ಹಗರಿಬೊಮ್ಮನಹಳ್ಳಿ, ಹೂವಿನ ಹಡಗಲಿ ಹಾಗೂ ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಭಾಗದಲ್ಲಿ ಮಳೆಯಾಗಿದೆ.