ಶಕ್ತಿ ಯೋಜನೆ | ರಾಜ್ಯಾದ್ಯಂತ ಏಕಕಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

Date:

Advertisements

ರಾಜ್ಯದ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕಾಗಿ ಆರಂಭಿಸಿರುವ ರಾಜ್ಯ ಸರ್ಕಾರದ ʼಶಕ್ತಿ ಯೋಜನೆʼಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಿದರು.

ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಿದರು.

“ಶಕ್ತಿ ಯೋಜನೆ ಮಹಿಳೆಯರ ಸ್ವಾವಲಂಬನೆಗೆ ಹೆಚ್ಚು ಅನುಕೂಲವಾಗಲಿದೆ. ವಿದ್ಯಾರ್ಥಿನಿಯರೂ ಸೇರಿದಂತೆ ಮಹಿಳೆಯರು ಇದರ ಅನುಕೂಲ ಪಡೆಯಬಹುದು. ಕರ್ನಾಟಕದ ಜನತೆಗೆ ಮಾತು ಕೊಟ್ಟಂತೆ ನಡೆದ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯನವರ ಸರ್ಕಾರ” ಎಂದು ಶ್ಲಾಘನೆ ವ್ಯಕ್ತಪಡಿಸಿದರು.

Advertisements

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌ ಎಸ್‌ ಬೋಸರಾಜು ಅವರು ಮಡಿಕೇರಿಯಲ್ಲಿ ಶಕ್ತಿ ಯೋಜನೆಗೆ ಚಾಲನೆ

“ಕಾಂಗ್ರೆಸ್‌ ಸರ್ಕಾರ ರಾಜ್ಯದ ನಿವಾಸಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಸರ್ಕಾರ ಕಲ್ಪಿಸಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ನಗರ ಸಾರಿಗೆ, ಸಾಮಾನ್ಯ ಮತ್ತು ವೇಗದೂತ ಬಸ್ಸುಗಳಲ್ಲಿ ಮಹಿಳೆಯರು ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಸರ್ಕಾರ ಅವಕಾಶ ಮಾಡಿದೆ” ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಹೇಳಿದರು.

“ಜಿಲ್ಲೆಯಲ್ಲಿ 91 ಬಸ್‌ಗಳು ಸಂಚರಿಸುತ್ತಿದ್ದು, ಇನ್ನೂ ಹೆಚ್ಚಿನ ಬಸ್‌ಗಳ ಸೌಕರ್ಯ ಬೇಕಿದೆ. ಜೊತೆಗೆ ವಿರಾಜಪೇಟೆಯಲ್ಲಿಯೂ ಕೆಎಸ್‍ಆರ್‌ಟಿಸಿ ಘಟಕ ಸ್ಥಾಪನೆಗೆ ಕ್ರಮ ವಹಿಸಲಾಗುವುದು. ಸಾರ್ವಜನಿಕ ಸಾರಿಗೆ ಸಂಸ್ಥೆಯಲ್ಲಿ ಪ್ರಯಾಣ ಮಾಡುವುದರಿಂದ ಹಲವು ಸಮಸ್ಯೆಗಳು ಬೆಳಕಿಗೆ ಬರುತ್ತವೆ. ಅದನ್ನು ಸರ್ಕಾರದ ಗಮನಕ್ಕೂ ತರಬಹುದು. ಯಾವುದೇ ರೀತಿಯ ದೂರು ಬರದಂತೆ ಅಧಿಕಾರಿಗಳು ಎಚ್ಚರದಿಂದ ಕಾರ್ಯನಿರ್ವಹಿಸಬೇಕು” ಎಂದು ತಿಳಿಸಿದರು.

ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಶಾಸಕ ದರ್ಶನ್‌ ಧ್ರುವನಾರಾಯಣ್‌ ಶಕ್ತಿ ಯೋಜನೆಗೆ ಚಾಲನೆ ನೀಡಿದರು.

