ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಅಂದಾಜಿಸಿದ್ದು, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸೂಚನೆ ದೊರೆತಿದೆ.
ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಮುನ್ಸೂಚನೆಯಿದೆ. ಬುಧವಾರ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ, ಕೊಪ್ಪಳ, ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲಿ ಬಿರುಗಾಳಿ ಸಮೇತ ಸಾಧಾರಣ ಮಳೆಯಾಗಲಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಮಳೆಯಾಗುವ ಲಕ್ಷಣವಿದೆ. ತೀರ ಪ್ರದೇಶದಲ್ಲಿ ವಾಸಿಸುವ ಜನರಿಗೆ ಮತ್ತು ಮೀನುಗಾರರಿಗೆ ಎಚ್ಚರಿಕೆಯಿಂದ ಇರಲು ಇಲಾಖೆ ಸೂಚನೆ ನೀಡಿದೆ.
ಉತ್ತರ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ನಿರಂತರ ಗಾಳಿ-ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ವರದಿ ಮಾಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು ಸುತ್ತಮುತ್ತ ಹಗುರ ಮಳೆಯಾಗುವ ಸಂಭವವಿದೆ.





