ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಮಹಾಪರಿನಿಬ್ಬಾಣ ದಿನ ಅಂಗವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಅಂಬೇಡ್ಕರ್ ಅವರ ಪುತ್ಥಳಿ ಮತ್ತು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಗೌರವ ನಮನ ಸಲ್ಲಿಸಲಾಯಿತು.
ಸುವರ್ಣಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಸಚಿವರಾದ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ, ಕೆ.ಹೆಚ್.ಮುನಿಯಪ್ಪ, ಬಿ.ನಾಗೇಂದ್ರ, ಡಾ.ಶರಣಪ್ರಕಾಶ ಪಾಟೀಲ ಸೇಡಂ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನಪರಿಷತ್ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ಸೇರಿದಂತೆ ಅನೇಕ ಶಾಸಕರು, ಗಣ್ಯರು ಈ ವೇಳೆ ಹಾಜರಿದ್ದರು.
ಈ ಸುದ್ದಿ ಓದಿದ್ದೀರಾ? ಬಿಸಿಯೂಟ ಯೋಜನೆಗೆ ಶಾಲಾ ಶಿಕ್ಷಕರ ಬಳಕೆಯಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿ: ರಮೇಶ್ ಬಾಬು
ಬಿಬಿಎಂಪಿ ಮುಖ್ಯ ಕಚೇರಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ರವರ 67ನೇ ವರ್ಷದ ಮಹಾ ಪರಿನಿಬ್ಬಾಣ ದಿನಾಚರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಚೇರಿಯ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ರವರ ಪ್ರತಿಮೆಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ರವರು ಮಾಲಾರ್ಪಣೆ ಮಾಡಿ ಪುಷ್ಪನಮನ ಅರ್ಪಿಸಿದರು.
ಈ ವೇಳೆ ವಿಶೇಷ ಆಯುಕ್ತರಾದ ಡಾ. ಕೆ ಹರೀಶ್ ಕುಮಾರ್, ರೆಡ್ಡಿ ಶಂಕರ ಬಾಬು, ರಾಮಚಂದ್ರನ್, ವಲಯ ಆಯುಕ್ತರಾದ ಸ್ನೇಹಲ್, ವಿನೋತ್ ಪ್ರಿಯಾ, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.