ಮಹಿಳೆಯರಿಗೆ ಜೀರೋ ಟಿಕೆಟ್ ನೀಡಿ ಮಾತನಾಡಿದ ದರ್ಶನ್‌ ಧ್ರುವನಾರಾಯಣ್‌ ಅವರು, “ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುತ್ತಿದೆ. ಅದರಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣದ ಯೋಜನೆಗೆ ಚಾಲನೆ ನೀಡುತ್ತಿರುವುದು ಸಂತಸ ತಂದಿದೆ” ಎಂದು ನುಡಿದರು.

ಬೆಳಗಾವಿಯಲ್ಲಿ ಸಚಿವ ಸತೀಶ ಜಾರಕಿಹೊಳಿಯರು ಶಕ್ತಿ ಯೋಜನೆಗೆ ಚಾಲನೆ ನೀಡಿದರು

“ರಾಜ್ಯದಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ “ಶಕ್ತಿ” ಯೋಜನೆಯ ಸದ್ಬಳಕೆ‌ ಮಾಡಿಕೊಂಡು ಮಹಿಳೆಯರು ಸಬಲರಾಗಬೇಕು. ಈ ಯೋಜನೆಯಡಿ ಶೈಕ್ಷಣಿಕ ಪ್ರವಾಸ, ವೃತ್ತಿ ಕೌಶಲ ವೃದ್ಧಿಯಂತಹ ಉದ್ದೇಶಗಳಿಗೆ ಬಳಕೆ ಮಾಡಿಕೊಂಡು ಮಹಿಳೆಯರು ಎಲ್ಲ ರೀತಿಯಿಂದಲೂ ಸಬಲರಾಗಬೇಕು” ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಮಹಿಳೆಯರಿಗೆ ಕಿವಿಮಾತು ಹೇಳಿದರು.

ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಆರ್‌ ಪಾಟೀಲ್‌ ಶಕ್ತಿ ಯೋಜನೆಗೆ ಚಾಲನೆ ನೀಡಿದರು.

“ರಾಜ್ಯ ಹಾಗೂ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಎಂದಿಗೂ ಬದ್ಧವಾಗಿರುತ್ತದೆ. ಶಕ್ತಿ ಯೋಜನೆಯಿಂದ ಮಹಿಳೆಯರ ಸಬಲೀಕರಣಕ್ಕೆ ಅನುಕೂಲವಾಗಲಿದೆ” ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಆರ್.ಪಾಟೀಲ್ ಅವರು ಹೇಳಿದರು.

“ಬಸ್‍ಗಳಲ್ಲಿ ಮಹಿಳೆಯರಿಗಾಗಿ ಉಚಿತ ಪ್ರಯಾಣದ ಸೌಲಭ್ಯವನ್ನು ಸರ್ಕಾರದಿಂದ ನೀಡಲಾಗಿದ್ದು, ಈ ಯೋಜನೆಯಡಿ ಆಗುವಂತಹ ಎಲ್ಲ ಖರ್ಚುಗಳನ್ನು ಸರ್ಕಾರದಿಂದಲೇ ಭರಿಸಲಾಗುತ್ತದೆ. ಇದರಿಂದ ಸಾರಿಗೆ ನಿಗಮಗಳಿಗೆ ಯಾವುದೇ ನಷ್ಟವಾಗುವುದಿಲ್ಲ” ಎಂದು ತಿಳಿಸಿದರು.

“ಸಾರಿಗೆ ಇಲಾಖೆಯ ಅಧಿಕಾರಿಗಳು, ಬಸ್ ಚಾಲಕರು ಹಾಗೂ ನಿರ್ವಾಹಕರಾಗಲಿ ಶಕ್ತಿ ಯೋಜನೆಯಡಿ ಪ್ರಯಾಣಸುವ ಮಹಿಳೆಯರೊಂದಿಗೆ ಗೌರವದಿಂದ ವರ್ತಿಸಬೇಕು. ಒಂದು ವೇಳೆ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲಿ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್‌ ಶಕ್ತಿ ಯೋಜನೆಗೆ ಚಾಲನೆ ನೀಡಿದರು.

“ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮಹಿಳೆಯರು ಶಕ್ತಿ ಯೋಜನೆಯನ್ನು ಸದುಪಯೋಗ ಪಡಿಸಿಕೊಂಡು ಸಬಲೀಕರಣ ಸಾಧಿಸಬೇಕು” ಎಂದು ಕಾನೂನು ಸಂಸದೀಯ ವ್ಯವಹಾರಗಳು, ಶಾಸನ ರಚನೆ, ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ನುಡಿದರು.

“ಜಿಲ್ಲೆಯ ಎಲ್ಲ‌ ಗ್ರಾಮಗಳಿಗೆ ಒಂದು ತಿಂಗಳಲ್ಲಿ ಬಸ್ ಸಾರಿಗೆ ಸೌಲಭ್ಯ ಒದಗಿಸಲಾಗುವುದು. ಈ ಬಗ್ಗೆ ವಿವರವಾದ ಮಾಹಿತಿಯನ್ನು ಸಂಬಂಧಿಸಿದ ಇಲಾಖೆಯಿಂದ ಪಡೆದು, ಜಿಲ್ಲೆಯ ಎಲ್ಲ ಗ್ರಾಮದ ಎಲ್ಲ ಮಹಿಳೆಯರಿಗೆ ಸಾರಿಗೆ ಬಸ್‌ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ರಾಜಧಾನಿ ಸೇರಿ ವಿವಿಧ ಜಿಲ್ಲೆಗಳಲ್ಲಿ ʼಶಕ್ತಿ ಯೋಜನೆʼ ಜಾರಿಯ ಸಂಭ್ರಮ

ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಮಾತನಾಡಿ, “ಶಕ್ತಿ ಯೋಜನೆಯು ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿದೆ. ಗದಗ ಜಿಲ್ಲೆಯ ಸಾರಿಗೆ ಘಟಕವು 1991ರಲ್ಲಿ ಆರಂಭವಾಗಿ ನಿರಂತರ ಸೇವೆ ಒದಗಿಸುತ್ತಾ ಬಂದಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 560 ಬಸ್‌ಗಳ ಸೇವೆ ನಿರಂತರವಾಗಿದೆ. ಪ್ರತಿದಿನ 1,75,000 ಪ್ರಯಾಣಿಕರಿಗೆ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಕ್ಕೆ ಅವಕಾಶ ನೀಡಿದೆ. ಜಿಲ್ಲೆಯ 335 ಗ್ರಾಮಗಳಲ್ಲಿ ಸಾರಿಗೆ ಬಸ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲ ಗ್ರಾಮಗಳಿಗೂ ಬಸ್ ವ್ಯವಸ್ಥೆ ತಲುಪಲಿದೆ. ಯೋಜನೆಯ ಸದುಪಯೋಗವನ್ನು ಎಲ್ಲ ಮಹಿಳೆಯರೂ ಪಡೆಯಬೇಕು” ಎಂದರು ಹೇಳಿದರು.

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಶಕ್ತಿ ಯೋಜನೆಗೆ ಚಾಲನೆ ನೀಡಿದರು.

“ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆ ಉಪಯೋಗವನ್ನು ಮಹಿಳೆಯರು ಪಡೆದುಕೊಂಡು ಸ್ವಾವಲಂಬಿಗಳಾಗಬೇಕು. ದುರಾಡಳಿತ ಭ್ರಷ್ಟಾಚಾರ ಕೊನೆಗೊಳಿಸಿ ರಾಜ್ಯವನ್ನು ಅಭಿವೃ‌ದ್ಧಿಯತ್ತ ಕೊಂಡೊಯ್ಯಲು ಜನರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಸರ್ಕಾರ ಶ್ರಮಿಸಲಿದೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಕರೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X